
ಬಾಗಲಕೋಟೆ, 28 ಜುಲೈ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಹಿಪ್ಪರಗಿ ಗ್ರಾಮದ ಸಮೀಪ ನಡೆದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮತ್ತಷ್ಟು ತೀವ್ರಗೊಂಡಿದ್ದು, ಪ್ರಕರಣದಲ್ಲಿ ಹೊಸ ಬೆಳವಣಿಗೆಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ್ ಪಾಟೀಲ್ ಅವರು ಮಂಗಳವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನಾ ಸ್ಥಳದಲ್ಲಿ ಸ್ಫೋಟ ಸಂಭವಿಸಿದ ಕಾರಿನ ಅವಶೇಷಗಳು, ಸುತ್ತಮುತ್ತಲಿನ ಪರಿಸ್ಥಿತಿ ಹಾಗೂ ತನಿಖೆಗೆ ಅಗತ್ಯವಾದ ವಿವಿಧ ಅಂಶಗಳನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದ ಐಜಿಪಿ, ತನಿಖೆಯ ಪ್ರಗತಿ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು.
ಸ್ಥಳದಲ್ಲಿದ್ದ ಎಫ್ಎಸ್ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ತಜ್ಞರು, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ, ವೈಜ್ಞಾನಿಕ ಸಾಕ್ಷ್ಯಗಳನ್ನು ಅತ್ಯಂತ ಸೂಕ್ಷ್ಮವಾಗಿ ಸಂಗ್ರಹಿಸುವಂತೆ ಸೂಚನೆ ನೀಡಿದರು.
ಪ್ರಕರಣದ ತನಿಖೆಯಲ್ಲಿ ಯಾವುದೇ ಆಯಾಮವನ್ನು ಕಡೆಗಣಿಸದೆ ಎಲ್ಲಾ ಸಾಧ್ಯತೆಗಳನ್ನೂ ಪರಿಶೀಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಹಿಂದಿನ ಕಾರಣಗಳು, ಸ್ಫೋಟಕ್ಕೆ ಬಳಸಿರುವ ವಸ್ತುಗಳ ಸ್ವರೂಪ, ಕಾರಿನ ಚಲನವಲನ, ಸಂಬಂಧಿತ ವ್ಯಕ್ತಿಗಳ ಮಾಹಿತಿ ಸೇರಿದಂತೆ ಎಲ್ಲ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ.
ಘಟನಾ ಸ್ಥಳದ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಅಧಿಕೃತ ಮಾಹಿತಿಯನ್ನೇ ನಂಬುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ. ಪ್ರಕರಣದ ಕುರಿತು ಸಿಸಿಟಿವಿ ದೃಶ್ಯಾವಳಿಗಳು, ತಾಂತ್ರಿಕ ಮಾಹಿತಿ ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಆಧರಿಸಿ ತನಿಖೆ ಮುಂದುವರಿದಿದೆ.
ಐಜಿಪಿ ಅವರ ಭೇಟಿ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಹೆಚ್ಚಿನ ಮಹತ್ವ ದೊರೆತಿದ್ದು, ತನಿಖೆ ವೇಗ ಪಡೆದುಕೊಂಡಿದೆ. ಘಟನೆಯ ನೈಜ ಕಾರಣವನ್ನು ಶೀಘ್ರದಲ್ಲೇ ಪತ್ತೆಹಚ್ಚುವ ವಿಶ್ವಾಸವನ್ನು ಪೊಲೀಸ್ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ಈ ವೇಳೆ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ತನಿಖಾ ತಂಡದ ಸದಸ್ಯರು, ಎಫ್ಎಸ್ಎಲ್ ತಜ್ಞರು ಹಾಗೂ ಇತರ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande