ಮಲೆನಾಡು–ಕರಾವಳಿಯಲ್ಲಿ ಭೂಕುಸಿತ ಭೀತಿ: ಸರ್ಕಾರ ಎಚ್ಚೆತ್ತುಕೊಳ್ಳಲಿ: ಆರ್. ಅಶೋಕ
ಬೆಂಗಳೂರು, 08 ಜುಲೈ (ಹಿ.ಸ.): ಆ್ಯಂಕರ್: ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಭೂಕುಸಿತದ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್
Ashok file photo


ಬೆಂಗಳೂರು, 08 ಜುಲೈ (ಹಿ.ಸ.):

ಆ್ಯಂಕರ್:

ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಭೂಕುಸಿತದ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತದ ಅಪಾಯ ಹೆಚ್ಚಿದ್ದು, ಹವಾಮಾನ ಇಲಾಖೆ ಜುಲೈ 11ರವರೆಗೆ ಹೆಚ್ಚಿನ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳು ಅಪಾಯದ ಅಂಚಿನಲ್ಲಿವೆ. ಆದರೂ ರಾಜ್ಯ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದರು.

ರಾಜ್ಯದ 1,351 ಹಳ್ಳಿಗಳು ಪ್ರಕೃತಿ ವಿಕೋಪದ ಅಪಾಯದಲ್ಲಿದ್ದು, 895 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲೂ ಅಧಿಕಾರಿಗಳು ಮತ್ತು ಸಚಿವರು ಸ್ಥಳಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸುತ್ತಿಲ್ಲ ಎಂದು ಅವರು ಟೀಕಿಸಿದರು.

ಘಟ್ಟ ಪ್ರದೇಶಗಳಲ್ಲಿ ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ಕಾಮಗಾರಿ ನಡೆಸುತ್ತಿರುವುದು ಭೂಕುಸಿತಕ್ಕೆ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿದ ಅಶೋಕ, ಇಂತಹ ಕಾಮಗಾರಿಗಳಿಗೆ ಸರ್ಕಾರ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು. ರೆಡ್ ಅಲರ್ಟ್ ಘೋಷಿತ ಪ್ರದೇಶಗಳಲ್ಲಿ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್) ತಂಡಗಳನ್ನು ತಕ್ಷಣ ನಿಯೋಜಿಸಿ, ಅಪಾಯದ ಪ್ರದೇಶಗಳಲ್ಲಿರುವ ಗ್ರಾಮಗಳು ಹಾಗೂ ಕಾರ್ಮಿಕರ ವಸತಿ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ತಜ್ಞರ ವರದಿಗಳು, ವಿಶೇಷವಾಗಿ ಕಸ್ತೂರಿರಂಗನ್ ವರದಿಯ ಶಿಫಾರಸುಗಳನ್ನು ಸರ್ಕಾರ ಜಾರಿಗೆ ತರಬೇಕು ಎಂದು ಒತ್ತಾಯಿಸಿದ ಅವರು, ಕರಾವಳಿ ಮತ್ತು ಮಲೆನಾಡಿನ ಹೈ ಅಲರ್ಟ್ ಪ್ರದೇಶಗಳಿಗೆ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸಬೇಕು ಎಂದರು.

ಮುನ್ನೆಚ್ಚರಿಕೆ ಕ್ರಮಗಳಲ್ಲಿ ನಿರ್ಲಕ್ಷ್ಯದಿಂದ ಜೀವಹಾನಿ ಸಂಭವಿಸಿದರೆ ಅದರ ಸಂಪೂರ್ಣ ಹೊಣೆ ರಾಜ್ಯ ಸರ್ಕಾರದ ಮೇಲಿದೆ ಎಂದು ಅಶೋಕ ಎಚ್ಚರಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande