
ಬೆಳಗಾವಿ, 09 ಜುಲೈ (ಹಿ.ಸ.):
ಆ್ಯಂಕರ್:
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿಗಳು ಹಾಗೂ ಸಾವಿರಾರು ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.
ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಹೊರಬರುತ್ತಿದ್ದಂತೆಯೇ ಕಾರ್ಯಕರ್ತರು ಡಿಕೆ... ಡಿಕೆ... ಎಂಬ ಜಯಘೋಷ ಮೊಳಗಿಸಿದರು. ಪುಷ್ಪವೃಷ್ಟಿ, ಹೂಗುಚ್ಛಗಳ ಸಮರ್ಪಣೆ ಹಾಗೂ ಘೋಷಣೆಗಳ ನಡುವೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಸಚಿವರಾದ ಎಂ.ಬಿ. ಪಾಟೀಲ ಹಾಗೂ ಸತೀಶ ಜಾರಕಿಹೊಳಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಶೋಕ ಪಟ್ಟಣ, ಬಾಬಾಸಾಹೇಬ ಪಾಟೀಲ, ಆಸೀಫ್ ಸೇಠ್, ವಿಜಯಾನಂದ ಕಾಶಪ್ಪನವರ, ಮಹೇಂದ್ರ ತಮ್ಮಣ್ಣವರ, ವಿಶ್ವಾಸ ವೈದ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ವಿಮಾನ ನಿಲ್ದಾಣದ ಹೊರಭಾಗದಲ್ಲಿ ಜಮಾಯಿಸಿದ್ದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಅವರ ವಾಹನ ಸಾಗುತ್ತಿದ್ದಂತೆ ಜೆಸಿಬಿಗಳ ಮೂಲಕ ಹೂವಿನ ಮಳೆ ಸುರಿಸಿದರು. ಪಟಾಕಿ ಸಿಡಿಸಿ, ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯ ಪರಿಸ್ಥಿತಿ, ಬೆಳೆಗಳ ಸ್ಥಿತಿ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗಾಗಿ ರಾಜ್ಯದ ವಿವಿಧ ಭಾಗಗಳಿಗೆ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು.
ನನ್ನ ಪ್ರವಾಸ ಬಸವಕಲ್ಯಾಣದಿಂದ ಆರಂಭವಾಗಿ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಬಳಿಕ ಇಂದು ಬೆಳಗಾವಿಗೆ ತಲುಪಿದೆ. ಸಚಿವರು ನನ್ನೊಂದಿಗೆ ಇದ್ದು, ಈ ಭಾಗದ ಶಾಸಕರೊಂದಿಗೆ ಸಭೆ ನಡೆಸಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದೇವೆ, ಎಂದು ಮುಖ್ಯಮಂತ್ರಿ ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.