
ಬೆಂಗಳೂರು, 06 ಜುಲೈ (ಹಿ.ಸ.):
ಆ್ಯಂಕರ್:ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಬಿಜೆಪಿ–ಜೆಡಿಎಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಕಾಂಗ್ರೆಸ್ ಪಕ್ಷವನ್ನು ನೇರವಾಗಿ ಎದುರಿಸಲು ಸಾಧ್ಯವಾಗದೇ ಜೆಡಿಎಸ್ ಬೆಂಬಲದ ಮೂಲಕ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದರು.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ರಾಜ್ಯದಲ್ಲಿ ಸುಮಾರು 5.65 ಲಕ್ಷ ಮತದಾರರ ಮ್ಯಾಪಿಂಗ್ ನಡೆದಿದ್ದು, ಸುಮಾರು 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದರು. ರಾಮನಗರದಲ್ಲಿ ಕಾಂಗ್ರೆಸ್ ನಾಯಕರು ಮಸೀದಿಯಲ್ಲಿ ಗಣತಿ ನಮೂನೆಗಳನ್ನು ಭರ್ತಿ ಮಾಡುತ್ತಿದ್ದಾರೆ ಎಂಬ ಕುಮಾರಸ್ವಾಮಿ ಅವರ ಆರೋಪವನ್ನು ತಳ್ಳಿಹಾಕಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಅರ್ಜಿ ಭರ್ತಿ ಮಾಡುವುದಕ್ಕೆ ಚುನಾವಣಾ ಆಯೋಗವೇ ಅವಕಾಶ ನೀಡಿದೆ ಎಂದು ಸ್ಪಷ್ಟಪಡಿಸಿದರು.
ಮೃತರ ಹೆಸರಿನಲ್ಲಿ ಮತದಾನ, ನಕಲಿ ಮತದಾರರ ಸೃಷ್ಟಿ ಮೊದಲಾದ ಅಕ್ರಮಗಳಲ್ಲಿ ಬಿಜೆಪಿ ಪರಿಣತಿ ಪಡೆದಿದೆ ಎಂದು ಆರೋಪಿಸಿದ ಹರಿಪ್ರಸಾದ್, ಕಾಂಗ್ರೆಸ್ ಎಂದಿಗೂ ಅಕ್ರಮವಾಗಿ ಚುನಾವಣೆ ಗೆಲ್ಲುವ ಅಥವಾ ಸರ್ಕಾರ ರಚಿಸುವ ಪ್ರಯತ್ನ ಮಾಡಿಲ್ಲ ಎಂದು ಹೇಳಿದರು. ರಾಮನಗರ ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಾಗ ಅಲ್ಲಿದ್ದ ಮತದಾರರ ಬಗ್ಗೆ ಯಾರೂ ಪ್ರಶ್ನೆ ಮಾಡಲಿಲ್ಲ ಎಂದು ಪ್ರತಿಪ್ರಶ್ನೆ ಹಾಕಿದರು.
ಪ್ರಹ್ಲಾದ್ ಜೋಶಿ ಅವರು ರಾಜ್ಯದ ಅಭಿವೃದ್ಧಿಗೆ ಸಂಸತ್ತಿನಲ್ಲಿ ಏನು ಮಾಡಿದ್ದಾರೆ, ಮಹದಾಯಿ ಯೋಜನೆಗೆ ಎಷ್ಟು ಪ್ರಗತಿ ತಂದಿದ್ದಾರೆ ಎಂಬುದನ್ನು ಜನತೆಗೆ ತಿಳಿಸಬೇಕು ಎಂದು ಒತ್ತಾಯಿಸಿದ ಅವರು, ಆಧಾರರಹಿತ ಆರೋಪ ಮಾಡುವ ಬದಲು ರಾಜ್ಯದ ಸಮಸ್ಯೆಗಳ ಬಗ್ಗೆ ಗಮನಹರಿಸಲಿ ಎಂದು ಹೇಳಿದರು.
ಚುನಾವಣಾ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಯ ತಯಾರಿಕೆ ಸಂವಿಧಾನದ ನಿಯಮಗಳ ಪ್ರಕಾರ ನಡೆಯಬೇಕು ಎಂದು ಹೇಳಿದ ಹರಿಪ್ರಸಾದ್, ಕೇಂದ್ರ ಸರ್ಕಾರ ಮೊದಲು ಸಿಎಎ ಮತ್ತು ಎನ್‌ಆರ್‌ಸಿ ಮೂಲಕ ಗೊಂದಲ ಸೃಷ್ಟಿಸಿತು, ಈಗ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಹಕ್ಕುಗಳಿಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ ಬಂಗಾಳದಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಕೈಬಿಟ್ಟಿರುವುದು ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಗೆದ್ದಿದ್ದ ಎರಡು ಕ್ಷೇತ್ರಗಳ ಶಾಸಕರ ಹೆಸರನ್ನೇ ಮತಪಟ್ಟಿಯಿಂದ ಕೈಬಿಡಲಾಗಿತ್ತು ಎಂದು ಆರೋಪಿಸಿದ ಅವರು, ಬಹುಮತ ಪಡೆಯಲು ಸಾಧ್ಯವಾಗದೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನಕ್ಕೆ ವಿರುದ್ಧವಾದ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬಿಎಲ್ಒಗಳಿಗೆ ಎಲ್ಲೆಡೆ ತೆರಳಲು ಸಾಧ್ಯವಾಗದ ಕಾರಣ ಸಮುದಾಯ ಭವನಗಳು, ದೇವಾಲಯಗಳು ಮತ್ತು ಮಸೀದಿಗಳಲ್ಲಿ ಕಾನೂನುಬದ್ಧವಾಗಿ ಗಣತಿ ನಮೂನೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ವಿವರಿಸಿದ ಅವರು, ಅನಕ್ಷರಸ್ಥರು ಮತ್ತು ಬಡ ಜನರಿಗೆ ಈ ಪ್ರಕ್ರಿಯೆ ಸುಲಭವಾಗಬೇಕೆಂಬ ಉದ್ದೇಶದಿಂದ ಈ ವ್ಯವಸ್ಥೆ ಮಾಡಲಾಗಿದೆ ಎಂದರು.
ಒಂದಕ್ಕಿಂತ ಹೆಚ್ಚು ಕಡೆ ಮತದಾರರಾಗಿ ನೋಂದಾಯಿಸಿಕೊಂಡಿರುವವರು, ನಕಲಿ ಮತದಾರರು ಹಾಗೂ ಮೃತಪಟ್ಟವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಬೇಕು ಎಂಬುದು ಕಾಂಗ್ರೆಸ್‌ನ ನಿಲುವು. ಆದರೆ ಯಾವುದೇ ಅರ್ಹ ಮತದಾರರ ಮತದಾನದ ಹಕ್ಕು ಕಸಿದುಕೊಳ್ಳಬಾರದು ಎಂಬುದೇ ಪಕ್ಷದ ಪ್ರಮುಖ ಕಾಳಜಿ ಎಂದು ಹೇಳಿದರು.
ಬಿಜೆಪಿಯೊಳಗೇ ಗೊಂದಲವಿದ್ದು ಅದರ ವೈಫಲ್ಯವನ್ನು ಕಾಂಗ್ರೆಸ್ ಮೇಲೆ ಹೊರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಹರಿಪ್ರಸಾದ್, ವಿಧಾನ ಪರಿಷತ್ ಚುನಾವಣೆಯ ಬಳಿಕ ಬಿಜೆಪಿ ನಾಯಕರ ರಾಜಕೀಯ ನಡವಳಿಕೆಯಲ್ಲಿ ಬದಲಾವಣೆ ಕಂಡುಬಂದಿದೆ ಎಂದು ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಹಿರಿಯ ಉಪಾಧ್ಯಕ್ಷ ವಿ.ಆರ್. ಸುದರ್ಶನ್, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.