
ಗದಗ, 06 ಜುಲೈ (ಹಿ.ಸ.)
ಆ್ಯಂಕರ್:
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಎಸ್ಐಆರ್–2026 ಕಾರ್ಯಕ್ರಮದಡಿ ಗದಗ ವಿಧಾನಸಭಾ ಕ್ಷೇತ್ರದ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ, ತಿದ್ದುಪಡಿ ಹಾಗೂ ದೃಢೀಕರಣ ಮಾಡಿಸಿಕೊಳ್ಳುವ ಮೂಲಕ ಚುನಾವಣಾ ಆಯೋಗದ ಮಹತ್ವದ ಅಭಿಯಾನಕ್ಕೆ ಸಹಕರಿಸಬೇಕು ಎಂದು ಭಾರತೀಯ ಜನತಾ ಪಕ್ಷದ ಗದಗ ವಿಧಾನಸಭಾ ಕ್ಷೇತ್ರದ ಮುಖಂಡ ಅನೀಲ ಅಬ್ಬಿಗೇರಿ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜೂನ್ 30ರಿಂದ ಆರಂಭವಾಗಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಒಂದು ತಿಂಗಳ ಕಾಲ ನಡೆಯಲಿದ್ದು, ಈ ಅವಧಿಯಲ್ಲಿ ಚುನಾವಣಾ ಆಯೋಗದಿಂದ ನೇಮಕಗೊಂಡಿರುವ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಮನೆ ಮನೆಗೆ ತೆರಳಿ ಮತದಾರರಿಗೆ ಎನುಮರೇಷನ್ ನಮೂನೆಗಳನ್ನು ವಿತರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮತದಾರರು ತಮ್ಮ ಕುಟುಂಬದ ಎಲ್ಲ ಅರ್ಹ ಸದಸ್ಯರ ವಿವರಗಳನ್ನು ಅಗತ್ಯ ದಾಖಲೆಗಳೊಂದಿಗೆ ಎಚ್ಚರಿಕೆಯಿಂದ ಭರ್ತಿ ಮಾಡಿ, ಸಂಬಂಧಿಸಿದ ಬಿಎಲ್ಒಗಳಿಗೆ ಸಲ್ಲಿಸಬೇಕು. ಭರ್ತಿ ಮಾಡಿದ ಎರಡು ನಮೂನೆಗಳಲ್ಲಿ ಒಂದು ಪ್ರತಿಯನ್ನು ತಮ್ಮ ದಾಖಲೆಗಾಗಿ ಕಡ್ಡಾಯವಾಗಿ ತಮ್ಮ ಬಳಿಯೇ ಇಟ್ಟುಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಚುನಾವಣಾ ಆಯೋಗವು ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಪ್ರತಿಯೊಂದು ಮತಗಟ್ಟೆಗೆ ಬಿಎಲ್ಒಗಳನ್ನು ನೇಮಿಸಿದ್ದು, ಭಾರತೀಯ ಜನತಾ ಪಕ್ಷದ ವತಿಯಿಂದಲೂ ಗದಗ ವಿಧಾನಸಭಾ ಕ್ಷೇತ್ರದ ಎಲ್ಲ ಬೂತ್ಗಳಲ್ಲಿ ಬೂತ್ ಲೆವೆಲ್ ಏಜೆಂಟ್-2 (ಬಿಎಲ್ಎ-2)ಗಳನ್ನು ನೇಮಕ ಮಾಡಲಾಗಿದೆ. ಮತದಾರರು ಅಗತ್ಯ ಮಾಹಿತಿಗಾಗಿ ಬಿಎಲ್ಒಗಳು ಅಥವಾ ಬಿಎಲ್ಎ-2ಗಳನ್ನು ಸಂಪರ್ಕಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಮತದಾರರ ಗುರುತಿನ ಚೀಟಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ ದಾಖಲೆಯಾಗಿದ್ದು, ಅದು ಭಾರತೀಯ ನಾಗರಿಕನಾಗಿ ಮತದಾನದ ಹಕ್ಕು ಚಲಾಯಿಸಲು ಮಾತ್ರವಲ್ಲದೆ, ವಿವಿಧ ಸರ್ಕಾರಿ ಸೇವೆಗಳು ಹಾಗೂ ಯೋಜನೆಗಳ ಪ್ರಯೋಜನ ಪಡೆಯುವ ಸಂದರ್ಭದಲ್ಲಿಯೂ ಪ್ರಮುಖ ಗುರುತಿನ ದಾಖಲೆಯಾಗಿ ಕಾರ್ಯನಿರ್ವಹಿಸುತ್ತದೆ. ಆದ್ದರಿಂದ ಯಾವುದೇ ಅರ್ಹ ನಾಗರಿಕ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಅನೀಲ ಅಬ್ಬಿಗೇರಿ ಹೇಳಿದ್ದಾರೆ.
ಯುವ ಮತದಾರರು, ಹೊಸದಾಗಿ 18 ವರ್ಷ ಪೂರ್ಣಗೊಳಿಸಿರುವ ನಾಗರಿಕರು, ವಿಳಾಸ ಬದಲಾವಣೆ ಮಾಡಿಕೊಂಡಿರುವವರು ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ ಅಥವಾ ಇತರೆ ವಿವರಗಳಲ್ಲಿ ತಿದ್ದುಪಡಿ ಅಗತ್ಯವಿರುವವರು ಈ ವಿಶೇಷ ಪರಿಷ್ಕರಣೆ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ನಾಗರಿಕರ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ. ಆದ್ದರಿಂದ ಗದಗ ವಿಧಾನಸಭಾ ಕ್ಷೇತ್ರದ ಎಲ್ಲ ಮತದಾರರು ತಮ್ಮ ತಮ್ಮ ಮತಗಟ್ಟೆಗಳಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಚುನಾವಣಾ ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಅನೀಲ ಅಬ್ಬಿಗೇರಿ ಮನವಿ ಮಾಡಿದ್ದಾರೆ.
ಮತದಾರರ ಪಟ್ಟಿಯಲ್ಲಿನ ನಿಖರತೆ ಮತ್ತು ಪಾರದರ್ಶಕತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಆಗಿದ್ದು, ಎಲ್ಲರೂ ಜಾಗೃತಿಯಿಂದ ಈ ಅಭಿಯಾನದಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವವನ್ನು ಇನ್ನಷ್ಟು ಸದೃಢಗೊಳಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP