ಇಂದಿನಿಂದ ಮುಖ್ಯಮಂತ್ರಿಗಳ ಮೊದಲ ಉತ್ತರ ಕರ್ನಾಟಕ ಪ್ರವಾಸ
ಬೆಂಗಳೂರು, 06 ಜುಲೈ (ಹಿ.ಸ.): ಆ್ಯಂಕರ್: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಉತ್ತರ ಕರ್ನಾಟಕ ಪ್ರವಾಸವನ್ನು ಬಸವಾದಿ ಶರಣರ ಸಮಾನತೆಯ ಸಂದೇಶದ ನೆಲೆಯಾಗಿರುವ ಬಸವಕಲ್ಯಾಣದಿಂದ ಆರಂಭಿಸಿದ್ದಾರೆ. ಸೂಫಿ ಸಂತರ ಸಾಮರಸ್ಯದ ಪರಂಪರೆಗೆ ಹೆಸರಾದ ಬೀದರ್ ಹಾಗೂ ಕಲ
CM file photo


ಬೆಂಗಳೂರು, 06 ಜುಲೈ (ಹಿ.ಸ.):

ಆ್ಯಂಕರ್:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಉತ್ತರ ಕರ್ನಾಟಕ ಪ್ರವಾಸವನ್ನು ಬಸವಾದಿ ಶರಣರ ಸಮಾನತೆಯ ಸಂದೇಶದ ನೆಲೆಯಾಗಿರುವ ಬಸವಕಲ್ಯಾಣದಿಂದ ಆರಂಭಿಸಿದ್ದಾರೆ. ಸೂಫಿ ಸಂತರ ಸಾಮರಸ್ಯದ ಪರಂಪರೆಗೆ ಹೆಸರಾದ ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಂದ ಆರಂಭವಾಗಿರುವ ಈ ಎರಡು ದಿನಗಳ ಪ್ರವಾಸಕ್ಕೆ ರಾಜಕೀಯ, ಆಡಳಿತಾತ್ಮಕ ಹಾಗೂ ಸಾಂಸ್ಕೃತಿಕ ಮಹತ್ವ ಲಭಿಸಿದೆ.

ಮುಖ್ಯಮಂತ್ರಿಗಳು ಕಳೆದ ಕೆಲವು ತಿಂಗಳುಗಳಿಂದ ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಗಳನ್ನು ನಿರಂತರವಾಗಿ ನಡೆಸಿ ಆಡಳಿತ ವ್ಯವಸ್ಥೆಗೆ ಚುರುಕು ನೀಡುವ ಕಾರ್ಯ ಮಾಡಿದ್ದರು. ಇದೀಗ ಜಿಲ್ಲೆಗಳಿಗೆ ನೇರವಾಗಿ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಸಭೆ ನಡೆಸಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸುವ ಮೂಲಕ ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ ಪ್ರಯತ್ನಕ್ಕೆ ಚಾಲನೆ ನೀಡಿದ್ದಾರೆ.

ದೇಶದ ಹಲವು ಭಾಗಗಳಲ್ಲಿ ಬರದ ಛಾಯೆ ಆವರಿಸಿರುವ ಸಂದರ್ಭದಲ್ಲಿ ನಡೆಯುತ್ತಿರುವ ಈ ಪ್ರವಾಸದಲ್ಲಿ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವುದರ ಜೊತೆಗೆ, ಕಲ್ಯಾಣ ಕರ್ನಾಟಕ ವಿಭಾಗದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಗಳು ನಡೆಯಲಿವೆ.

ಶಿಕ್ಷಣ, ಆರೋಗ್ಯ, ನೀರಾವರಿ, ಮೂಲಸೌಕರ್ಯ, ಕೈಗಾರಿಕೆ, ಕುಡಿಯುವ ನೀರು, ಉದ್ಯೋಗ ಸೃಷ್ಟಿ ಹಾಗೂ ಜನಕಲ್ಯಾಣ ಯೋಜನೆಗಳ ಅನುಷ್ಠಾನವನ್ನು ಇಲಾಖೆವಾರು ಪರಿಶೀಲಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸ್ಪಷ್ಟ ನಿರ್ದೇಶನ ನೀಡಲಿದ್ದಾರೆ.

ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನದಡಿ ಬರುವ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಯನ್ನು ಸರ್ಕಾರ ತನ್ನ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿ ಪರಿಗಣಿಸಿದೆ. ಶಿಕ್ಷಣ, ಕೃಷಿ, ಕೈಗಾರಿಕೆ, ಉದ್ಯೋಗ, ನೀರಾವರಿ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ವೇಗವಾಗಿ ಅಭಿವೃದ್ಧಿ ಸಾಧಿಸಲು ಮತ್ತು ಇಲಾಖೆಗಳ ನಡುವೆ ಸಮನ್ವಯ ಹೆಚ್ಚಿಸಿ ಫಲಿತಾಂಶ ಆಧಾರಿತ ಆಡಳಿತಕ್ಕೆ ಉತ್ತೇಜನ ನೀಡುವುದು ಈ ಪ್ರವಾಸದ ಪ್ರಮುಖ ಉದ್ದೇಶವಾಗಿದೆ.

ಜಿಲ್ಲಾ ಮಟ್ಟದಲ್ಲಿಯೇ ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವುದು, ಸ್ಥಳೀಯ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ತ್ವರಿತ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ವೇಗ ನೀಡುವುದು ಈ ಪ್ರವಾಸದ ಪ್ರಮುಖ ಗುರಿಯಾಗಿದೆ.

ರಾಜ್ಯದ ಯಾವುದೇ ಭಾಗ ಅಭಿವೃದ್ಧಿಯಿಂದ ವಂಚಿತವಾಗಬಾರದು ಎಂಬ ಸರ್ಕಾರದ ಬದ್ಧತೆಯ ಭಾಗವಾಗಿಯೇ ಮುಖ್ಯಮಂತ್ರಿ ತಮ್ಮ ಮೊದಲ ಉತ್ತರ ಕರ್ನಾಟಕ ಪ್ರವಾಸವನ್ನು ಕಲ್ಯಾಣ ಕರ್ನಾಟಕದಿಂದ ಆರಂಭಿಸಿದ್ದಾರೆ. ಇದು ಕೇವಲ ಆಡಳಿತಾತ್ಮಕ ಪ್ರವಾಸವಲ್ಲ, ಪ್ರಾದೇಶಿಕ ಸಮತೋಲನ, ಸಮಗ್ರ ಅಭಿವೃದ್ಧಿ ಹಾಗೂ ಜನಕೇಂದ್ರಿತ ಆಡಳಿತಕ್ಕೆ ಸರ್ಕಾರ ನೀಡುತ್ತಿರುವ ಆದ್ಯತೆಯ ಸ್ಪಷ್ಟ ಸಂದೇಶವಾಗಿದೆ.

ಇದೇ ವೇಳೆ ಮುಖ್ಯಮಂತ್ರಿ ಪ್ರವಾಸದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಗೂ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಮುಖ್ಯಮಂತ್ರಿಗಳ ಈ ನಡೆಗೆ ಕಾರ್ಯಕರ್ತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದೇ ಮಾದರಿಯನ್ನು ಇತರೆ ಸಚಿವರು ಹಾಗೂ ಹಿರಿಯ ನಾಯಕರು ಸಹ ಅನುಸರಿಸಿದರೆ ಕಾರ್ಯಕರ್ತರ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಲಿದೆ ಎಂಬ ಅಭಿಪ್ರಾಯ ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande