
ಬಾಗಲಕೋಟೆ, 28 ಜುಲೈ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ 'ಸಂಘಟನಾ ಸೃಜನ ಅಭಿಯಾನ' ಕಾರ್ಯಕ್ರಮವು ಜಿಲ್ಲೆಯ ವಿಧಾನಸಭಾ ಕ್ಷೇತ್ರವಾದ ತೇರದಾಳದಲ್ಲಿ ಯಶಸ್ವಿಯಾಗಿ ನಡೆಯಿತು ಎಂದು ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ ಹೇಳಿದರು.
ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ನಡೆದ ಈ ಸಭೆಯಲ್ಲಿ ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯಗಳನ್ನು ಆಲಿಸಿ, ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವ ಕುರಿತು ವ್ಯಾಪಕ ಚರ್ಚೆ ನಡೆಸಲಾಯಿತು.
ಸಭೆಯನ್ನು ಎಐಸಿಸಿ ವೀಕ್ಷಕರಾದ ಡಾ. ಬೆಲ್ಲಯ್ಯ ನಾಯಕ್ ತೇಜಾವತ್ ಅವರ ನೇತೃತ್ವದಲ್ಲಿ ನಡೆಸಲಾಯಿತು. ಕೆಪಿಸಿಸಿ ವೀಕ್ಷಕರಾಗಿ ಭಾಗವಹಿಸಿದ ನಾಯಕರು ತಳಮಟ್ಟದ ಕಾರ್ಯಕರ್ತರೊಂದಿಗೆ ನೇರ ಸಂವಾದ ನಡೆಸಿ, ಸಂಘಟನೆಯ ಸ್ಥಿತಿಗತಿ, ಕಾರ್ಯಕರ್ತರ ಅಭಿಪ್ರಾಯಗಳು ಹಾಗೂ ಕ್ಷೇತ್ರದ ರಾಜಕೀಯ ಬೆಳವಣಿಗೆಗಳ ಕುರಿತು ಸಮಗ್ರ ಮಾಹಿತಿಯನ್ನು ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ವೀಕ್ಷಕರಾದ ಸೋಮಣ್ಣ ಭೇವಿನಮರದ, ಕಿರಣ್ ಮೊಗಬಸವ ಹಾಗೂ ರಫೀಕ್ ತಾಪಲ್ ಸಹ ಕಾರ್ಯನಿರ್ವಹಿಸಿ ಸಭೆಯ ಯಶಸ್ಸಿಗೆ ಸಹಕರಿಸಿದರು.
ಸಭೆಯ ಪ್ರಮುಖ ಆಕರ್ಷಣೆಯಾಗಿ ಎಐಸಿಸಿ ವೀಕ್ಷಕರು ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು, ಮಹಿಳಾ ಪ್ರತಿನಿಧಿಗಳು, ಯುವ ಮುಖಂಡರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಒಬ್ಬೊಬ್ಬರಾಗಿ ಪ್ರತ್ಯೇಕವಾಗಿ ಭೇಟಿ ಮಾಡಿ ಅವರ ಅಭಿಪ್ರಾಯಗಳನ್ನು ಆಲಿಸಿದರು.
ಸಂಘಟನೆಯ ಬಲ-ದುರ್ಬಲತೆ, ಸ್ಥಳೀಯ ಮಟ್ಟದಲ್ಲಿ ಎದುರಾಗುತ್ತಿರುವ ಸವಾಲುಗಳು, ಕಾರ್ಯಕರ್ತರ ನಿರೀಕ್ಷೆಗಳು ಹಾಗೂ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು.
ಬೂತ್ ಮಟ್ಟದಿಂದಲೇ ಸಂಘಟನೆಯನ್ನು ಗಟ್ಟಿಗೊಳಿಸುವುದು, ಯುವಕರ ಮತ್ತು ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು, ಪಕ್ಷದ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವುದು ಹಾಗೂ ಮುಂಬರುವ ರಾಜಕೀಯ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸಂಘಟನಾತ್ಮಕವಾಗಿ ಸಜ್ಜಾಗುವ ಕುರಿತು ಮಹತ್ವದ ಸಲಹೆಗಳು ಸಭೆಯಲ್ಲಿ ವ್ಯಕ್ತವಾದವು.
ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಡಿಸಿಸಿ ಅಧ್ಯಕ್ಷರಾದ ಎಸ್.ಜಿ. ನಂಜಯ್ಯ ಮಠ ಹಾಗೂ ತೇರದಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಸ್ಥಳೀಯ ಮುಖಂಡರು ಸಂಪೂರ್ಣ ಸಹಕಾರ ನೀಡಿದರು. ಅವರ ಸಂಘಟನಾ ಸಾಮರ್ಥ್ಯದಿಂದ ಸಭೆಯು ಸುಸೂತ್ರವಾಗಿ ನಡೆಯಿತು ಎಂದು ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ಹಾಗೂ ತಳಮಟ್ಟದ ಕಾರ್ಯಕರ್ತರ ಧ್ವನಿಗೆ ಆದ್ಯತೆ ನೀಡುವ ಉದ್ದೇಶದಿಂದ ನಡೆಯುತ್ತಿರುವ ಈ ಸಂಘಟನಾ ಸೃಜನ ಅಭಿಯಾನ ಮುಂದಿನ ದಿನಗಳಲ್ಲಿ ಜಿಲ್ಲೆಯ ಇತರೆ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಮುಂದುವರಿಯಲಿದ್ದು, ಪಕ್ಷದ ಬಲವರ್ಧನೆಗೆ ಮಹತ್ವದ ವೇದಿಕೆಯಾಗಲಿದೆ ಎಂದು ನಾಯಕರು ವಿಶ್ವಾಸ ವ್ಯಕ್ತಪಡಿಸಿದರು
---------------
ಹಿಂದೂಸ್ತಾನ್ ಸಮಾಚಾರ್ / jyothi deshpande