
ಬಾಗಲಕೋಟೆ, 03 ಜುಲೈ (ಹಿ.ಸ.)
ಆ್ಯಂಕರ್ : ಸಾರ್ವಜನಿಕರ ಅರ್ಜಿಗಳು ಹಾಗೂ ಕಡತಗಳ ವಿಲೇವಾರಿಯಲ್ಲಿ ಆಗುತ್ತಿರುವ ವಿಳಂಬದ ಕುರಿತು ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಬಿಟಿಡಿಎ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಹಾಲಿಂಗ ನಂದಗಾವಿ ಅವರ ನೇತೃತ್ವದಲ್ಲಿ ಶುಕ್ರವಾರ ದಿಢೀರ್ ಪರಿಶೀಲನೆ ನಡೆಸಲಾಯಿತು.
ಪರಿಶೀಲನೆ ವೇಳೆ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳ ತಂಡ, ಸಾರ್ವಜನಿಕರ ಅರ್ಜಿಗಳ ವಿಲೇವಾರಿ, ಕಡತಗಳ ಪ್ರಗತಿ, ಬಾಕಿ ಉಳಿದಿರುವ ಪ್ರಕರಣಗಳು, ಕಚೇರಿಯ ದಾಖಲೆಗಳು ಹಾಗೂ ಸಿಬ್ಬಂದಿಯ ಕಾರ್ಯನಿರ್ವಹಣೆಯ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿತು. ಹಲವು ಕಡತಗಳನ್ನು ಪರಿಶೀಲಿಸಿದ ಅಧಿಕಾರಿಗಳು, ಅನಗತ್ಯ ವಿಳಂಬವಾಗಿರುವ ಪ್ರಕರಣಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ವಿವರ ಪಡೆದರು.
ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳು ನಿಗದಿತ ಅವಧಿಯೊಳಗೆ ತಲುಪಬೇಕು. ಯಾವುದೇ ಕಾರಣಕ್ಕೂ ಕಡತಗಳನ್ನು ಅನಗತ್ಯವಾಗಿ ಬಾಕಿ ಇಡುವುದು ಅಥವಾ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸುವುದು ಸಹಿಸುವುದಿಲ್ಲ ಎಂದು ಲೋಕಾಯುಕ್ತ ಎಸ್ಪಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು ಎನ್ನಲಾಗಿದೆ.
ಪರಿಶೀಲನೆ ಸಂದರ್ಭದಲ್ಲಿ ಕಚೇರಿಯ ಹಾಜರಾತಿ ದಾಖಲೆ, ಕಡತಗಳ ನಿರ್ವಹಣೆ, ದೂರುಗಳ ದಾಖಲಾತಿ ಹಾಗೂ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಹ ಪರಿಶೀಲಿಸಲಾಯಿತು. ಅಗತ್ಯ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆಗಾಗಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಚೇರಿಯಲ್ಲಿ ಪಾರದರ್ಶಕ ಹಾಗೂ ಸಮಯಬದ್ಧ ಆಡಳಿತಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಸಾರ್ವಜನಿಕರ ಕೆಲಸಗಳನ್ನು ವಿಳಂಬವಿಲ್ಲದೆ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. ಈ ದಿಢೀರ್ ಪರಿಶೀಲನೆಯಿಂದ ಬಿಟಿಡಿಎ ಕಚೇರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಲೋಕಾಯುಕ್ತ ಅಧಿಕಾರಿಗಳ ಈ ಕ್ರಮದಿಂದ ಸಾರ್ವಜನಿಕರ ಕಡತಗಳ ವಿಲೇವಾರಿಗೆ ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದ್ದು, ಸರ್ಕಾರಿ ಕಚೇರಿಗಳಲ್ಲಿ ಜವಾಬ್ದಾರಿಯುತ ಆಡಳಿತಕ್ಕೆ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande