
ವಿಜಯಪುರ, 28 ಜುಲೈ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15ರಂದು ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹಬ್ಬವು ದೇಶಭಕ್ತಿಯನ್ನು ಬಲಪಡಿಸುವ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸುವ ಮಹತ್ವದ ದಿನವಾಗಿದ್ದು, ಕಾರ್ಯಕ್ರಮದ ಪ್ರತಿಯೊಂದು ಹಂತವೂ ಅತ್ಯುತ್ತಮ ರೀತಿಯಲ್ಲಿ ನೆರವೇರಬೇಕು ಎಂದು ತಿಳಿಸಿದರು.
ಆಗಸ್ಟ್ 15ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭಕ್ಕೆ ಆಗಮಿಸುವ ಗಣ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಸಾವಿರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಮುಂಚಿತವಾಗಿಯೇ ಪೂರ್ಣಗೊಳಿಸುವಂತೆ ಸೂಚಿಸಿದರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ವಿದ್ಯುತ್ ವ್ಯವಸ್ಥೆ, ಸ್ವಚ್ಛತೆ, ವಾಹನ ನಿಲುಗಡೆ, ಭದ್ರತೆ, ಅಗ್ನಿಶಾಮಕ ವ್ಯವಸ್ಥೆ, ತುರ್ತು ವೈದ್ಯಕೀಯ ನೆರವು, ಆಂಬ್ಯುಲೆನ್ಸ್, ಶೌಚಾಲಯ ಹಾಗೂ ಇತರೆ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಧ್ವಜಾರೋಹಣ ಕಾರ್ಯಕ್ರಮ, ಪಥಸಂಚಲನ, ಗೌರವ ವಂದನೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ವಿದ್ಯಾರ್ಥಿಗಳ ಸಾಮೂಹಿಕ ಪ್ರದರ್ಶನ ಸೇರಿದಂತೆ ಎಲ್ಲ ಕಾರ್ಯಕ್ರಮಗಳಿಗಾಗಿ ಸಮರ್ಪಕ ಪೂರ್ವಾಭ್ಯಾಸ ನಡೆಸಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ, ಶಿಸ್ತು ಹಾಗೂ ಸಮಯಪಾಲನೆಗೆ ವಿಶೇಷ ಆದ್ಯತೆ ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಯಾವುದೇ ರೀತಿಯ ಲೋಪಗಳಿಗೆ ಅವಕಾಶ ನೀಡದೆ ಪ್ರತಿಯೊಂದು ಜವಾಬ್ದಾರಿಯನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸಬೇಕು. ರಾಷ್ಟ್ರೀಯ ಹಬ್ಬದ ಘನತೆಗೆ ತಕ್ಕಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಅದೇ ದಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಸಹ ಆಚರಿಸಲಾಗುವುದರಿಂದ, ಆ ಕಾರ್ಯಕ್ರಮಕ್ಕೂ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಿ, ಗೌರವಯುತವಾಗಿ ಆಚರಿಸಲು ಕ್ರಮವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪ್ರೊಬೇಷನರಿ ಐಪಿಎಸ್ ಅಧಿಕಾರಿ ಅಭಿಷೇಕ್ ಸೆಹರಾ, ಅಪರ ಜಿಲ್ಲಾಧಿಕಾರಿ ಡಾ. ಓದ್ರಾಮ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿ ಆಯೋಜನೆ ಕುರಿತು ತಮ್ಮ ಸಲಹೆಗಳನ್ನು ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಜವಾಬ್ದಾರಿಗಳ ಹಂಚಿಕೆ, ಪಥಸಂಚಲನದಲ್ಲಿ ಭಾಗವಹಿಸುವ ತಂಡಗಳ ಸಿದ್ಧತೆ, ಸಾಂಸ್ಕೃತಿಕ ಕಾರ್ಯಕ್ರಮಗಳ ರೂಪುರೇಷೆ, ಭದ್ರತಾ ಕ್ರಮಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ವ್ಯವಸ್ಥೆಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ರಾಷ್ಟ್ರೀಯ ಹಬ್ಬವನ್ನು ಜನಸಾಮಾನ್ಯರ ಭಾಗವಹಿಸುವಿಕೆಯಿಂದ ಸಂಭ್ರಮ, ಶಿಸ್ತು ಮತ್ತು ದೇಶಭಕ್ತಿಯ ಸಂದೇಶ ಸಾರುವ ರೀತಿಯಲ್ಲಿ ಆಚರಿಸಲು ಸಭೆಯಲ್ಲಿ ಒಮ್ಮತ ವ್ಯಕ್ತವಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande