
ರಾಯಚೂರು , 08 ಜುಲೈ (ಹಿ.ಸ.):
ಆ್ಯಂಕರ್ : ರಾಯಚೂರು ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನ ಡಿಜಿಟಲ ಬೆಳೆ ಸಮೀಕ್ಷೆ ಕಾರ್ಯ ಜಿಲ್ಲೆಯಾದ್ಯಂತ ಆರಂಭವಾಗಿದ್ದು, ಈಗಾಗಲೇ ರೈತರ ಬೆಳೆ ಸಮೀಕ್ಷೆ ಆಪ್ ಬಿಡುಗಡೆಯಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಸಹ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಹೊಸದಾಗಿ ಸರಳೀಕರಿಸಿದ ಬೆಳೆ ಸಮೀಕ್ಷೆ ಅಪ್ಲಿಕೇಷನ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ.
ರಾಯಚೂರು ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಮುಂಗಾರು ರೈತರ ಬೆಳೆ ಸಮೀಕ್ಷೆ 2026-27 ಎಂಬ ಹೆಸರಿನ ಮೊಬೈಲ್ ಆಪ್ ಅನ್ನು ಗೂಗಲ್ ಪ್ಲೇ-ಸ್ಟೋರ್ನಿಂದ ಅಥವಾ ಕಿಖ ಕೋಡ್ ಬಳಸಿ ಡೌನ್ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆಯ ವಿವರವನ್ನು ಬರುವ ಆಗಸ್ಟ್ 31ರೊಳಗೆ ದಾಖಲಿಸಬೇಕು.
ಹೊಸ ರೈತರ ಬೆಳೆ ಸಮೀಕ್ಷೆ ಅಪ್ಲಿಕೇಷನ್ ಫ್ರೂಟ್ಸ್ ತಂತ್ರಾಂಶದ ಎಫ್ಐಡಿ ಸಂಖ್ಯೆಗೆ ಜೋಡಣೆಯಾಗಿರುವುದರಿಂದ ಅಪ್ಲಿಕೇಷನ್ ಬಳಸಲು ರೈತರು ಫ್ರೂಟ್ಸ್ ತಂತ್ರಾಂಶದ ಎಫ್ಐಡಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ರೈತರು ಎಫ್ಐಡಿ ಸಂಖ್ಯೆ ಹೊಂದಿಲ್ಲದಿದ್ದಲ್ಲಿ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ, ತೋಟಗಾರಿಕೆ ಇಲಾಖೆ ಅಥವಾ ಕಂದಾಯ ಇಲಾಖೆಯನ್ನು ಸಂಪರ್ಕಿಸಿ ಎಫ್ಐಡಿ ಸಂಖ್ಯೆ ಮಾಡಿಸಿಕೊಳ್ಳಬಹುದು.
ಸರ್ಕಾರದ ಯೋಜನೆಗಳಿಗೆ ಬಳಕೆ: ಎನ್.ಡಿ.ಆರ್.ಎಫ್/ ಎಸ್.ಡಿ.ಆರ್.ಎಫ್. ಅಡಿಯಲ್ಲಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ನಷ್ಟ ಪರಿಹಾರ ವಿತರಿಸಲು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು. ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು. ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿ. ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು. ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ. ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಕೆ ಮಾಡಿಕೊಳ್ಳಲಾಗುತ್ತದೆ. ಜಿಲ್ಲೆಯ ರೈತರು ಈ ಅವಕಾಶದ ಸದುಪಯೋಗ ಪಡೆದುಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ತಾವೇ ಸರ್ಕಾರಕ್ಕೆ ನಿಗದಿತ ಸಮಯದೊಳಗೆ ವರದಿ ಮಾಡುವಂತೆ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ: 1800 425 3553ಕ್ಕೆ ಕರೆ ಮಾಡಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ರೈತ ಸಂಪರ್ಕ, ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕ ಮಾಡಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್