
ವಿಜಯಪುರ, 28 ಜುಲೈ (ಹಿ.ಸ.):
ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಕನ್ನೊಳ್ಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ವತಿಯಿಂದ ₹3.61 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಎರಡು ಮಹತ್ವದ ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ರೈತರಿಗೆ ನೀರಾವರಿ ಸೌಲಭ್ಯ ವಿಸ್ತರಿಸುವುದರ ಜೊತೆಗೆ ಅಂತರ್ಜಲ ಮಟ್ಟ ಹೆಚ್ಚಳಕ್ಕೂ ಸಹಕಾರಿಯಾಗಲಿದೆ ಎಂದು ಶಾಸಕ ಅಶೋಕ್ ಮನಗೂಳಿ ತಿಳಿಸಿದ್ದಾರೆ.
ಗ್ರಾಮದ ಒಣ ಹಳ್ಳದ (ಸರ್ವೇ ನಂ.302) ಬಳಿ ₹181.83 ಲಕ್ಷ ಹಾಗೂ ಹಸಿ ಹಳ್ಳದ (ಸರ್ವೇ ನಂ.253) ಬಳಿ ₹179.26 ಲಕ್ಷ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಒಟ್ಟು ₹3.61 ಕೋಟಿಗೂ ಅಧಿಕ ಅನುದಾನದಲ್ಲಿ ಈ ಅಭಿವೃದ್ಧಿ ಯೋಜನೆ ಅನುಷ್ಠಾನಗೊಳ್ಳುತ್ತಿದೆ.
ಭೂಮಿ ಪೂಜೆಯ ಬಳಿಕ ಮಾತನಾಡಿದ ಅವರು, ಕೃಷಿಯೇ ಈ ಭಾಗದ ಜನರ ಪ್ರಮುಖ ಜೀವನಾಧಾರವಾಗಿದ್ದು, ನೀರಿನ ಕೊರತೆಯಿಂದ ರೈತರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದರು. ಈ ಬ್ಯಾರೇಜ್ಗಳ ನಿರ್ಮಾಣದಿಂದ ಮಳೆ ನೀರನ್ನು ಸಂಗ್ರಹಿಸಿ ಭೂಗರ್ಭ ಜಲಮಟ್ಟ ಹೆಚ್ಚಿಸಲು ಸಾಧ್ಯವಾಗಲಿದ್ದು, ರೈತರ ಬಾವಿ ಮತ್ತು ಕೊಳವೆಬಾವಿಗಳಲ್ಲಿ ನೀರಿನ ಲಭ್ಯತೆ ಹೆಚ್ಚಲಿದೆ. ಇದರಿಂದ ವರ್ಷಪೂರ್ತಿ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದ್ದು, ರೈತರ ಆದಾಯವೂ ಹೆಚ್ಚುವ ನಿರೀಕ್ಷೆಯಿದೆ ಎಂದು ಹೇಳಿದರು.
ಅಭಿವೃದ್ಧಿ ಕಾಮಗಾರಿಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದ್ದು, ರೈತರ ಬದುಕಿಗೆ ಅನುಕೂಲವಾಗುವಂತಹ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಈ ಯೋಜನೆಗಳಿಂದ ಕನ್ನೊಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ದೀರ್ಘಕಾಲೀನ ಪ್ರಯೋಜನ ದೊರೆಯಲಿದ್ದು, ಕೃಷಿ ಉತ್ಪಾದಕತೆ ಹೆಚ್ಚುವುದರೊಂದಿಗೆ ನೀರಿನ ಸಂರಕ್ಷಣೆಯಲ್ಲಿಯೂ ಮಹತ್ವದ ಬದಲಾವಣೆ ಕಾಣಬಹುದಾಗಿದೆ. ರಸ್ತೆ ಸಂಪರ್ಕಕ್ಕೂ ಅನುಕೂಲವಾಗುವ ಬ್ರಿಡ್ಜ್ ಕಂ ಬ್ಯಾರೇಜ್ಗಳು ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಸೇರ್ಪಡೆಯಾಗಲಿವೆ.
ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು, ಪಕ್ಷದ ಮುಖಂಡರು, ಕನ್ನೊಳ್ಳಿ ಗ್ರಾಮದ ಹಿರಿಯರು, ಗ್ರಾಮಸ್ಥರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದು, ಅಭಿವೃದ್ಧಿ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಲಿ ಎಂದು ಆಶಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande