
ಗದಗ, 08 ಜುಲೈ (ಹಿ.ಸ.)
ಆ್ಯಂಕರ್:- ಗ್ರಾಮೀಣ ಪ್ರದೇಶದ ಜನರಿಗೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗದ ಅವಕಾಶ ಕಲ್ಪಿಸುವ ಉದ್ದೇಶದಿಂದ ಜಾರಿಗೆ ಬರಲಿರುವ ವಿಬಿ-ಜಿ ರಾಮ್ (ಜಿ) – ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ ಯೋಜನೆಗೆ ಗದಗ ಜಿಲ್ಲೆಯಲ್ಲಿ ಸಿದ್ಧತೆಗಳು ಆರಂಭವಾಗಿವೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯ ಬದಲಿಗೆ ಜಾರಿಯಾಗುತ್ತಿರುವ ಈ ಯೋಜನೆ ಗ್ರಾಮೀಣ ಕಾರ್ಮಿಕರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಜಿಲ್ಲೆಯಲ್ಲಿ ಇದುವರೆಗೆ ನರೇಗಾ ಯೋಜನೆಯಡಿ ಸುಮಾರು 1.63 ಲಕ್ಷ ಕುಟುಂಬಗಳು ನೋಂದಾಯಿಸಿಕೊಂಡಿದ್ದು, ಅವುಗಳಲ್ಲಿ 1.13 ಲಕ್ಷ ಕುಟುಂಬಗಳು ಸಕ್ರಿಯವಾಗಿವೆ. ಹೊಸ ಯೋಜನೆಯ ಆರಂಭಿಕ ಹಂತದಲ್ಲಿ ಈ ಸಕ್ರಿಯ ಕಾರ್ಮಿಕರಿಗೆ ಈಗಾಗಲೇ ಇರುವ ಹಳೆಯ ಜಾಬ್ ಕಾರ್ಡ್ಗಳ ಆಧಾರದಲ್ಲೇ ಕೆಲಸ ನೀಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಯೋಜನೆ ಆರಂಭದಲ್ಲಿ ಉಂಟಾಗಬಹುದಾದ ಗೊಂದಲ ತಪ್ಪಿಸುವ ಪ್ರಯತ್ನ ನಡೆದಿದೆ.
ಮುಂದಿನ ಹಂತಗಳಲ್ಲಿ ಎಲ್ಲ ಅರ್ಹ ಕಾರ್ಮಿಕರಿಗೆ 'ಗ್ರಾಮೀಣ ರೋಜ್ಗಾರ್ ಗ್ಯಾರಂಟಿ ಕಾರ್ಡ್' ಎಂಬ ಹೊಸ ಉದ್ಯೋಗ ಚೀಟಿಗಳನ್ನು ವಿತರಿಸಲು ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ಇದುವರೆಗೆ ಯಾವುದೇ ಯೋಜನೆಯಡಿ ನೋಂದಾಯಿಸಿಕೊಳ್ಳದ ಗ್ರಾಮೀಣ ಕಾರ್ಮಿಕರು ಹಾಗೂ ಯುವಕರು ಹೊಸದಾಗಿ ಅರ್ಜಿ ಸಲ್ಲಿಸಿ ಯೋಜನೆಯ ಲಾಭ ಪಡೆಯುವ ಅವಕಾಶವೂ ಇರಲಿದೆ.
ಜಿಲ್ಲೆಯ ಏಳು ತಾಲೂಕುಗಳ 122 ಗ್ರಾಮ ಪಂಚಾಯಿತಿಗಳಲ್ಲೂ ಯೋಜನೆಯನ್ನು ಏಕಕಾಲದಲ್ಲಿ ಜಾರಿಗೊಳಿಸಲು ಜಿಲ್ಲಾ ಪಂಚಾಯಿತಿ ಸಿದ್ಧತೆ ನಡೆಸಿದೆ. ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದ್ದು, ಆಯುಕ್ತಾಲಯದ ಮಾರ್ಗಸೂಚಿಯಂತೆ ಕ್ರಿಯಾ ಯೋಜನೆ ಸಿದ್ಧಪಡಿಸುವ ಕಾರ್ಯವೂ ನಡೆಯುತ್ತಿದೆ.
ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ದಿನಗೂಲಿ ₹382 ನಿಗದಿಯಾಗಿದ್ದು, ಇದು ಹಿಂದಿನ ಕೂಲಿಗಿಂತ ಹೆಚ್ಚಾಗಿದೆ. ಗ್ರಾಮೀಣ ಪ್ರದೇಶದಲ್ಲಿಯೇ ಉದ್ಯೋಗ ಲಭ್ಯವಾಗುವುದರಿಂದ ಋತುಮಾನದಲ್ಲಿ ಕೆಲಸಕ್ಕಾಗಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೆ ವಲಸೆ ಹೋಗುವವರ ಸಂಖ್ಯೆ ಕಡಿಮೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ ಮಾತನಾಡಿ, ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯ ಎಲ್ಲ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ರಿಯಾ ಯೋಜನೆ ರೂಪಿಸುವ ಕೆಲಸ ನಡೆಯುತ್ತಿದ್ದು, ಸ್ಥಳೀಯ ಕಾರ್ಮಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಕಲ್ಪಿಸುವ ಗುರಿಯಿದೆ ಎಂದು ತಿಳಿಸಿದ್ದಾರೆ.
ಹೊಸ ಯೋಜನೆಯಡಿ ಜಲ ಭದ್ರತೆ, ಗ್ರಾಮೀಣ ಮೂಲಸೌಕರ್ಯ, ಗ್ರಾಮೀಣ ಜೀವನೋಪಾಯ ಹಾಗೂ ಹವಾಮಾನ ಬದಲಾವಣೆಗೆ ಹೊಂದಿಕೊಂಡ ಕಾಮಗಾರಿಗಳು ಸೇರಿದಂತೆ ಒಟ್ಟು 318 ಮಾದರಿಯ ಕಾಮಗಾರಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಗ್ರಾಮಸಭೆಯಲ್ಲಿ ಸಿದ್ಧವಾಗುವ 'ವಿಕಸಿತ ಗ್ರಾಮ ಪಂಚಾಯಿತಿ ಪ್ಲಾನ್' ಆಧಾರವಾಗಿ ಶಾಲೆ, ಅಂಗನವಾಡಿ, ಹಾಲು ಉತ್ಪಾದಕರ ಡೈರಿ, ಧಾನ್ಯ ಸಂಗ್ರಹಣಾ ಘಟಕ, ಆಸ್ಪತ್ರೆ, ಸಮುದಾಯ ಗೋದಾಮು, ಗ್ರಂಥಾಲಯ ಹಾಗೂ ಕಲ್ಯಾಣ ಮಂಟಪ ಸೇರಿದಂತೆ ಹಲವು ಸಾರ್ವಜನಿಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
ಈ ಕಾಮಗಾರಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 60:40 ಅನುಪಾತದಲ್ಲಿ ಅನುದಾನ ಒದಗಿಸಲಿದ್ದು, ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ. ಯೋಜನೆ ಜಾರಿಗೆ ಬಂದ ಬಳಿಕ ಉದ್ಯೋಗ ಸೃಷ್ಟಿಯ ಜೊತೆಗೆ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೂ ಹೊಸ ಚೈತನ್ಯ ದೊರೆಯಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP