
ಬೆಂಗಳೂರು, 08 ಜುಲೈ (ಹಿ.ಸ.):
ಆ್ಯಂಕರ್:ರಾಜ್ಯದ ವಿವಿಧ ಭಾಗಗಳಲ್ಲಿ ಅತಿವೃಷ್ಟಿ, ಪ್ರವಾಹ ಹಾಗೂ ಕೆಲವು ಕಡೆ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ, ಸಂತ್ರಸ್ತ ರೈತರು ಮತ್ತು ಸಾರ್ವಜನಿಕರ ನೆರವಿಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಪ್ರಕೃತಿ ವಿಕೋಪದಂತಹ ಸೂಕ್ಷ್ಮ ವಿಚಾರಗಳಲ್ಲೂ ರಾಜಕೀಯ ಮಾಡದೆ, ರೈತರಿಗೆ ತಕ್ಷಣದ ಪರಿಹಾರ ನೀಡುವುದು ಸರ್ಕಾರದ ಆದ್ಯತೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರಾಜ್ಯದ ಎಲ್ಲಾ ಸಂಕಷ್ಟದಲ್ಲಿರುವ ರೈತರಿಗೆ ಕನಿಷ್ಠ ₹50 ಸಾವಿರದವರೆಗೆ ಸಾಲಮನ್ನಾ ಘೋಷಿಸಬೇಕು. ತುರ್ತು ನಿಧಿಯಿಂದ ಮಧ್ಯಂತರ ಪರಿಹಾರ ಬಿಡುಗಡೆ ಮಾಡಬೇಕು. ಪ್ರತಿ ತಾಲೂಕಿನಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ವಿಶೇಷ ಟಾಸ್ಕ್ ಫೋರ್ಸ್ ರಚಿಸಿ ಬೆಳೆಹಾನಿ ಸಮೀಕ್ಷೆ, ಪರಿಹಾರ ವಿತರಣೆ ಹಾಗೂ ಪುನರ್ವಸತಿ ಕಾರ್ಯಗಳನ್ನು ಮೇಲ್ವಿಚಾರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲಾಧಿಕಾರಿಗಳ ಖಾತೆಗೆ ತುರ್ತು ಅನುದಾನ ಬಿಡುಗಡೆ ಮಾಡಿ ಪರಿಹಾರ ಕಾರ್ಯಗಳಿಗೆ ವೇಗ ನೀಡಬೇಕು. ಬೆಳೆಹಾನಿ ಸಮೀಕ್ಷೆಯನ್ನು ಶೀಘ್ರ ಪೂರ್ಣಗೊಳಿಸಿ ಕೇಂದ್ರ ಸರ್ಕಾರದ ನೆರವು ಪಡೆಯಲು ವರದಿ ಸಲ್ಲಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕ್ರಮ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ರಾಜಕೀಯ ಆರೋಪಗಳನ್ನು ಬದಿಗಿಟ್ಟು ಆಡಳಿತಾತ್ಮಕ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ರೈತರ ಸಾಲಮನ್ನಾ ಕುರಿತು ನೀಡಿರುವ ಭರವಸೆಯನ್ನು ಈಡೇರಿಸಿ ಸಂತ್ರಸ್ತ ರೈತರ ನೆರವಿಗೆ ಧಾವಿಸಬೇಕು ಎಂದು ಆರ್. ಅಶೋಕ್ ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.