
ಬಾಗಲಕೋಟೆ, 04 ಜುಲೈ (ಹಿ.ಸ.)
ಆ್ಯಂಕರ್ : ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನಕ್ಕೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಶುಕ್ರವಾರದ ಅಂತ್ಯದ ವೇಳೆಗೆ ಒಟ್ಟು 89 ಸಾವಿರ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಇಂದು ಹಾಗೂ ನಾಳೆ ಬೆಳಿಗ್ಗೆ 6.30 ಗಂಟೆಯಿಂದಲೇ ಬೂತ್ ಮಟ್ಟದ ಅಧಿಕಾರಿಗಳು ಕಾರ್ಯಾರಂಭ ಮಾಡಲಿದ್ದಾರೆ ಎಂದು ಹೇಳಿದರು.
ಕೂಲಿ ಕಾರ್ಮಿಕರು, ದಿನಗೂಲಿ ನೌಕರರು, ಕಾರ್ಖಾನೆ ಕಾರ್ಮಿಕರು, ಅಂಗಡಿ-ವ್ಯಾಪಾರಸ್ಥರು ಸೇರಿದಂತೆ ಬೆಳಗಿನ ನಂತರ ಕೆಲಸಕ್ಕೆ ತೆರಳುವ ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾನೆಯಲ್ಲೇ ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
ಎಸ್ಐಆರ್ ಅಭಿಯಾನದಲ್ಲಿ ಪ್ರತಿಯೊಬ್ಬ ಅರ್ಹ ಮತದಾರರ ಮಾಹಿತಿಯನ್ನು ನಿಖರವಾಗಿ ಸಂಗ್ರಹಿಸಿ ಮತದಾರರ ಪಟ್ಟಿಯನ್ನು ಸಮಗ್ರ ಹಾಗೂ ದೋಷರಹಿತವಾಗಿಸುವುದು ಚುನಾವಣಾ ಆಯೋಗದ ಪ್ರಮುಖ ಉದ್ದೇಶವಾಗಿದೆ.
ಆದ್ದರಿಂದ ಪ್ರತಿಯೊಬ್ಬ ಮತದಾರರು ಬಿಎಲ್ಒಗಳಿಗೆ ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಒದಗಿಸಿ ಅಭಿಯಾನವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಮತದಾರರು ಮುಂಜಾನೆಯ ಸೇವೆಯ ಸದುಪಯೋಗ ಪಡೆದು ಗಣತಿ ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande