
ಬೆಂಗಳೂರು, 28 ಜುಲೈ (ಹಿ.ಸ.):
ಆ್ಯಂಕರ್:
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಗಳಲ್ಲಿ ಕೇಳಿಬರುತ್ತಿರುವ ಸಾಲು ಸಾಲು ಭ್ರಷ್ಟಾಚಾರದ ಆರೋಪಗಳು ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ನಂಬಿಕೆಗೆ ದ್ರೋಹ ಬಗೆದಿವೆ. ಇದರ ವಿರುದ್ಧ ಇಲಾಖಾ ತನಿಖೆ ಅಥವಾ ಕೆಲ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡರೆ ಸಾಲದು, ಪ್ರಕರಣವನ್ನು ಕೂಡಲೇ ಕೇಂದ್ರ ತನಿಖಾ ದಳಕ್ಕೆ ವಹಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು ಕೆಪಿಎಸ್ಸಿಯು ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯುವ ಅಧಿಕಾರಿಗಳನ್ನು ಆಯ್ಕೆ ಮಾಡುವ ಸಾಂವಿಧಾನಿಕ ಸಂಸ್ಥೆಯಾಗಿದೆ. ಇಂತಹ ಉನ್ನತ ಸಂಸ್ಥೆಯ ಮೇಲೆಯೇ ಸಾರ್ವಜನಿಕರ ನಂಬಿಕೆ ಕುಸಿದರೆ ಅದು ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆಗೆ ದೊಡ್ಡ ಆಪತ್ತಾಗಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಈ ವ್ಯವಸ್ಥಿತ ಹಗರಣಗಳ ಸತ್ಯಾಸತ್ಯತೆ ಹೊರಬರಬೇಕಾದರೆ ಸಮಗ್ರ ತನಿಖೆ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ.
ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕೇಳಿಬಂದಿರುವ ಸ್ವಜನಪಕ್ಷಪಾತ, ಲಂಚದ ಆಮಿಷ ಹಾಗೂ ಅಕ್ರಮ ನೇಮಕಾತಿ ಆರೋಪಗಳು ಇಡೀ ಆಡಳಿತ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತೆ ಮಾಡಿವೆ.
ಈ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಈಗಾಗಲೇ ಅವರನ್ನು ಅಮಾನತುಗೊಳಿಸಲಾಗಿದ್ದು, ಸಿಬಿಐ ತನಿಖೆ ಕೋರಿ ಹೈಕೋರ್ಟ್ನಲ್ಲಿಯೂ ಅರ್ಜಿಗಳ ವಿಚಾರಣೆ ನಡೆಯುತ್ತಿದೆ. ಆದರೆ, ಕೇವಲ ಅಮಾನತು ಪ್ರಕ್ರಿಯೆಯಿಂದ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಸಿಗುವುದಿಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವವರೆಗೂ ಕಾನೂನು ಹೋರಾಟ ಮುಂದುವರಿಯಬೇಕು ಎಂದು ನಾರಾಯಣಗೌಡ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII