
ಗದಗ, 03 ಜುಲೈ (ಹಿ.ಸ.)
ಆ್ಯಂಕರ್:
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ಅಂಗವಾಗಿ ಗದಗ ನಗರದಲ್ಲಿಂದು ಜಿಲ್ಲಾ ಸ್ವೀಪ್ ಸಮಿತಿಯಿಂದ ಬೃಹತ್ ಜನಜಾಗೃತಿ ಜಾಥಾ ಆಯೋಜಿಸಲಾಯಿತು.
ಗದಗ ನಗರದ ಮುನ್ಸಿಪಲ್ ಹೈಸ್ಕೂಲ್ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಚಾಲನೆ ನೀಡಿ, ಅರ್ಹ ಮತದಾರರು ಯಾರೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು, ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ದೇಶದ ಆಡಳಿತ ಮತ್ತು ಕಾನೂನು ರೂಪಿಸುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಪರಮಾಧಿಕಾರ ಮತದಾರರಿಗೆ ಮಾತ್ರ ಇದೆ ಎಂದು ಹೇಳಿದರು. ಆದ್ದರಿಂದ ಪ್ರತಿಯೊಬ್ಬ ಅರ್ಹ ನಾಗರಿಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದರು.
ಪ್ರತಿ ಹತ್ತು ವರ್ಷಗಳಿಗೊಮ್ಮೆ ದೇಶದ ನಿಯಮಾವಳಿಗಳ ಪ್ರಕಾರ ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಷ್ಕರಿಸುವ ಕಾರ್ಯ ಕೈಗೊಳ್ಳಲಾಗುತ್ತದೆ. ಈಗಿರುವ ಮತದಾರರು ಅದೇ ಸ್ಥಳದಲ್ಲಿ ವಾಸಿಸುತ್ತಿದ್ದಾರೆಯೇ, ಹೊಸದಾಗಿ ಸೇರ್ಪಡೆಯಾಗಬೇಕಾದವರು ಯಾರು, ಸ್ಥಳಾಂತರಗೊಂಡವರು ಅಥವಾ ಮೃತಪಟ್ಟವರ ಮಾಹಿತಿ ಸೇರಿದಂತೆ ಎಲ್ಲ ವಿವರಗಳನ್ನು ಪರಿಶೀಲಿಸಿ ನಿಖರ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಉದ್ದೇಶದಿಂದ ಈ ವಿಶೇಷ ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.
ಜೂನ್ 30ರಿಂದಲೇ ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುವ ಹಾಗೂ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಆರಂಭಿಸಿದ್ದಾರೆ. ಈ ಪ್ರಕ್ರಿಯೆಗೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಬಿಎಲ್ಒಗಳು ಮನೆಗೆ ಭೇಟಿ ನೀಡಿದಾಗ ಅಗತ್ಯ ದಾಖಲೆಗಳೊಂದಿಗೆ ನಮೂನೆಗಳನ್ನು ಭರ್ತಿ ಮಾಡಿ ನೀಡುವ ಮೂಲಕ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಯುವಜನತೆ ತಮ್ಮ ಕುಟುಂಬದವರು, ಸಂಬಂಧಿಕರು ಹಾಗೂ ಪರಿಚಯದವರ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಎಂಬುದನ್ನು ಪರಿಶೀಲಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು. ಪ್ರಜಾಪ್ರಭುತ್ವದ ಬಲವರ್ಧನೆಗೆ ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನ ಹಕ್ಕು ಅತ್ಯಂತ ಮಹತ್ವದ್ದಾಗಿದ್ದು, ಯಾವುದೇ ಅರ್ಹ ಮತದಾರ ಪಟ್ಟಿಯಿಂದ ಹೊರಗುಳಿಯದಂತೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣ ಮಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಎ.ಎ. ಕಂಬಾಳಿಮಠ ಅವರು, ಚುನಾವಣೆಗಳು ಮತದಾರರ ಪಟ್ಟಿಯ ಆಧಾರದ ಮೇಲೆ ನಡೆಯುವುದರಿಂದ ದೋಷರಹಿತ ಹಾಗೂ ನಿಖರ ಮತದಾರರ ಪಟ್ಟಿಯ ಸಿದ್ಧತೆ ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.
ಪ್ರತಿ ವರ್ಷ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದರೂ, ಈ ಬಾರಿ ವಿಶೇಷ ಸಮಗ್ರ ಪರಿಷ್ಕರಣೆ ನಡೆಯುತ್ತಿದೆ. ವಿಶೇಷವಾಗಿ 2002ರ ಮತದಾರರ ಪಟ್ಟಿಯಲ್ಲಿದ್ದ ದಾಖಲೆಗಳನ್ನು ಆಧರಿಸಿ, ಅಂದಿನ ಮತದಾರರ ಪ್ರಸ್ತುತ ಸ್ಥಿತಿ, ಅವರು ಈಗ ಯಾವ ಬೂತ್ ವ್ಯಾಪ್ತಿಯಲ್ಲಿದ್ದಾರೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಸೇರ್ಪಡೆಯಾಗದಂತೆ ಪಾರದರ್ಶಕ ಮತ್ತು ನಿಖರ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಮತದಾನವು ಪ್ರತಿಯೊಬ್ಬ ನಾಗರಿಕನ ಪವಿತ್ರ ಹಕ್ಕಾಗಿದ್ದು, ಆ ಹಕ್ಕಿನ ಸದ್ಬಳಕೆಗೆ ಮೊದಲು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವುದು ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸ್ವೀಪ್ ಸಮಿತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಜಾಗೃತಿ ಜಾಥಾ ನಗರದ ಮುನ್ಸಿಪಲ್ ಹೈಸ್ಕೂಲ್ನಿಂದ ಆರಂಭವಾಗಿ ಗಾಂಧಿ ಸರ್ಕಲ್, ಮಹೇಂದ್ರಕರ ಸರ್ಕಲ್, ಟಾಂಗಾ ಕೂಟ, ಬಸವೇಶ್ವರ ಸರ್ಕಲ್, ಜೋಡು ಮಾರುತಿ ರಸ್ತೆ ಮೂಲಕ ಮುಳಗುಂದ ನಾಕಾದವರೆಗೆ ಸಂಚರಿಸಿತು. ಜಾಥಾದಲ್ಲಿ ಎನ್ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಮತ್ತು ವಿವಿಧ ಇಲಾಖೆಗಳ ಸಿಬ್ಬಂದಿ ಭಾಗವಹಿಸಿ ಮತದಾರರ ಜಾಗೃತಿ ಘೋಷಣೆಗಳನ್ನು ಕೂಗಿದರು.
ಅರ್ಹ ಮತದಾರ ಹೊರಗುಳಿಯಬಾರದು, ಯಾವುದೇ ಅನರ್ಹ ಮತದಾರ ಸೇರ್ಪಡೆಯಾಗಬಾರದು, ದೋಷರಹಿತ ಮತದಾರರ ಪಟ್ಟಿ ಬಲವಾದ ಪ್ರಜಾಪ್ರಭುತ್ವಕ್ಕೆ ಅಡಿಪಾಯ, ಬಿಎಲ್ಓ ಮನೆ-ಮನೆ ಭೇಟಿ ಜೂನ್ 30ರಿಂದ ಜುಲೈ 29ರವರೆಗೆ, ಗಣತಿ ನಮೂನೆ ಭರ್ತಿ ಮಾಡಿ ಬಿಎಲ್ಓಗೆ ನೀಡಿ, ಕರಡು ಮತದಾರರ ಪಟ್ಟಿ ಆಗಸ್ಟ್ 5ರಂದು ಪ್ರಕಟ, ಕ್ಷೇಮು ಮತ್ತು ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಅವಕಾಶ ಸೇರಿದಂತೆ ವಿವಿಧ ಘೋಷಣೆಗಳ ಫಲಕಗಳನ್ನು ಹಿಡಿದು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಜಾಗೃತಿ ಮೂಡಿಸಿದರು.
ಹೆಚ್ಚಿನ ಮಾಹಿತಿಗಾಗಿ 1950 ಸಹಾಯವಾಣಿ ಹಾಗೂ 1800 425 51950 ಸಂಖ್ಯೆಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ತಿಳಿಸಲಾಯಿತು. ಮತದಾರ ಸಹಾಯ ಕೇಂದ್ರಗಳ ಮೂಲಕ ಗಣತಿ ನಮೂನೆಗಳನ್ನು ಭರ್ತಿ ಮಾಡುವ ಸೌಲಭ್ಯವೂ ಲಭ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ವಿ. ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಹಟ್ಟಿ, ಡಿಡಿಎಲ್ಆರ್ ರುದ್ರಣ್ಣಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮೆಹಬೂಬ ಬೈ ತುಂಬರಮಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಮಿತ್ ಬಿದರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೊಗೇರಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಎನ್ಸಿಸಿ, ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP