ರೈತರ ರಕ್ಷಣೆಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ: ರೈತ ಮುಖಂಡ ಸಿದ್ದು ತೇಜಿ
ಹುಬ್ಬಳ್ಳಿ, 08 ಜುಲೈ (ಹಿ.ಸ.): ಆ್ಯಂಕರ್:ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ತೀವ್ರಗೊಂಡಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಪರಿಹಾರ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ರೈತ ಮುಖಂಡ ಸಿದ್ದು ತೇಜಿ ಆಗ್ರ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿದ್ದು ತೇಜಿ


ಹುಬ್ಬಳ್ಳಿ, 08 ಜುಲೈ (ಹಿ.ಸ.):

ಆ್ಯಂಕರ್:ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ತೀವ್ರಗೊಂಡಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಪರಿಹಾರ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ರೈತ ಮುಖಂಡ ಸಿದ್ದು ತೇಜಿ ಆಗ್ರಹಿಸಿದರು.

ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಹಿನ್ನಡೆ ಕಂಡಿದ್ದು, ಜಲಾಶಯಗಳು, ಕೆರೆಗಳು ಹಾಗೂ ಕೊಳವೆಬಾವಿಗಳ ನೀರಿನ ಮಟ್ಟ ಕುಸಿದಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಬಿತ್ತನೆ ಮಾಡಿದ ಬೆಳೆಗಳು ಒಣಗಿ ರೈತರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಮೇವು ಹಾಗೂ ಕುಡಿಯುವ ನೀರಿನ ಕೊರತೆಯಿಂದ ಜಾನುವಾರು ಸಾಕಣೆ ಸಂಕಷ್ಟಕ್ಕೆ ಸಿಲುಕಿದೆ. ಬ್ಯಾಂಕ್ ಮತ್ತು ಖಾಸಗಿ ಸಾಲದ ಒತ್ತಡ ಹೆಚ್ಚಾಗಿದ್ದು, ಬೆಳೆ ವಿಮೆ ಹಾಗೂ ಪರಿಹಾರ ಸಮಯಕ್ಕೆ ಸಿಗುತ್ತಿಲ್ಲ. ಕೃಷಿ ಕಾರ್ಮಿಕರಿಗೆ ಉದ್ಯೋಗದ ಕೊರತೆ ಉಂಟಾಗಿದ್ದು, ತರಕಾರಿ, ಹಣ್ಣು ಮತ್ತು ಆಹಾರ ಧಾನ್ಯಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರೂ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದರು.

ಬರಪೀಡಿತ ಪ್ರದೇಶಗಳನ್ನು ತಕ್ಷಣ ಸಮೀಕ್ಷೆ ನಡೆಸಿ ಬರಪೀಡಿತವೆಂದು ಘೋಷಿಸಬೇಕು. ರೈತರಿಗೆ ಎಕರೆಗೆ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು. ಬೆಳೆ ವಿಮೆ ಮೊತ್ತವನ್ನು ವಿಳಂಬವಿಲ್ಲದೆ ಪಾವತಿಸಬೇಕು. ಕೃಷಿ ಹಾಗೂ ಸಹಕಾರ ಬ್ಯಾಂಕ್‌ಗಳ ಸಾಲ ವಸೂಲಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಬಡ್ಡಿ ಮನ್ನಾ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಜಾನುವಾರುಗಳಿಗೆ ಮೇವು ಬ್ಯಾಂಕ್ ಆರಂಭಿಸಿ ಉಚಿತ ಮೇವು ಮತ್ತು ಕುಡಿಯುವ ನೀರು ಒದಗಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನಿರಂತರ ಕುಡಿಯುವ ನೀರು ಪೂರೈಸಬೇಕು. ನರೇಗಾ ಯೋಜನೆಯಡಿ 200 ದಿನಗಳ ಉದ್ಯೋಗ ನೀಡುವುದರೊಂದಿಗೆ ಕೂಲಿ ಹೆಚ್ಚಿಸಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್ ಪೂರೈಕೆ ಖಚಿತಪಡಿಸಿ, ಬರ ನಿರ್ವಹಣೆಗೆ ವಿಶೇಷ ಪ್ಯಾಕೇಜ್ ಘೋಷಿಸಿ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಅನುದಾನ ತರಬೇಕು ಎಂದು ಆಗ್ರಹಿಸಿದರು.

ದೀರ್ಘಾವಧಿಯಲ್ಲಿ ಕೆರೆಗಳ ಪುನರುಜ್ಜೀವನ, ಮಳೆನೀರು ಸಂಗ್ರಹಣೆ ಹಾಗೂ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಬೇಕು. ಬರಗಾಲವು ಕೇವಲ ರೈತರ ಸಮಸ್ಯೆಯಲ್ಲ; ಇದು ರಾಜ್ಯದ ಆಹಾರ ಭದ್ರತೆ, ಗ್ರಾಮೀಣ ಆರ್ಥಿಕತೆ ಮತ್ತು ಜನಜೀವನದ ಪ್ರಶ್ನೆಯಾಗಿದೆ. ಸರ್ಕಾರ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ರೈತರನ್ನು ಸಂಘಟಿಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಿದ್ದು ತೇಜಿ ಎಚ್ಚರಿಕೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande