ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ: ಅಶೋಕ
ಬೆಂಗಳೂರು, 03 ಜುಲೈ (ಹಿ.ಸ.): ಆ್ಯಂಕರ್: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯವನ್ನು ಕಾಪಾಡಲು ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠ
Ashok file photo


ಬೆಂಗಳೂರು, 03 ಜುಲೈ (ಹಿ.ಸ.):

ಆ್ಯಂಕರ್:

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯವನ್ನು ಕಾಪಾಡಲು ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಬೇಕೆಂಬ ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಪಾಲಿಸದೆ, ಅಪಾರ್ಟ್‌ಮೆಂಟ್‌ಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ನಿವಾಸಿಗಳನ್ನು ಗುಂಪು ಗುಂಪಾಗಿ ಸೇರಿಸಿ ಅರ್ಜಿಗಳನ್ನು ಭರ್ತಿ ಮಾಡಿಸುತ್ತಿರುವ ವರದಿಗಳು ಬೆಳಕಿಗೆ ಬಂದಿವೆ ಎಂದು ಆರೋಪಿಸಿದರು.

ಇದರೊಂದಿಗೆ, ಕೆಲವು ಸೈಬರ್ ಕೇಂದ್ರಗಳಲ್ಲಿ ನಕಲಿ ಜನನ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ ಸೇರಿದಂತೆ ವಿವಿಧ ದಾಖಲೆಗಳನ್ನು ಸೃಷ್ಟಿಸುವ ದಂಧೆ ನಡೆಯುತ್ತಿದೆ ಎಂಬ ಆರೋಪಗಳೂ ಕೇಳಿಬರುತ್ತಿವೆ ಎಂದು ಅವರು ಹೇಳಿದರು. ಈ ಬೆಳವಣಿಗೆಗಳು ಮತದಾರರ ಪಟ್ಟಿಯ ವಿಶ್ವಾಸಾರ್ಹತೆಗೆ ಧಕ್ಕೆ ತರುವ ಗಂಭೀರ ಬೆಳವಣಿಗೆಗಳಾಗಿವೆ ಎಂದು ಅಭಿಪ್ರಾಯಪಟ್ಟರು.

ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಉದ್ದೇಶಿಸಿ ಪ್ರಶ್ನೆಗಳನ್ನು ಎತ್ತಿರುವ ಅಶೋಕ್, ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘಿಸುವವರ ಹಿಂದೆ ಯಾರ ಕೈವಾಡವಿದೆ? ಸರ್ಕಾರ ಮತ್ತು ಪೊಲೀಸರು ಮೌನವಾಗಿರುವುದು ಏಕೆ? ತಪ್ಪಿತಸ್ಥರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆಯೇ ಎಂದು ಪ್ರಶ್ನಿಸಿದರು.

ಅಕ್ರಮವಾಗಿ ಗುಂಪು ಸೇರಿಸಿ ಅರ್ಜಿ ಭರ್ತಿ ಮಾಡಿಸುತ್ತಿರುವವರ ವಿರುದ್ಧ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸುವ ಜಾಲದ ವಿರುದ್ಧ ತಕ್ಷಣವೇ ಕ್ರಿಮಿನಲ್ ಪ್ರಕರಣ ದಾಖಲಿಸಿ, ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಅವರು ಆಗ್ರಹಿಸಿದರು.

ಮತದಾರರ ಪಟ್ಟಿಯ ಪಾವಿತ್ರ್ಯಕ್ಕೆ ಧಕ್ಕೆ ಉಂಟಾದರೆ, ಅದರ ವಿಶ್ವಾಸಾರ್ಹತೆಯ ಬಗ್ಗೆ ರಾಜ್ಯದ ಜನತೆ ಪ್ರಶ್ನೆ ಎತ್ತುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಪ್ರಜಾಪ್ರಭುತ್ವದ ತಳಹದಿಯಾದ ಮತದಾರರ ಪಟ್ಟಿಯನ್ನು ಸಂರಕ್ಷಿಸುವಲ್ಲಿ ಸರ್ಕಾರ ವಿಫಲವಾದರೆ, ರಾಜ್ಯಾದ್ಯಂತ ತೀವ್ರ ಜನಾಂದೋಲನ ಅನಿವಾರ್ಯವಾಗಲಿದೆ ಎಂದು ಅಶೋಕ್ ಎಚ್ಚರಿಕೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande