
ಬೆಂಗಳೂರು, 03 ಜುಲೈ (ಹಿ.ಸ.):
ಆ್ಯಂಕರ್:ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮಗಳು ನಡೆಯುತ್ತಿದ್ದು, ಅಕ್ರಮ ಬಾಂಗ್ಲಾದೇಶದ ನಿವಾಸಿಗಳನ್ನು ಮತದಾರರ ಪಟ್ಟಿಗೆ ಸೇರಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದರು.
ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಭದ್ರತೆಯ ದೃಷ್ಟಿಯಿಂದ ಚುನಾವಣಾ ಆಯೋಗ ಎಸ್‌ಐಆರ್ ಪ್ರಕ್ರಿಯೆ ಕೈಗೊಂಡಿದ್ದು, ಕಾಂಗ್ರೆಸ್ ಸರ್ಕಾರ ಇದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.
ಬೆಂಗಳೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಸುಮಾರು 20 ಲಕ್ಷ ಬಾಂಗ್ಲಾ ನಿವಾಸಿಗಳು ಇದ್ದಾರೆ ಎಂದು ಹೇಳಿದ ಅವರು, 2002ರ ಮತದಾರರ ಪಟ್ಟಿಯಲ್ಲಿ ಇವರ ಹೆಸರುಗಳಿರಲಿಲ್ಲ. ಇದೀಗ ಹಜ್ ಭವನ ಹಾಗೂ ಮಸೀದಿಗಳ ಮುಂದೆ ಎಸ್‌ಐಆರ್ ಅರ್ಜಿಗಳನ್ನು ರಾಜಾರೋಷವಾಗಿ ವಿತರಿಸಿ ಮತದಾರರ ಪಟ್ಟಿಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಬಿಎಲ್‌ಒಗಳು ಮನೆಮನೆಗೆ ತೆರಳಿ ಪರಿಶೀಲನೆ ನಡೆಸಬೇಕಾದರೆ, ಪ್ರಸಾದ ಹಂಚಿದಂತೆ ಬೀದಿಗಳಲ್ಲಿ ಕುಳಿತು ಅರ್ಜಿಗಳನ್ನು ಹಂಚುತ್ತಿರುವುದು ನಿಯಮ ಉಲ್ಲಂಘನೆಯಾಗಿದೆ ಎಂದು ಅವರು ಟೀಕಿಸಿದರು. ಅಧಿಕಾರಿಗಳು ಮನೆಗೆ ಭೇಟಿ ನೀಡಿ ದಾಖಲೆ ಪರಿಶೀಲಿಸಿ ಅರ್ಜಿ ಭರ್ತಿ ಮಾಡಿಸಬೇಕಾದರೂ, ಆ ನಿಯಮಗಳನ್ನು ಪಾಲಿಸಲಾಗುತ್ತಿಲ್ಲ ಎಂದರು.
ಮಹದೇವಪುರ ಹಾಗೂ ಬ್ಯಾಟರಾಯನಪುರ ಪ್ರದೇಶಗಳಲ್ಲಿ ಮಸೀದಿಗಳ ಮುಂದೆ ಗುಂಪುಗುಂಪಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಆರೋಪಿಸಿದ ಅಶೋಕ, ಈ ಕುರಿತು ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಗಳಿಗೆ ದೂರು ಸಲ್ಲಿಸುವುದಾಗಿ ತಿಳಿಸಿದರು. ಅಕ್ರಮಕ್ಕೆ ಅವಕಾಶ ಮಾಡಿಕೊಟ್ಟ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು.
ಯಲಹಂಕ ಪ್ರದೇಶದಲ್ಲಿ 2002ರ ಮತದಾರರ ಪಟ್ಟಿಯ ದಾಖಲೆಗಳನ್ನು ವೆಬ್‌ಸೈಟ್‌ನಲ್ಲಿ ಲಭ್ಯವಾಗದಂತೆ ಮಾಡಲಾಗಿದೆ ಎಂದು ಆರೋಪಿಸಿದ ಅವರು, ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಇದಕ್ಕೆ ಹೊಣೆಗಾರರಾದ ಅಧಿಕಾರಿಗಳು ಹಾಗೂ ಹಿರಿಯರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಎಸ್‌ಐಆರ್ ಪ್ರಕ್ರಿಯೆಯನ್ನು ವಿರೋಧಿಸುವ ಕಾಂಗ್ರೆಸ್, ಮತ್ತೊಂದೆಡೆ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಕರೆ ನೀಡುತ್ತಿದೆ. ಇದರ ಮೂಲಕ ಬಾಂಗ್ಲಾ ನಿವಾಸಿಗಳನ್ನು ರಾಜ್ಯದಲ್ಲಿ ಉಳಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಅಶೋಕ ಆರೋಪಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.