
ಬೆಂಗಳೂರು, 28 ಜುಲೈ (ಹಿ.ಸ.):
ಆ್ಯಂಕರ್:
ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ದಾವಣಗೆರೆ ಆಡಿಯೋ ವಿವಾದ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗಿನ ಭಿನ್ನಾಭಿಪ್ರಾಯದ ಕುರಿತು ಮಾಜಿ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಮೌನ ಮುರಿದ್ದಾರೆ.
ಈ ಕುರಿತು ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು , ತಮ್ಮ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ರೀತಿಯ ಸಂಬಂಧ ಹಳಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆ ವಿಚಾರವಾಗಿ ಹರಿದಾಡುತ್ತಿರುವ ಆಡಿಯೋ ತನ್ನದಲ್ಲ. ಅದು ಸಂಪೂರ್ಣವಾಗಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗಿರುವ ನಕಲಿ ಆಡಿಯೋ ಎಂದು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸಿರಾಜ್ ಎಂಬವರು ಈಗಾಗಲೇ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿ ಎಫ್ಎಸ್ಎಲ್ಗೆ ತನಿಖೆಗೆ ಕಳುಹಿಸಲಾಗಿದೆ. ಸತ್ಯಾಂಶ ಹೊರಬರಲಿದೆ ಎಂದು ತಿಳಿಸಿದ್ದಾರೆ.
ಆದರೆ, ಈ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ತಮಗೆ ರಾಜಕೀಯ ಹಿನ್ನಡೆಯಾಗಿರುವುದು ನಿಜ ಎಂದು ಮುಕ್ತವಾಗಿ ಒಪ್ಪಿಕೊಂಡಿರುವ ಅವರು, ಮೊದಲ ಹಂತದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿದ್ದರೂ ಈ ವಿವಾದದಿಂದ ಹಿನ್ನಡೆಯಾಗಿದೆ ಎಂದಿದ್ದಾರೆ.
ಮುಂಬರುವ ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಬಲವಾದ ವಿಶ್ವಾಸವಿದೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII