
ಬೆಂಗಳೂರು, 27 ಜುಲೈ (ಹಿ.ಸ.):
ಆ್ಯಂಕರ್:ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹80 ಲಕ್ಷದವರೆಗೆ ಲಂಚ ಪಡೆದಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುತ್ತಿರುವ ಆಂತರಿಕ ತನಿಖೆಯನ್ನು ರದ್ದುಗೊಳಿಸಿ, ಪ್ರಕರಣವನ್ನು ಸಿಬಿಐ ಅಥವಾ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಯವರ ನೇತೃತ್ವದ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಒತ್ತಾಯಿಸಿದ್ದಾರೆ.
ಈ ಸಂಬಂಧ ಕೆಪಿಎಸ್‌ಸಿ ಅಧ್ಯಕ್ಷರಿಗೆ ಪತ್ರ ಸಲ್ಲಿಸಿದ ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಸುರೇಶ್ ಕುಮಾರ್ ಹಾಗೂ ಅಭ್ಯರ್ಥಿಗಳ ಪ್ರತಿನಿಧಿಗಳೊಂದಿಗೆ ಆಯೋಗದ ಅಧ್ಯಕ್ಷರು ಮತ್ತು ಕಾರ್ಯದರ್ಶಿಯನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರ್. ಅಶೋಕ, ನೇಮಕಾತಿ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿರುವ ಗಂಭೀರ ಆರೋಪಗಳಿರುವಾಗ, ಕೆಪಿಎಸ್‌ಸಿಯೇ ತನ್ನ ವಿರುದ್ಧ ಆಂತರಿಕ ತನಿಖೆ ನಡೆಸುವುದು ನೈಸರ್ಗಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿದ್ದು, ಸಾರ್ವಜನಿಕರಲ್ಲಿ ಯಾವುದೇ ವಿಶ್ವಾಸ ಮೂಡಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಅಲ್ಲದೆ, ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯ ಸಂಪೂರ್ಣ ತನಿಖೆ ನಡೆಸಿ, ಅಧಿಕಾರಿಗಳು, ಮಧ್ಯವರ್ತಿಗಳು ಹಾಗೂ ಫಲಾನುಭವಿಗಳ ಪಾತ್ರವನ್ನು ಪರಿಶೀಲಿಸಬೇಕು. ಇತ್ತೀಚಿನ ಇತರ ಕೆಪಿಎಸ್‌ಸಿ ನೇಮಕಾತಿಗಳಲ್ಲಿಯೂ ಇದೇ ರೀತಿಯ ಅಕ್ರಮಗಳಾಗಿವೆಯೇ ಎಂಬುದನ್ನೂ ತನಿಖೆಯ ವ್ಯಾಪ್ತಿಗೆ ಒಳಪಡಿಸಬೇಕು. ತನಿಖಾ ವರದಿಯನ್ನು ಸಾರ್ವಜನಿಕಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಅಭ್ಯರ್ಥಿಗಳ ಮನವಿಯಂತೆ ಅಗತ್ಯವಿದ್ದರೆ ಮರುಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.
ಹಣ ಪಡೆದ ಅಭ್ಯರ್ಥಿಗಳನ್ನು ಹೊರರಾಜ್ಯಕ್ಕೆ ಕರೆದೊಯ್ದು ಪ್ರಶ್ನೆಪತ್ರಿಕೆ ನೀಡಿ ತರಬೇತಿ ನೀಡಲಾಗಿದೆ ಎಂಬ ಆರೋಪಗಳಿದ್ದು, ಒಂದು ಆಡಿಯೋ ಕೂಡ ಹೊರಬಂದಿದೆ ಎಂದು ಹೇಳಿದರು. 400 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದರೆ ಸುಮಾರು ₹800 ಕೋಟಿ ವ್ಯವಹಾರ ನಡೆದಿರಬಹುದೆಂಬ ಅನುಮಾನ ವ್ಯಕ್ತಪಡಿಸಿದ ಅವರು, ಸರ್ಕಾರ ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕೆಂದು ಒತ್ತಾಯಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.