
ಬೆಂಗಳೂರು, 27 ಜುಲೈ (ಹಿ.ಸ.):
ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿಗಳ ಭ್ರಷ್ಟಾಚಾರದ ವಿರುದ್ಧ ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೆಪಿಎಸ್ಸಿಯಲ್ಲಿ ನಡೆಯುತ್ತಿರುವ ಆಂತರಿಕ ತನಿಖೆಯು ಕಣ್ಣೊರೆಸುವ ತಂತ್ರವಾಗಿದ್ದು, ಸತ್ಯ ಹೊರಬರಲು ಈ ಇಡೀ ಹಗರಣವನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಮಟ್ಟದಲ್ಲಿ 'ನೀಟ್' ಪರೀಕ್ಷೆಯ ಅವ್ಯವಹಾರಗಳ ವಿರುದ್ಧ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರು ದೊಡ್ಡ ಮಟ್ಟದ ಹೋರಾಟಗಳನ್ನು ನಡೆಸುತ್ತಾರೆ. ಆದರೆ, ಅದೇ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿರುವ ಕರ್ನಾಟಕದಲ್ಲೇ ಕೆಪಿಎಸ್ಸಿ ಮೂಲಕ ನೂರಾರು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಮತ್ತು ಕೋಟ್ಯಂತರ ರೂ.ಗಳ ಭ್ರಷ್ಟಾಚಾರ ತಾಂಡವವಾಡುತ್ತಿದ್ದರೂ ಇಲ್ಲಿ ಯಾಕೆ ಯಾರೂ ಬಾಯಿಬಿಡುತ್ತಿಲ್ಲ ಎಂದು ಪ್ರಶ್ನಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ದೆಹಲಿಯಲ್ಲಿ ನೀಟ್ ಮಾತ್ರ ಕಾಣುತ್ತದೆಯೇ ವಿನಃ, ಕರ್ನಾಟಕದಲ್ಲಿ ನಡೆಯುತ್ತಿರುವ ಕೆಪಿಎಸ್ಸಿ ಹಗರಣ ಅವರ ಕಣ್ಣಿಗೆ ಬೀಳುತ್ತಿಲ್ಲವೇ ಎಂದು ಅವರು ತರಾಟೆಗೆ ತೆಗೆದುಕೊಂಡರು.
ಪಶುವೈದ್ಯಾಧಿಕಾರಿಗಳು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ತಲಾ 2 ಕೋಟಿ ರೂ.ಗಳವರೆಗೆ ಹಣ ಪಡೆದು ಹುದ್ದೆಗಳನ್ನು ಮಾರಾಟ ಮಾಡಲಾಗಿದೆ. ಒಟ್ಟಾರೆ ಇದು ಅಂದಾಜು 800 ಕೋಟಿ ರೂ.ಗಳ ಬೃಹತ್ ಹಗರಣವಾಗಿದೆ ಎಂದು ಆರೋಪಿಸಿದರು. ಹಗರಣದಲ್ಲಿ ಭಾಗಿಯಾಗಿರುವವರೇ ಅಥವಾ ಸಂಸ್ಥೆಯೊಳಗಿನವರೇ ಆಂತರಿಕ ತನಿಖೆ ನಡೆಸಿದರೆ ನೈಜ ಸಂಗತಿಗಳು ಹೊರಬರುವುದಿಲ್ಲ. ಆದ್ದರಿಂದ ಪ್ರಕರಣದ ಸಮಗ್ರ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದಿದ್ದಾರೆ.
ರಾಜ್ಯದಲ್ಲಿ ಪರೀಕ್ಷೆಗಳಲ್ಲಿ ಅಕ್ರಮಗಳು ಅಥವಾ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಜಿಲ್ಲಾಧಿಕಾರಿಗಳೇ ನೇರ ಹೊಣೆ ಎಂದು ಸರ್ಕಾರ ಜಾರಿಕೊಳ್ಳುತ್ತದೆ. ಆದರೆ, ಕೇಂದ್ರದಲ್ಲಿ ಇಂತಹ ಘಟನೆಗಳು ನಡೆದರೆ ಮಂತ್ರಿಗಳ ರಾಜೀನಾಮೆ ಕೇಳುತ್ತಾರೆ. ಇದು ಕಾಂಗ್ರೆಸ್ ಸರ್ಕಾರದ ಡಬಲ್ ಸ್ಟ್ಯಾಂಡರ್ಡ್ ನೀತಿಯಾಗಿದೆ ಎಂದು ಟೀಕಿಸಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII