
ಬೆಂಗಳೂರು, 08 ಜುಲೈ (ಹಿ.ಸ.):
ಆ್ಯಂಕರ್:
ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಕೃಷಿ ಪರಿಸ್ಥಿತಿ ಕುರಿತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಕರ್ನಾಟಕದ 236 ತಾಲೂಕುಗಳ ಪೈಕಿ 151 ತಾಲೂಕುಗಳು ತೀವ್ರ ಮಳೆ ಕೊರತೆಯಿಂದ ಬಳಲುತ್ತಿವೆ ಎಂದು ತಿಳಿಸಿದ್ದಾರೆ. ಜೂನ್ ತಿಂಗಳಲ್ಲಿ ಶೇ.42ರಷ್ಟು ಮಳೆ ಕೊರತೆಯಾಗಿದ್ದು, 84.1 ಲಕ್ಷ ಹೆಕ್ಟೇರ್ ಗುರಿಯ ಪೈಕಿ ಕೇವಲ 36.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಪೂರ್ಣಗೊಂಡಿದ್ದು, ಇದು ಶೇ.43ರಷ್ಟು ಮಾತ್ರವಾಗಿದೆ ಎಂದು ಉಲ್ಲೇಖಿಸಿದ್ದಾರೆ.
ರೈತರು ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂಪುಟ ವಿಸ್ತರಣೆ ಹಾಗೂ ರಾಜಕೀಯ ಲೆಕ್ಕಾಚಾರಗಳಲ್ಲಿ ನಿರತವಾಗಿದೆ ಎಂದು ಆರೋಪಿಸಿರುವ ಅವರು, ರಾಜ್ಯದಲ್ಲಿ ಇನ್ನೂ ಪೂರ್ಣಾವಧಿ ಕೃಷಿ ಸಚಿವರಿಲ್ಲದಿರುವುದು ಆಡಳಿತದ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.
ಗ್ರಾಮೀಣ ಜನರ ಸಮಸ್ಯೆಗಳಿಗೆ ಆದ್ಯತೆ ನೀಡಿ, ತಕ್ಷಣವೇ ರೈತಪರ ಹಾಗೂ ಸಮರ್ಥ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.