
ಬೆಂಗಳೂರು, 28 ಜುಲೈ (ಹಿ.ಸ.):
ಆ್ಯಂಕರ್:
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಕರ್ನಾಟಕದ ಹಿತಾಸಕ್ತಿಯನ್ನು ದೃಢವಾಗಿ ಕಾಪಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ. ರಾಜ್ಯದಲ್ಲಿ ನೀರಿನ ಕೊರತೆ ಮತ್ತು ಬರದ ಪರಿಸ್ಥಿತಿ ಇರುವ ಸಂದರ್ಭದಲ್ಲಿ ಕರ್ನಾಟಕದ ಪರವಾಗಿ ಸಮರ್ಥ ವಾದ ಮಂಡಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರು ಅಧಿಕಾರಿಗಳು ಮತ್ತು ಕಾನೂನು ತಜ್ಞರೊಂದಿಗೆ ತುರ್ತು ಸಭೆ ನಡೆಸಿ, ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸಿನ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿ ರಾಜ್ಯದ ಪರವಾಗಿ ಗಟ್ಟಿಯಾದ ವಾದ ಮಂಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರಾಜ್ಯದ ವಾಸ್ತವ ಸ್ಥಿತಿಯನ್ನು ಅಂಕಿ-ಅಂಶಗಳೊಂದಿಗೆ ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಟ್ಟು, ಯಾವುದೇ ಕಾರಣಕ್ಕೂ ಕರ್ನಾಟಕದ ಹಿತಕ್ಕೆ ಧಕ್ಕೆಯಾಗದಂತೆ ಹಾಗೂ ಕಾವೇರಿ ನೀರು ಬಿಡುಗಡೆ ಕುರಿತು ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಬೇಕು ಎಂದು ಆರ್. ಅಶೋಕ ತಮ್ಮ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.