
ಬೆಂಗಳೂರು, 26 ಜುಲೈ (ಹಿ.ಸ.):
ಆ್ಯಂಕರ್:
ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಲು ಭಾರತೀಯ ಜನತಾ ಪಾರ್ಟಿ ಸಂಪೂರ್ಣ ಸಜ್ಜಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಆಗಿರುವ ಲೋಪಗಳು, ಫಲಾನುಭವಿಗಳ ಕಡಿತದ ಯತ್ನ, ಕೆಪಿಎಸ್ಸಿ ಅಕ್ರಮಗಳು ಹಾಗೂ ರಾಜ್ಯದಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿಯಂತಹ ಜ್ವಲಂತ ಸಮಸ್ಯೆಗಳ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಸಮರ ಸಾರುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯ ಸರ್ಕಾರದ ಖಜಾಾನೆ ಖಾಲಿಯಾಗಿದೆ ಮತ್ತು ಅಭಿವೃದ್ಧಿ ಸಂಪೂರ್ಣ ಕುಸಿದಿದೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದರು. ಗೃಹಲಕ್ಷ್ಮಿ ಯೋಜನೆಯಲ್ಲಿ ಸುಧಾರಣೆ ಮಾಡುವ ನೆಪದಲ್ಲಿ ಮಹಿಳೆಯರಿಗೆ ಸಿಗಬೇಕಾದ ಹಣಕ್ಕೆ ಕತ್ತರಿ ಹಾಕಲಾಗುತ್ತಿದೆ ಮತ್ತು ಯೋಜನೆಯನ್ನು ಸರಿಯಾಗಿ ನಿರ್ವಹಿಸಲು ವಿಫಲವಾಗಿರುವ ಸರ್ಕಾರವು ಬಡವರ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆಪಾದಿಸಿದರು.
ಇನ್ನು ಇದೇ ವೇಳೆಯಲ್ಲಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳ ನಿರ್ವಹಣೆಯಲ್ಲಿ ಉಂಟಾಗಿರುವ ಗೊಂದಲಗಳು ಹಾಗೂ ಫಲಾನುಭವಿಗಳ ಪಟ್ಟಿಯಿಂದ ಹೆಸರು ಕೈಬಿಡುತ್ತಿರುವುದರ ಕುರಿತು ಸರ್ಕಾರದ ವಿರುದ್ಧ ದಾಖಲೆ ಸಮೇತ ಧ್ವನಿ ಎತ್ತುವುದು. ಯುವಕರ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಕೆಪಿಎಸ್ಸಿ ಅವ್ಯವಹಾರಗಳ ಬಗ್ಗೆ ಸ್ಪಷ್ಟ ಉತ್ತರ ಪಡೆಯುವುದು. ರಾಜ್ಯದಲ್ಲಿ ಮಳೆ ಹಾಗೂ ಬರದಿಂದ ಕಷ್ಟಪಡುತ್ತಿರುವ ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ಇರುವುದು ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ನೀಡದಿರುವ ಸರ್ಕಾರದ ವೈಫಲ್ಯವನ್ನು ಎಳೆಎಳೆಯಾಗಿ ಬಿಚ್ಚಿಡುವುದಾಗಿ ತಿಳಿಸಿದ್ದಾರೆ.
ಜೆಡಿಎಸ್ ಜತೆ ಸಮನ್ವಯ ಸಾಧಿಸಿ, ಜೆಡಿಎಸ್ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಜತೆಗೂಡಿ ಜಂಟಿಯಾಗಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಸದನದಲ್ಲಿ ಬಲವಾಗಿ ಎದುರಿಸಲಾಗುವುದು ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII