
ಬೆಂಗಳೂರು, 06 ಜುಲೈ (ಹಿ.ಸ.):
ಆ್ಯಂಕರ್:
ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ. ಆದರೆ ಚುನಾವಣಾ ಆಯೋಗ ಈ ಅಭಿಯಾನವನ್ನು ನಡೆಸುತ್ತಿರುವ ವಿಧಾನ ಕುರಿತು ಸರ್ಕಾರಕ್ಕೆ ಭಿನ್ನಾಭಿಪ್ರಾಯವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರುದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪಗಳಾಗಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿ, ಈ ವಿಷಯ ಈಗಾಗಲೇ ನ್ಯಾಯಾಲಯದ ಮುಂದಿದ್ದು, ನ್ಯಾಯಾಲಯ ತನ್ನ ತೀರ್ಪು ನೀಡಿದೆ ಎಂದರು. ಎಲ್ಲ ಅರ್ಹ ನಾಗರಿಕರಿಗೂ ಮತದಾನದ ಹಕ್ಕು ಸಿಗಬೇಕು ಎಂಬ ಉದ್ದೇಶದಿಂದ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದು, ಯಾವುದೇ ರಾಜ್ಯ ಸರ್ಕಾರ ನೀಡದಷ್ಟು ಸಹಕಾರವನ್ನು ಚುನಾವಣಾ ಆಯೋಗಕ್ಕೆ ಕರ್ನಾಟಕ ಸರ್ಕಾರ ನೀಡಿದೆ ಎಂದು ಹೇಳಿದರು.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸರ್ಕಾರ ಅಥವಾ ಸಚಿವರು ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಜನರು ತಮ್ಮ ಮತದಾನದ ಹಕ್ಕು ಕಳೆದುಕೊಳ್ಳದಂತೆ ಜಾಗೃತಿ ಮೂಡಿಸುವ ಕೆಲಸ ಮಾತ್ರ ಸರ್ಕಾರ ಮಾಡುತ್ತಿದೆ ಎಂದರು.
ಎಲ್ಲಾ ರಾಜಕೀಯ ಪಕ್ಷಗಳಿಗೂ ಬೂತ್ ಮಟ್ಟದ ಪ್ರತಿನಿಧಿಗಳನ್ನು (ಬಿಎಲ್‌ಎ) ನೇಮಿಸುವ ಅವಕಾಶವಿದೆ. ಎಸ್‌ಐಆರ್ ಪ್ರಕ್ರಿಯೆಯನ್ನು ಮುಂದುವರಿಸಬೇಕೋ ಅಥವಾ ರದ್ದುಪಡಿಸಬೇಕೋ ಎಂಬ ನಿರ್ಧಾರ ಸಂಪೂರ್ಣವಾಗಿ ಚುನಾವಣಾ ಆಯೋಗದ ವ್ಯಾಪ್ತಿಯ ವಿಷಯವಾಗಿದೆ. ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದರಿಂದಲೇ ವಿಪಕ್ಷಗಳಿಗೆ ಆತಂಕ ಉಂಟಾಗಿದೆ. ಅವರಿಗೆ ಚುನಾವಣಾ ಆಯೋಗದ ಮೇಲೆಯೇ ನಂಬಿಕೆ ಇಲ್ಲದ ಕಾರಣ ಪ್ರಕ್ರಿಯೆ ರದ್ದುಪಡಿಸುವಂತೆ ದೂರು ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಜನರಿಗೆ ಅನುಕೂಲವಾಗುವಂತೆ ಜಾತಿ ಪ್ರಮಾಣಪತ್ರ ಹಾಗೂ ವಾಸ ದೃಢೀಕರಣ ಪತ್ರವನ್ನು ಆನ್‌ಲೈನ್ ಮೂಲಕ ಪಡೆಯುವ ವ್ಯವಸ್ಥೆ ಮಾಡಲಾಗಿದೆ. 2002ರ ಮತದಾರರ ದಾಖಲೆಗಳು ಹಲವರ ಬಳಿ ಇಲ್ಲದಿರುವುದರಿಂದ ಅವುಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶವೂ ಕಲ್ಪಿಸಲಾಗಿದೆ. ಮತದಾನದ ಹಕ್ಕನ್ನು ಉಳಿಸಿಕೊಳ್ಳುವಂತೆ ಜನರಿಗೆ ಮನವಿ ಮಾಡುತ್ತಿದ್ದೇವೆ. ಆದರೆ ಬಡವರು ಹಾಗೂ ಅಲ್ಪಸಂಖ್ಯಾತರಿಗೆ ತೊಂದರೆ ಆಗಲೆಂಬ ಉದ್ದೇಶದಿಂದಲೇ ವಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ದೂರಿದರು.
ಬಾಂಗ್ಲಾದೇಶದ ಅಕ್ರಮ ವಲಸಿಗರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಕ್ರಮ ವಲಸಿಗರ ಸಮಸ್ಯೆ ಇದ್ದರೆ ಅಧಿಕಾರದಲ್ಲಿದ್ದಾಗಲೇ ಬಿಜೆಪಿ ಕ್ರಮ ಕೈಗೊಳ್ಳಬೇಕಿತ್ತು. ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಅವರು ಏನು ಮಾಡಿದ್ದಾರೆ ಎಂಬುದು ದೇಶಕ್ಕೆ ಗೊತ್ತಿದೆ ಎಂದು ಟೀಕಿಸಿದರು.
ಐದು ಗ್ಯಾರಂಟಿ ಯೋಜನೆಗಳನ್ನು ಜನರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ್ದು, ಈಗ ಬಿಜೆಪಿ ಕೂಡ ಗ್ಯಾರಂಟಿಗಳ ಬಗ್ಗೆ ಮಾತನಾಡುವ ಪರಿಸ್ಥಿತಿ ಬಂದಿದೆ. ಕರ್ನಾಟಕದ ಗ್ಯಾರಂಟಿ ಮಾದರಿ ದೇಶಕ್ಕೆ ಮಾದರಿಯಾಗಿದೆ ಎಂದ ಅವರು, ಮತದಾರರಿಗೆ ನೆರವಾಗಲು ರಾಜ್ಯಾದ್ಯಂತ ಸಹಾಯ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಎಲ್ಲಿಯಾದರೂ ಲೋಪಗಳಿದ್ದರೆ ತನಿಖೆ ನಡೆಸಲಿ, ಅದಕ್ಕೆ ಸರ್ಕಾರಕ್ಕೆ ಯಾವುದೇ ಆಕ್ಷೇಪವಿಲ್ಲ. ಶಾಸಕರು ಹಾಗೂ ಮಾಜಿ ಶಾಸಕರು ಕೂಡ ಈ ಪ್ರಕ್ರಿಯೆಯಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ನಿಮ್ಮ ಮತವನ್ನು ಉಳಿಸುವುದು ನನ್ನ ಕರ್ತವ್ಯ. ರಾಜಕೀಯ ಟೀಕೆಗಳನ್ನು ತಡೆಯಲು ಸಾಧ್ಯವಿಲ್ಲ. ಎಲುಬಿಲ್ಲದ ನಾಲಿಗೆ ಏನು ಬೇಕಾದರೂ ಮಾತನಾಡಬಹುದು. ನಾನು ಮೊದಲೇ ಹೇಳಿದ್ದೇನೆ – ಟೀಕೆಗಳು ಸಾಯುತ್ತವೆ, ಕೆಲಸ ಮಾತ್ರ ಉಳಿಯುತ್ತದೆ. ಮತದಾನದ ಹಕ್ಕನ್ನು ರಕ್ಷಿಸುವುದೇ ನಮ್ಮ ಸರ್ಕಾರದ ಉದ್ದೇಶ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.