
ಬೆಂಗಳೂರು, 06 ಜುಲೈ (ಹಿ.ಸ.):
ಆ್ಯಂಕರ್:
ಸಾರ್ವಜನಿಕರ ಹಲವು ದಶಕಗಳ ಬೇಡಿಕೆಯಾಗಿದ್ದ ಶ್ರೀರಾಮಪುರ ಹಾಗೂ ಸ್ವತಂತ್ರ ಪಾಳ್ಯದಿಂದ ಮಂತ್ರಿ ಮಾಲ್ ಮೆಟ್ರೋ ನಿಲ್ದಾಣದವರೆಗಿನ ಪಾದಚಾರಿ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿತು. ಈ ವೇಳೆ ಮಾತನಾಡಿದ ಮಾಜಿ ಸಚಿವ ದಿನೇಶ್ ಗುಂಡೂರಾವ್, ಇದು ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದು, ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸುತ್ತಿರುವುದಕ್ಕೆ ಸಂತಸವಾಗಿದೆ ಎಂದು ಹೇಳಿದರು.
ಈ ಯೋಜನೆಗೆ ಹಲವು ಬಾರಿ ಪ್ರಯತ್ನ ನಡೆಸಲಾಗಿದ್ದರೂ ತಾಂತ್ರಿಕ ಕಾರಣಗಳಿಂದ ಕಾಮಗಾರಿ ಆರಂಭವಾಗಿರಲಿಲ್ಲ. ಆದರೆ ಜನರ ಸುರಕ್ಷತೆ ಹಾಗೂ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಸುರಂಗ ಮಾರ್ಗ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಈಗಾಗಲೇ ಓಕಳಿಪುರಂನಲ್ಲಿ ನಿರ್ಮಿಸಿರುವ ಅಂಡರ್‌ಪಾಸ್ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲ ಕಲ್ಪಿಸಿದೆ. ಇದೇ ರೀತಿಯಲ್ಲಿ ಈ ಸುರಂಗ ಮಾರ್ಗವೂ ಸ್ಥಳೀಯರ ಸಂಚಾರವನ್ನು ಸುಗಮಗೊಳಿಸಲಿದೆ. ಈ ಯೋಜನೆಗೆ ಅನುಮೋದನೆ ದೊರಕಲು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರಲ್ಲಿ ಹಲವು ಬಾರಿ ಮನವಿ ಮಾಡಿದ್ದೆ. ಈಗ ಕಾಮಗಾರಿಗೆ ಚಾಲನೆ ಸಿಕ್ಕಿರುವುದು ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.
₹5.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಪಾದಚಾರಿ ಸುರಂಗ ಮಾರ್ಗವು ಆರು ತಿಂಗಳೊಳಗೆ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ. ಜೊತೆಗೆ ಬಿನ್ನಿಪೇಟೆ ಪ್ರದೇಶದಲ್ಲಿಯೂ ಸ್ಕೈವಾಕ್ ನಿರ್ಮಾಣದ ಅಗತ್ಯವಿದ್ದು, ಶೀಘ್ರದಲ್ಲೇ ಆ ಕಾಮಗಾರಿಯನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಬೆಂಗಳೂರು ಹಾಗೂ ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದೆ. ಅಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಲು ಸಾರ್ವಜನಿಕರ ಸಹಕಾರವೂ ಅತ್ಯಂತ ಮುಖ್ಯ ಎಂದು ಅವರು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.