
ಗದಗ, 03 ಜುಲೈ (ಹಿ.ಸ.)
ಆ್ಯಂಕರ್: ಪ್ರಜಾಪ್ರಭುತ್ವದ ಸದೃಢತೆಗೆ ನಿಖರ ಮತದಾರರ ಪಟ್ಟಿ ಅತ್ಯಂತ ಅವಶ್ಯಕವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೊಂಡಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ರೋಣ ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಕರೆ ನೀಡಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್-2026) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಸ್ವೀಪ್ ಸಮಿತಿ, ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶುಕ್ರವಾರ ರೋಣ ಪಟ್ಟಣದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗದಗ ನಗರದ ಸಿದ್ದಾರೂಢ ದೇವಸ್ಥಾನದ ಆವರಣದಿಂದ ಆರಂಭವಾದ ಜಾಗೃತಿ ರ್ಯಾಲಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪಟ್ಟಣದ ನಾಲ್ಕು ಶಾಲಾ ವಿಧ್ಯಾರ್ಥಿ, ವಿದ್ಯಾರ್ಥಿನಿಯರು, ಸ್ವೀಪ್ ಸಮಿತಿಯ ಸದಸ್ಯರು ಭಾಗವಹಿಸಿ ಮತದಾರರ ಜಾಗೃತಿ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರ ಗಮನ ಸೆಳೆದರು. ಬಳಿಕ ಪೋತರಾಜನ ಕಟ್ಟಿ ಬಳಿ ಮಾನವ ಸರಪಳಿ ನಿರ್ಮಿಸಿ ಮತದಾರರ ಪಟ್ಟಿಯ ಪರಿಷ್ಕರಣೆಯ ಮಹತ್ವವನ್ನು ಸಾರಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಪಂ ಇಓ ಚಂದ್ರಶೇಖರ ಬಿ. ಕಂದಕೂರ, ಜೂನ್ 30ರಿಂದ ಜುಲೈ 29ರವರೆಗೆ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ ವೇಳೆ ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ.) ಮನೆ-ಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಬಿ.ಎಲ್.ಒ.ಗಳಿಗೆ ಅಗತ್ಯ ದಾಖಲೆಗಳು ಹಾಗೂ ನಿಖರ ಮಾಹಿತಿಯನ್ನು ನೀಡಿ ಸಹಕರಿಸಬೇಕು. ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ, ಹೆಸರು ಅಳಿಸುವಿಕೆ ಸೇರಿದಂತೆ ಅಗತ್ಯ ನಮೂನೆಗಳನ್ನು ಭರ್ತಿ ಮಾಡಿ ಸ್ವೀಕೃತಿ ಪಡೆಯುವುದು ಅತ್ಯಂತ ಮುಖ್ಯ ಎಂದು ತಿಳಿಸಿದರು.
ಯುವ ಮತದಾರರು, ಹೊಸದಾಗಿ 18 ವರ್ಷ ಪೂರೈಸಿದವರು ಹಾಗೂ ಇದುವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸದಿರುವ ಅರ್ಹರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ನಿಖರ ಮತದಾರರ ಪಟ್ಟಿ ರೂಪಿಸುವಲ್ಲಿ ಸಾರ್ವಜನಿಕರ ಸಹಕಾರವೇ ಚುನಾವಣಾ ಪ್ರಕ್ರಿಯೆಯ ಯಶಸ್ಸಿಗೆ ಮೂಲಾಧಾರವಾಗಿದೆ ಎಂದು ಅವರು ಹೇಳಿದರು.
ತಾಲೂಕು ಸ್ವೀಪ್ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಕೇಂದ್ರಗಳು, ಶಾಲಾ-ಕಾಲೇಜುಗಳು, ಗ್ರಾಮೀಣ ಪ್ರದೇಶಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮತದಾರರ ಹಕ್ಕು, ಜವಾಬ್ದಾರಿ ಮತ್ತು ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ವಿವಿಧ ಮಾಧ್ಯಮಗಳ ಮೂಲಕ ಜನರಿಗೆ ಅರಿವು ಮೂಡಿಸುವ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ ಸಹಾಯಕ ಲೆಕ್ಕಾಧಿಕಾರಿ-ದೇವರಾಜ್ ಸಜ್ಜನಶೆಟ್ಟರ, ಸಿ.ಎಸ್.ನೀಲಗುಂದ-ತಾಲೂಕ ಯೋಜನಾಧಿಕಾರಿ,ದಯಾನಂದ ಯಾವಗಲ-ಕ್ಷೇತ್ರ ಶಿಕ್ಷಣಾಧಿಕಾರಿ,ಎಂ.ಎ.ಫಣಿಬಂಧ-ಕ್ಷೇತ್ರ ಸಮನ್ವಯಾಧಿಕಾರಿ ಹಾಗೂ ವಿವಿಧ ಅಧಿಕಾರಿಗಳು, ಸಿಬ್ಬಂದಿ ಮತ್ತು ಸ್ವೀಪ್ ಸಮಿತಿಯ ಸದಸ್ಯರು ಹಾಗೂ ಪಟ್ಟಣದ ಶಾಲಾ ವಿಧ್ಯಾರ್ಥಿಗಳು ಭಾಗವಹಿಸಿದ್ದರು..
---------------
ಹಿಂದೂಸ್ತಾನ್ ಸಮಾಚಾರ್ / lalita MP