
ಬೆಂಗಳೂರು, 07 ಜುಲೈ (ಹಿ.ಸ.):
ಆ್ಯಂಕರ್:ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಭಾಗಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳು ಉಕ್ಕಿ ಹರಿಯುತ್ತಿದ್ದು, ಬಿರುಗಾಳಿಯಿಂದ ಮರಗಳು ಉರುಳಿ ರಸ್ತೆ ಸಂಪರ್ಕಕ್ಕೂ ಅಡಚಣೆ ಉಂಟಾಗಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹಲವು ಜಿಲ್ಲೆಗಳ ತಾಲೂಕುಗಳಲ್ಲಿ ಇಂದು ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ ಮತ್ತು ಎನ್.ಆರ್.ಪುರ ತಾಲೂಕುಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ, ಶೃಂಗೇರಿ ತಾಲೂಕಿನಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕಳಸ ತಾಲೂಕಿನಲ್ಲಿ ಅಂಗನವಾಡಿ ಹಾಗೂ 1ರಿಂದ 7ನೇ ತರಗತಿವರೆಗಿನ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಜಾಗರ, ವಸ್ತಾರೆ, ಖಾಂಡ್ಯ, ಆಲ್ದೂರು ಮತ್ತು ಆವತಿ ಹೋಬಳಿಗಳ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೂ ರಜೆ ನೀಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕುಗಳ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬೆಳಗಾವಿ ನಗರ ಮತ್ತು ಖಾನಾಪುರ ತಾಲೂಕಿನ ಎಲ್ಲಾ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೂ ಜಿಲ್ಲಾಡಳಿತ ರಜೆ ಘೋಷಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.