
ಬಾಗಲಕೋಟೆ, 28 ಜುಲೈ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ರಂಗನಾಥನಗರ ಪ್ರದೇಶದಲ್ಲಿ ಸಿಎಲ್-7 ಲೈಸೆನ್ಸ್ನಡಿ ಬಾರ್ ಹಾಗೂ ಮದ್ಯದಂಗಡಿ ಆರಂಭಿಸಲು ನೀಡಲಾಗುತ್ತಿರುವ ಅನುಮತಿಗೆ ಸ್ಥಳೀಯ ನಿವಾಸಿಗಳು, ಶ್ರೀ ಧರ್ಮಸ್ಥಳ ಮಹಿಳಾ ಸಂಘದ ಸದಸ್ಯರು ಹಾಗೂ ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕೂಡಲೇ ಅನುಮತಿ ರದ್ದುಪಡಿಸುವಂತೆ ಬಾದಾಮಿ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಸಾರ್ವಜನಿಕರು ಸಲ್ಲಿಸಿರುವ ಮನವಿಯಲ್ಲಿ, ಬಾರ್ ಆರಂಭಿಸಲು ಉದ್ದೇಶಿಸಿರುವ ಸ್ಥಳದ ಸುತ್ತಮುತ್ತ ಕಿತ್ತೂರು ಚೆನ್ನಮ್ಮ ಶಾಲೆ, ವಿಶ್ವ ಹಿಂದೂ ಪರಿಷತ್ ಶಾಲೆ, ಮಲ್ಲಿಕಾರ್ಜುನ ಶಾಲೆ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಇಂತಹ ಪ್ರದೇಶದಲ್ಲಿ ಮದ್ಯದಂಗಡಿ ಆರಂಭಿಸುವುದು ಮಕ್ಕಳ ಶೈಕ್ಷಣಿಕ ವಾತಾವರಣ ಹಾಗೂ ಸಾಮಾಜಿಕ ಮೌಲ್ಯಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.
ಅಲ್ಲದೆ, ಪ್ರಸ್ತಾವಿತ ಕಟ್ಟಡದ ಎದುರಲ್ಲೇ ಅಗ್ನಿಶಾಮಕ ಠಾಣೆ ಇದ್ದು, ಸುತ್ತಮುತ್ತ ಜನವಸತಿ ಪ್ರದೇಶ ಹೆಚ್ಚಾಗಿದೆ. ಇಲ್ಲಿ ಕೂಲಿ ಕಾರ್ಮಿಕರು, ಮಧ್ಯಮ ವರ್ಗದ ಕುಟುಂಬಗಳು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಬಾರ್ ಆರಂಭವಾದರೆ ಮದ್ಯಪಾನದಿಂದ ಉಂಟಾಗುವ ಕಾನೂನು ಸುವ್ಯವಸ್ಥೆ ಸಮಸ್ಯೆಗಳು, ಮಹಿಳೆಯರ ಸುರಕ್ಷತೆ ಮತ್ತು ಕುಟುಂಬಗಳ ನೆಮ್ಮದಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಬಾದಾಮಿ–ಗದಗ ಸಂಪರ್ಕಿಸುವ ಪ್ರಮುಖ ರಸ್ತೆಯ ಪಕ್ಕದಲ್ಲೇ ಈ ಬಾರ್ ತೆರೆಯಲು ಉದ್ದೇಶಿಸಿರುವುದರಿಂದ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗುವ ಜೊತೆಗೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುವ ಭೀತಿಯೂ ಸಾರ್ವಜನಿಕರಲ್ಲಿ ಮನೆ ಮಾಡಿದೆ. ಮದ್ಯ ಸೇವಿಸಿ ವಾಹನ ಚಾಲನೆ ಮಾಡುವ ಘಟನೆಗಳು ಹೆಚ್ಚಾದರೆ ಅಮಾಯಕ ಜನರ ಜೀವಕ್ಕೂ ಅಪಾಯ ಎದುರಾಗಬಹುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.
ಇದರ ಜೊತೆಗೆ ಬಾದಾಮಿ ಪಟ್ಟಣದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕೆಲವು ಲಾಡ್ಜ್ಗಳ ವಿರುದ್ಧವೂ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಲಾಡ್ಜ್ಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಸಮಾಜದಲ್ಲಿ ದುಷ್ಟ ಚಟಗಳು ಹೆಚ್ಚಾಗದಂತೆ ತಡೆಯುವುದು ಸರ್ಕಾರ ಹಾಗೂ ಸಾರ್ವಜನಿಕರ ಜವಾಬ್ದಾರಿಯಾಗಿದೆ. ವಿಶೇಷವಾಗಿ ಶಾಲಾ-ಕಾಲೇಜುಗಳ ಸಮೀಪ ಮದ್ಯದಂಗಡಿಗಳಿಗೆ ಅವಕಾಶ ನೀಡದಂತೆ ಈಗಾಗಲೇ ವಿವಿಧ ನಿಯಮಗಳು ಹಾಗೂ ಮಾರ್ಗಸೂಚಿಗಳಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಶ್ರೀ ಧರ್ಮಸ್ಥಳ ಮಹಿಳಾ ಸಂಘದ ರಂಗನಾಥನಗರ ಘಟಕದ ಸದಸ್ಯರು, ಸ್ಥಳೀಯ ನಿವಾಸಿಗಳು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿ, ರಂಗನಾಥನಗರದಲ್ಲಿ ಸಿಎಲ್-7 ಬಾರ್ ಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಹಾಗೂ ಪಟ್ಟಣದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಲಾಡ್ಜ್ಗಳ ವಿರುದ್ಧ ಸಮಗ್ರ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande