
ಗದಗ, 03 ಜುಲೈ (ಹಿ.ಸ.)
ಆ್ಯಂಕರ್:- ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಎಸ್.ಐ.ಆರ್.-2026 ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಖಚಿತಪಡಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಶುಕ್ರವಾರ ನರಗುಂದ ನಗರದಲ್ಲಿ ಬೃಹತ್ ಬೈಕ್ ರ್ಯಾಲಿ ಹಾಗೂ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ತಾಲೂಕು ಪಂಚಾಯತ್ ನರಗುಂದ, ತಾಲೂಕು ಆಡಳಿತ, ಪುರಸಭೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಈ ಜಾಗೃತಿ ಅಭಿಯಾನಕ್ಕೆ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಇಲಾಖೆಗಳ ನೌಕರರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡರು.
ನಗರದ ಉಡುಚಾ ಪರಮೇಶ್ವರಿ ದೇವಸ್ಥಾನದಿಂದ ಆರಂಭವಾದ ಬೈಕ್ ರ್ಯಾಲಿಯು ದಂಡಾಪೂರ ರಸ್ತೆ, ಮುಖ್ಯ ಮಾರುಕಟ್ಟೆ ರಸ್ತೆ, ಗಾಂಧಿ ಚೌಕ್, ಬಸವೇಶ್ವರ ಸರ್ಕಲ್ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಬಳಿಕ ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಶಿವಾಜಿ ಸರ್ಕಲ್ನಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾರರ ಜಾಗೃತಿ ಕುರಿತು ಸಾರ್ವಜನಿಕರಿಗೆ ಬಲವಾದ ಸಂದೇಶ ನೀಡಿದರು.
ರ್ಯಾಲಿಯುದ್ದಕ್ಕೂ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು, ನಿಖರ ಮತದಾರರ ಪಟ್ಟಿ ಬಲಿಷ್ಠ ಪ್ರಜಾಪ್ರಭುತ್ವದ ಅಡಿಪಾಯ, ಬಿಎಲ್ಒಗಳಿಗೆ ಅಗತ್ಯ ಮಾಹಿತಿ ನೀಡಿ, ಪ್ರತಿಯೊಬ್ಬ ನಾಗರಿಕ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿಕೊಳ್ಳಿ ಎಂಬ ಘೋಷಣೆಗಳನ್ನು ಕೂಗುತ್ತ ಜನರಲ್ಲಿ ಮತದಾನದ ಮಹತ್ವ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಅರಿವು ಮೂಡಿಸಲಾಯಿತು. ಜಾಗೃತಿ ಫಲಕಗಳನ್ನು ಹಿಡಿದು ಸಂಚರಿಸಿದ ಸಿಬ್ಬಂದಿ ಮತ್ತು ಅಧಿಕಾರಿಗಳು ಸಾರ್ವಜನಿಕರ ಗಮನ ಸೆಳೆದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಅವರು, ಜೂನ್ 30ರಿಂದ ಜುಲೈ 29ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ-ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ತಿಳಿಸಿದರು.
ಬಿಎಲ್ಒಗಳು ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಸರಿಯಾದ ಮಾಹಿತಿ ನೀಡಿ, ಅಗತ್ಯ ನಮೂನೆಗಳನ್ನು ಭರ್ತಿ ಮಾಡಿ, ಸ್ವೀಕೃತಿ ಪಡೆಯುವ ಮೂಲಕ ಚುನಾವಣಾ ಆಯೋಗದ ಈ ಮಹತ್ವದ ಕಾರ್ಯಕ್ಕೆ ಸಹಕರಿಸಬೇಕು. ನಿಖರ ಹಾಗೂ ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಪ್ರತಿಯೊಬ್ಬ ನಾಗರಿಕನ ಸಹಕಾರದಿಂದ ಮಾತ್ರ ಸಾಧ್ಯವಾಗಲಿದೆ ಎಂದು ಅವರು ಹೇಳಿದರು.
ಮತದಾರರ ಪಟ್ಟಿಯಲ್ಲಿ ಅರ್ಹ ನಾಗರಿಕರ ಹೆಸರು ಸೇರ್ಪಡೆಯಾಗುವುದು ಮತ್ತು ಅನರ್ಹರ ಹೆಸರುಗಳು ಸೇರ್ಪಡೆಯಾಗದಂತೆ ನೋಡಿಕೊಳ್ಳುವುದು ಈ ವಿಶೇಷ ಸಮಗ್ರ ಪರಿಷ್ಕರಣೆಯ ಪ್ರಮುಖ ಉದ್ದೇಶವಾಗಿದೆ. ಯುವಜನರು ತಮ್ಮ ಕುಟುಂಬದ ಸದಸ್ಯರು, ಸಂಬಂಧಿಕರು ಹಾಗೂ ನೆರೆಹೊರೆಯವರ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ತಿದ್ದುಪಡಿ ಮತ್ತು ಸೇರ್ಪಡೆಗೆ ಮುಂದಾಗಬೇಕು ಎಂದು ಅವರು ಮನವಿ ಮಾಡಿದರು.
ಪುರಸಭೆ ಮುಖ್ಯಾಧಿಕಾರಿ ಸುಭಾಸ ಕುದಾನಪುರ ಮಾತನಾಡಿ, ತಾಲೂಕು ಸ್ವೀಪ್ ಸಮಿತಿ ವತಿಯಿಂದ ಶಾಲೆಗಳು, ಕಾಲೇಜುಗಳು, ಗ್ರಾಮೀಣ ಪ್ರದೇಶಗಳು ಹಾಗೂ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲು ವಿವಿಧ ಮಾಧ್ಯಮಗಳ ಮೂಲಕ ಮಾಹಿತಿ ನೀಡಲಾಗುತ್ತಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ಈ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲಾಗುತ್ತಿದೆ ಎಂದು ತಿಳಿಸಿದರು.
ಮತದಾನವು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕು ಮಾತ್ರವಲ್ಲದೆ ಪ್ರಜಾಪ್ರಭುತ್ವದ ಶಕ್ತಿಯಾಗಿದೆ. ಆದ್ದರಿಂದ ದೋಷರಹಿತ ಮತ್ತು ನಿಖರ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ (ಗ್ರಾಮೀಣ ಉದ್ಯೋಗ) ಸಂತೋಷಕುಮಾರ ಪಾಟೀಲ್, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕಿ ಶ್ರೀಮತಿ ಕೃಷ್ಣಮ್ಮ ಹಾದಿಮನಿ, ಹಿರಿಯ ಆರೋಗ್ಯ ನಿರೀಕ್ಷಕ ಸಂಗಮೇಶ ಬ್ಯಾಳಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಇದಲ್ಲದೆ ಆರ್ಡಿಪಿಆರ್ ಇಲಾಖೆ, ಕಂದಾಯ ಇಲಾಖೆ, ತಾಲೂಕು ಆಡಳಿತ, ಪುರಸಭೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಶುಸಂಗೋಪನೆ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ನರೇಗಾ, ಅಕ್ಷರ ದಾಸೋಹ, ಎನ್ಆರ್ಎಲ್ಎಂ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೈಕ್ ರ್ಯಾಲಿ ಮತ್ತು ಮಾನವ ಸರಪಳಿಯಲ್ಲಿ ಭಾಗವಹಿಸಿ ಮತದಾರರ ಜಾಗೃತಿ ಅಭಿಯಾನವನ್ನು ಯಶಸ್ವಿಗೊಳಿಸಿದರು.
ಜಾಗೃತಿ ಕಾರ್ಯಕ್ರಮವು ನಗರದ ಜನರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕು ಎಂಬ ಸಂದೇಶವನ್ನು ಪರಿಣಾಮಕಾರಿಯಾಗಿ ಸಾರಿತು.
---------------
ಹಿಂದೂಸ್ತಾನ್ ಸಮಾಚಾರ್ / lalita MP