ವಿಜಯಪುರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಂಸದ ರಮೇಶ ಜಿಗಜಿಣಗಿ ಸಭೆ
ವಿಜಯಪುರ, 08 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ಉದ್ದೇಶದಿಂದ, ಸಂಸದ ರಮೇಶ ಜಿಗಜಿಣಗಿ ಅವರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮ
ಸಭೆ


ವಿಜಯಪುರ, 08 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ಉದ್ದೇಶದಿಂದ, ಸಂಸದ ರಮೇಶ ಜಿಗಜಿಣಗಿ ಅವರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಹತ್ವದ ಸಮಾಲೋಚನಾ ಸಭೆ ನಡೆಸಿದರು.

ಸಭೆಯಲ್ಲಿ ವಿಜಯಪುರ–ಕಲಬುರ್ಗಿ ಹಾಗೂ ವಿಜಯಪುರ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಗಳನ್ನು ಚತುಷ್ಪಥ ರಸ್ತೆಗಳಾಗಿ ಅಭಿವೃದ್ಧಿಪಡಿಸುವ ಪ್ರಸ್ತಾವನೆ ಸೇರಿದಂತೆ ಹಲವು ಮಹತ್ವದ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ, ವಿಜಯಪುರ ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಹಾಗೂ ಆಡಳಿತ ಕೇಂದ್ರವಾಗಿದ್ದು, ಪ್ರತಿನಿತ್ಯ ಸಾವಿರಾರು ವಾಹನಗಳು ಕಲಬುರ್ಗಿ, ಹುಬ್ಬಳ್ಳಿ ಸೇರಿದಂತೆ ವಿವಿಧ ನಗರಗಳಿಗೆ ಸಂಚರಿಸುತ್ತಿವೆ. ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನ ರಸ್ತೆಗಳು ಸಾಕಾಗುತ್ತಿಲ್ಲ. ಆದ್ದರಿಂದ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವುದು, ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡುವುದು ಹಾಗೂ ವೇಗವಾದ ಮತ್ತು ಸುರಕ್ಷಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ಎರಡೂ ರಾಷ್ಟ್ರೀಯ ಹೆದ್ದಾರಿಗಳನ್ನು ಚತುಷ್ಪಥ ರಸ್ತೆಗಳಾಗಿ ಅಭಿವೃದ್ಧಿಪಡಿಸುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ಈ ಯೋಜನೆಗಳಿಗೆ ಸಂಬಂಧಿಸಿದ ಪೂರಕ ಅಂದಾಜು, ತಾಂತ್ರಿಕ ಪ್ರಸ್ತಾವನೆ, ಭೂಸ್ವಾಧೀನ, ಆಡಳಿತಾತ್ಮಕ ಅನುಮೋದನೆ, ಹಣಕಾಸು ವ್ಯವಸ್ಥೆ ಹಾಗೂ ಅನುಷ್ಠಾನದ ವಿವಿಧ ಹಂತಗಳ ಕುರಿತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು, ಕಾಮಗಾರಿಗಳನ್ನು ಶೀಘ್ರ ಆರಂಭಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ವಿಜಯಪುರ ವಿಮಾನ ನಿಲ್ದಾಣಕ್ಕೆ ಸುಗಮ ರಸ್ತೆ ಸಂಪರ್ಕ ಕಲ್ಪಿಸುವ ವಿಷಯಕ್ಕೂ ವಿಶೇಷ ಆದ್ಯತೆ ನೀಡಲಾಯಿತು. ರಾಷ್ಟ್ರೀಯ ಹೆದ್ದಾರಿಗಳಿಂದ ನೇರವಾಗಿ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ವಿಶೇಷ ರಸ್ತೆ ನಿರ್ಮಾಣವಾದರೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಕೈಗಾರಿಕೆ, ವ್ಯಾಪಾರ, ಪ್ರವಾಸೋದ್ಯಮ ಹಾಗೂ ಹೂಡಿಕೆಗಳಿಗೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಇದೇ ವೇಳೆ ವಿಜಯಪುರ ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ನಗರದ ಹೊರವಲಯದಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಹಾಗೂ ಮಹಾನಗರದ ಸುತ್ತಲೂ ರಿಂಗ್ ರೋಡ್ ನಿರ್ಮಿಸುವ ಅಗತ್ಯದ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು. ರಿಂಗ್ ರೋಡ್ ಹಾಗೂ ಬೈಪಾಸ್ ರಸ್ತೆ ನಿರ್ಮಾಣದಿಂದ ನಗರ ಮಧ್ಯಭಾಗದ ಸಂಚಾರ ಒತ್ತಡ ಕಡಿಮೆಯಾಗುವುದರ ಜೊತೆಗೆ ಭಾರೀ ವಾಹನಗಳ ಸಂಚಾರ ಸುಗಮವಾಗಲಿದೆ ಎಂದು ಸಂಸದರು ತಿಳಿಸಿದರು.

ಸಭೆಯಲ್ಲಿ ರಸ್ತೆ ಅಭಿವೃದ್ಧಿ ಯೋಜನೆಗಳ ಪ್ರಗತಿ, ಭವಿಷ್ಯದ ರಸ್ತೆ ಸಂಪರ್ಕ ಜಾಲ, ವಿವಿಧ ಪಟ್ಟಣಗಳಿಗೆ ಉತ್ತಮ ಸಂಪರ್ಕ ಕಲ್ಪಿಸುವ ಕಾರ್ಯಯೋಜನೆ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಕುರಿತು ಅಧಿಕಾರಿಗಳು ವಿವರವಾದ ಮಾಹಿತಿ ನೀಡಿದರು. ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ವಿಜಯಪುರ ಜಿಲ್ಲೆಯ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು, ಜಿಲ್ಲೆಯ ರಸ್ತೆ ಮೂಲಸೌಕರ್ಯವನ್ನು ರಾಷ್ಟ್ರೀಯ ಮಟ್ಟಕ್ಕೆ ಏರಿಸುವ ನಿಟ್ಟಿನಲ್ಲಿ ಹಲವು ಮಹತ್ವದ ನಿರ್ಧಾರಗಳ ಕುರಿತು ಚರ್ಚೆ ನಡೆಸಲಾಯಿತು. ವಿಜಯಪುರ ಜಿಲ್ಲೆಯನ್ನು ಉತ್ತರ ಕರ್ನಾಟಕದ ಪ್ರಮುಖ ಸಾರಿಗೆ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತಷ್ಟು ವೇಗ ನೀಡಲಾಗುವುದು ಎಂಬ ವಿಶ್ವಾಸ ವ್ಯಕ್ತವಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande