
ಬಾಗಲಕೋಟೆ, 03 ಜುಲೈ (ಹಿ.ಸ.):
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬೀಳಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ಲಕ್ಷ್ಮೀದೇವಿ ದೇವಸ್ಥಾನ ಹಾಗೂ ಮಾರುತೇಶ್ವರ ದೇವಸ್ಥಾನಗಳ ಅಭಿವೃದ್ಧಿಗಾಗಿ ಒಟ್ಟು ₹20 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಬೀಳಗಿ ಶಾಸಕ ಜೆ.ಟಿ. ಪಾಟೀಲ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಅಭಿವೃದ್ಧಿಗೆ ₹10 ಲಕ್ಷ ಹಾಗೂ ಶ್ರೀ ಮಾರುತೇಶ್ವರ ದೇವಸ್ಥಾನದ ಅಭಿವೃದ್ಧಿಗೆ ₹10 ಲಕ್ಷ ಅನುದಾನ ಮಂಜೂರಾಗಿದ್ದು, ಈ ಅನುದಾನದಡಿ ದೇವಸ್ಥಾನಗಳ ಮೂಲಸೌಕರ್ಯ ಅಭಿವೃದ್ಧಿ, ಭಕ್ತರಿಗೆ ಅಗತ್ಯ ಸೌಲಭ್ಯಗಳ ನಿರ್ಮಾಣ ಹಾಗೂ ಧಾರ್ಮಿಕ ವಾತಾವರಣವನ್ನು ಇನ್ನಷ್ಟು ಸುಧಾರಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.
ಭೂಮಿಪೂಜೆ ಬಳಿಕ ಮಾತನಾಡಿದ ಶಾಸಕ ಜೆ.ಟಿ. ಪಾಟೀಲ, ಗ್ರಾಮೀಣ ಪ್ರದೇಶಗಳಲ್ಲಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯೂ ಸಮಗ್ರ ಗ್ರಾಮಾಭಿವೃದ್ಧಿಯ ಭಾಗವಾಗಿದೆ. ದೇವಸ್ಥಾನಗಳು ಭಕ್ತಿಯ ಕೇಂದ್ರಗಳಷ್ಟೇ ಅಲ್ಲದೆ, ಸಾಮಾಜಿಕ ಸಾಮರಸ್ಯ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ಕೇಂದ್ರಗಳಾಗಿವೆ. ಹೀಗಾಗಿ ಕ್ಷೇತ್ರದ ಎಲ್ಲ ಗ್ರಾಮಗಳ ಧಾರ್ಮಿಕ ಹಾಗೂ ಸಾರ್ವಜನಿಕ ಅಭಿವೃದ್ಧಿಗೆ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅಗತ್ಯ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ಕಾಮಗಾರಿಗಳಿಂದ ಗ್ರಾಮಸ್ಥರು ಹಾಗೂ ಭಕ್ತರಿಗೆ ಉತ್ತಮ ಸೌಲಭ್ಯಗಳು ದೊರೆಯಲಿದ್ದು, ದೇವಸ್ಥಾನಗಳ ಆಕರ್ಷಣೆ ಹೆಚ್ಚುವುದರ ಜೊತೆಗೆ ಧಾರ್ಮಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂಬ ವಿಶ್ವಾಸವನ್ನು ಗ್ರಾಮಸ್ಥರು ವ್ಯಕ್ತಪಡಿಸಿದರು.
ಭೂಮಿಪೂಜೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ವಿವಿಧ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಮಗಾರಿಗಳಿಗೆ ಶುಭ ಹಾರೈಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande