
ವಿಜಯಪುರ, 03 ಜುಲೈ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ
ಕೊರ್ತಿ–ಕೊಲ್ಹಾರ ಸೇತುವೆ ಮೇಲೆ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ನದಿಗೆ ಉರುಳಿ ಬಿದ್ದ ಟಿಪ್ಪರ್ ವಾಹನವನ್ನು ಮೇಲೆತ್ತಲು ನಡೆಸಿದ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಲಿಲ್ಲ.
ಜೋರಾದ ಗಾಳಿಯಿಂದಾಗಿ ಕ್ರೇನ್ಗಳ ಸಮತೋಲನ ಕಾಪಾಡುವುದು ಕಷ್ಟವಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.
ಕೆಲ ದಿನಗಳ ಹಿಂದೆ ಕೊರ್ತಿ–ಕೊಲ್ಹಾರ ಸೇತುವೆ ಮೇಲೆ ಟಿಪ್ಪರ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದ ವೇಳೆ ಟಿಪ್ಪರ್ ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದಿತ್ತು. ಈ ಹಿನ್ನೆಲೆ ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ವಿಶೇಷ ರಕ್ಷಣಾ ಸಿಬ್ಬಂದಿ ಬೆಳಗ್ಗೆಯಿಂದಲೇ ಬೃಹತ್ ಮಟ್ಟದ ಕಾರ್ಯಾಚರಣೆ ಆರಂಭಿಸಿದರು.
ಟಿಪ್ಪರ್ ಅನ್ನು ಹೊರತೆಗೆಯಲು ಎರಡು ಬೃಹತ್ ಕ್ರೇನ್ಗಳನ್ನು ಬಳಸಲಾಗಿದ್ದು, ನದಿಯ ಮಧ್ಯಭಾಗದಲ್ಲಿ ಸಿಲುಕಿದ್ದ ವಾಹನವನ್ನು ಕಬ್ಬಿಣದ ಹಗ್ಗಗಳ ಸಹಾಯದಿಂದ ಮೇಲಕ್ಕೆ ಎತ್ತಲು ಹಲವು ಬಾರಿ ಪ್ರಯತ್ನಿಸಲಾಯಿತು. ಆದರೆ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಬೀಸಿದ ಬಲವಾದ ಗಾಳಿಯಿಂದ ಕ್ರೇನ್ಗಳ ನಡುವೆ ಅಗತ್ಯವಾದ ಸಮತೋಲನ ಸಾಧಿಸಲು ಸಾಧ್ಯವಾಗಲಿಲ್ಲ. ಸುರಕ್ಷತಾ ದೃಷ್ಟಿಯಿಂದ ಅಧಿಕಾರಿಗಳು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದು, ಹವಾಮಾನ ಅನುಕೂಲವಾದ ಬಳಿಕ ಮತ್ತೆ ಮುಂದುವರಿಸಲು ನಿರ್ಧರಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ–ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಗಂಟೆಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಎರಡೂ ದಿಕ್ಕುಗಳಲ್ಲಿ ವಾಹನಗಳ ಉದ್ದ ಸಾಲು ನಿರ್ಮಾಣವಾಗಿ ಪ್ರಯಾಣಿಕರು ಹಾಗೂ ಸರಕು ಸಾಗಣೆ ವಾಹನ ಚಾಲಕರು ತೀವ್ರ ತೊಂದರೆ ಅನುಭವಿಸಿದರು. ನಂತರ ಪೊಲೀಸ್ ಇಲಾಖೆ ಸಂಚಾರವನ್ನು ಹಂತ ಹಂತವಾಗಿ ಪುನರಾರಂಭಿಸಿತು.
ಕಾರ್ಯಾಚರಣೆಯ ಸ್ಥಳದಲ್ಲಿ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ ಹಾಗೂ ಸಂಬಂಧಿತ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದು, ಟಿಪ್ಪರ್ ಅನ್ನು ಸುರಕ್ಷಿತವಾಗಿ ಮೇಲಕ್ಕೆ ಎತ್ತಲು ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande