
ಹಾಸನ, 28 ಜುಲೈ (ಹಿ.ಸ.):
ಆ್ಯಂಕರ್:ದೇಶದ ಅಭಿವೃದ್ಧಿ ಹಾಗೂ ಸದೃಢ ಆಡಳಿತಕ್ಕಾಗಿ ಸಮರ್ಥ ವ್ಯಕ್ತಿಯನ್ನು ಆಯ್ಕೆ ಮಾಡಲು ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾನ ಮಾಡುವುದು ಅತ್ಯಗತ್ಯ ಎಂದು ಹಾಸನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ. ದಾಕ್ಷಾಯಿಣಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಿಮ್ಸ್ ಕಾಲೇಜಿನಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ಎಣಿಕೆ ನಮೂನೆಯನ್ನು ಭರ್ತಿ ಮಾಡಿ ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲಾ ಮಾತನಾಡಿ, ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸಿ ಅನರ್ಹರನ್ನು ಪಟ್ಟಿಯಿಂದ ಕೈಬಿಡುವುದೇ ಎಸ್‌ಐಆರ್ ಪ್ರಕ್ರಿಯೆಯ ಉದ್ದೇಶವಾಗಿದೆ ಎಂದರು. ಮತದಾರರ ಪಟ್ಟಿಗೆ ಸಂಬಂಧಿಸಿದ ಗೊಂದಲಗಳಿದ್ದರೆ ಸಹಾಯವಾಣಿ 1950ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಾಸನ ತಹಸೀಲ್ದಾರ್ ಗೀತಾ, ಜಿಲ್ಲಾ ಪಂಚಾಯಿತಿ ಯೋಜನಾ ಅಧಿಕಾರಿ ಸುನೀತಾ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.