
ಬೆಂಗಳೂರು, 07 ಜುಲೈ (ಹಿ.ಸ.):
ಆ್ಯಂಕರ್:ಕಲ್ಯಾಣ ಕರ್ನಾಟಕಕ್ಕೆ ಕಾಂಗ್ರೆಸ್ ಸರ್ಕಾರ ನೀಡಿದ್ದ ಚುನಾವಣಾ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಲ್ಯಾಣ ಕರ್ನಾಟಕ ಪ್ರವಾಸಕ್ಕೂ ಮುನ್ನ ಸರ್ಕಾರ ತನ್ನ ಸಾಧನೆಗಳ ಕುರಿತು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಜಗಜ್ಯೋತಿ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಅಶೋಕ್, ನುಡಿಗೆ ತಕ್ಕ ನಡೆ ಇದ್ದಾಗ ಮಾತ್ರ ಜನರ ವಿಶ್ವಾಸ ಗಳಿಸಲು ಸಾಧ್ಯ ಎಂದು ಹೇಳಿದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ನಡೆಸುವುದು ಅಥವಾ ಎರಡು ದಿನಗಳ ಪ್ರವಾಸ ಕೈಗೊಳ್ಳುವುದರಿಂದ ಮಾತ್ರ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಟೀಕಿಸಿರುವ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ್ದ ಪ್ರಮುಖ ಭರವಸೆಗಳ ಅನುಷ್ಠಾನದ ಬಗ್ಗೆ ಉತ್ತರ ನೀಡುವಂತೆ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರತಿ ವರ್ಷ ₹5,000 ಕೋಟಿ ಅನುದಾನ, ಬಳ್ಳಾರಿಯಲ್ಲಿ ₹5,000 ಕೋಟಿ ವೆಚ್ಚದ ಅಪೆರಲ್ ಪಾರ್ಕ್ ಸ್ಥಾಪನೆ, 100 ಪಿಯು ಕಾಲೇಜುಗಳು ಹಾಗೂ ಮಹಿಳಾ ಪದವಿ ಕಾಲೇಜುಗಳ ಸ್ಥಾಪನೆ, ಪ್ರತಿ ಹೋಬಳಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಇಂಗ್ಲಿಷ್ ಮಾಧ್ಯಮ ಶಾಲೆಗಳ ಆರಂಭ, 2,500 ಹೊಸ ಶಾಲಾ ಕೊಠಡಿಗಳ ನಿರ್ಮಾಣ, ಖಾಲಿ ಶಿಕ್ಷಕರ ಹುದ್ದೆಗಳ ಭರ್ತಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ತಲಾ ₹1 ಕೋಟಿ ಅನುದಾನ ನೀಡುವ ಭರವಸೆಗಳ ಸ್ಥಿತಿಗತಿಯನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ಆರೋಪಿಸಿರುವ ಅಶೋಕ್, ಈಗಲಾದರೂ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಜನರು ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.