
ಬೆಂಗಳೂರು, 28 ಜುಲೈ (ಹಿ.ಸ.):
ಆ್ಯಂಕರ್:ರಾಜ್ಯದಲ್ಲಿ ನೇಮಕಾತಿ ಅಕ್ರಮಗಳು, ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯವೈಖರಿಯನ್ನು ಖಂಡಿಸಿ ಫ್ರೀಡಂ ಪಾರ್ಕ್‌ನಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ ಅವರು, ರಾಜ್ಯ ಸರ್ಕಾರವು ಖಾಲಿ ಹುದ್ದೆಗಳನ್ನು ಭರ್ತಿ ಮಾಡದೇ ಯುವಕರ ಭವಿಷ್ಯಕ್ಕೆ ಧಕ್ಕೆ ಉಂಟುಮಾಡಿದೆ ಎಂದು ಟೀಕಿಸಿದರು. ರಾಜ್ಯದಲ್ಲಿಯೂ ಯುಪಿಎಸ್‌ಸಿ ಮಾದರಿಯ ಪಾರದರ್ಶಕ ಹಾಗೂ ತಂತ್ರಜ್ಞಾನ ಆಧಾರಿತ ನೇಮಕಾತಿ ವ್ಯವಸ್ಥೆ ಜಾರಿಗೊಳಿಸಬೇಕು ಹಾಗೂ ಕೆಪಿಎಸ್‌ಸಿ ಸೇರಿದಂತೆ ಎಲ್ಲಾ ನೇಮಕಾತಿ ಅಕ್ರಮಗಳನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.
ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಸಿಗುವವರೆಗೆ ಮತ್ತು ನೇಮಕಾತಿ ಅಕ್ರಮಗಳ ವಿರುದ್ಧ ಬಿಜೆಪಿ ತನ್ನ ಹೋರಾಟವನ್ನು ಸದನದ ಒಳಗೂ ಹೊರಗೂ ಮುಂದುವರಿಸಲಿದೆ ಎಂದು ವಿಜಯೇಂದ್ರ ಹೇಳಿದರು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.