
ವಿಜಯಪುರ, 26 ಜುಲೈ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಮುಳವಾಡ ಕೈಗಾರಿಕಾ ಪ್ರದೇಶದ ರೈತರ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮೂಲಕ ಬಾಕಿ ಉಳಿದಿರುವ ವಿವಿಧ ಸಮಸ್ಯೆಗಳಿಗೆ ಕಾನೂನಿನ ಚೌಕಟ್ಟಿನೊಳಗೆ ಶೀಘ್ರ ಪರಿಹಾರ ಕಲ್ಪಿಸುವ ಭರವಸೆಯನ್ನು ಸಚಿವ ಎಂ ಬಿ ಪಾಟೀಲ್
ನೀಡಿದರು.
ಮುಳವಾಡ ಕೈಗಾರಿಕಾ ಪ್ರದೇಶದ ರೈತರು ಇಂದು ಸಚಿವ ಎಂ.ಬಿ. ಪಾಟೀಲ ಅವರನ್ನು ಭೇಟಿ ಮಾಡಿ, 2008ರಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ಭೂಸ್ವಾಧೀನಗೊಂಡ ಬಳಿಕ ಎದುರಾಗಿರುವ ಹಲವು ಸಮಸ್ಯೆಗಳು ಹಾಗೂ ಕೆಐಎಡಿಬಿಯಿಂದ ಈಡೇರಬೇಕಿರುವ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು. ರೈತರ ಅಹವಾಲುಗಳನ್ನು ಆಲಿಸಿದ ಸಚಿವರು, ಶೀಘ್ರದಲ್ಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರತಿಯೊಂದು ವಿಷಯವನ್ನು ಪರಿಶೀಲಿಸಿ ಕಾನೂನಿನ ವ್ಯಾಪ್ತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಸುಮಾರು 18 ವರ್ಷಗಳು ಕಳೆದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ಇದರಿಂದ ಭೂಮಿ ಕಳೆದುಕೊಂಡ ರೈತರು ಹಾಗೂ ಸ್ಥಳೀಯ ಯುವಕರು ನಿರೀಕ್ಷಿಸಿದ್ದ ಉದ್ಯೋಗ ಮತ್ತು ಅಭಿವೃದ್ಧಿ ಅವಕಾಶಗಳು ಸಾಕಾರವಾಗಿಲ್ಲ ಎಂದು ಹೇಳಿದರು.
ಆದರೆ ಇದೀಗ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಬೃಹತ್ ಮಟ್ಟದ ಹೂಡಿಕೆಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದ್ದು, ಕ್ಯಾಂಪಾಕೋಲಾ ಸೇರಿದಂತೆ ಎರಡು ರಿಂದ ಮೂರು ಪ್ರಮುಖ ಕೈಗಾರಿಕೆಗಳನ್ನು ಆರಂಭಿಸಲು ಅಗತ್ಯ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ತಿಳಿಸಿದರು.
ಈ ಕೈಗಾರಿಕೆಗಳು ಸ್ಥಾಪನೆಯಾದ ಬಳಿಕ ಭೂಮಿ ಕಳೆದುಕೊಂಡ ರೈತ ಕುಟುಂಬಗಳ ಮಕ್ಕಳಿಗೆ ಹಾಗೂ ಸ್ಥಳೀಯ ಯುವಜನತೆಗೆ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ. ಇದರಿಂದ ಮುಳವಾಡ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳು ವಿಸ್ತರಿಸಿ, ವ್ಯಾಪಾರ-ವಹಿವಾಟು, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜೀವನಮಟ್ಟ ಸುಧಾರಣೆಗೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.
ರಾಜ್ಯದ ಕೈಗಾರಿಕಾ ಬೆಳವಣಿಗೆಯೊಂದಿಗೆ ರೈತರ ಹಿತಾಸಕ್ತಿಯನ್ನೂ ಸಮಾನವಾಗಿ ಕಾಪಾಡುವುದು ಸರ್ಕಾರದ ಆದ್ಯತೆಯಾಗಿದ್ದು, ಕೈಗಾರಿಕಾ ಅಭಿವೃದ್ಧಿ ಮತ್ತು ರೈತರ ನ್ಯಾಯಸಮ್ಮತ ಬೇಡಿಕೆಗಳ ನಡುವೆ ಸಮತೋಲನ ಸಾಧಿಸುವ ಉದ್ದೇಶದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
ರೈತರ ಮನವಿಗೆ ಸ್ಪಂದಿಸಿರುವ ಸರ್ಕಾರದ ಈ ಭರವಸೆಯಿಂದ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕಾ ಚಟುವಟಿಕೆಗಳು ವೇಗ ಪಡೆಯುವ ನಿರೀಕ್ಷೆ ಮೂಡಿದ್ದು, ದೀರ್ಘಕಾಲದಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲಿದ್ದ ಪ್ರದೇಶಕ್ಕೆ ಹೊಸ ಚೈತನ್ಯ ದೊರೆಯಲಿದೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande