
ವಿಜಯಪುರ, 09 ಜುಲೈ (ಹಿ.ಸ.)
ಆ್ಯಂಕರ್ : ಜುಲೈ 11, 2026ರಂದು ಜಿಲ್ಲೆಯಾದ್ಯಂತ ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಕಲಾಪಗಳು ಪೂರ್ಣ ದಿನ ಕಾರ್ಯನಿರ್ವಹಿಸಲಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಭೂಸ್ವಾಧೀನ, ಪರಿಹಾರ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗಿರುವ ಸಂತ್ರಸ್ತ ರೈತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ವಿಜಯಪುರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ. ಆನಂದ್ ಕೆ. ಮನವಿ ಮಾಡಿದ್ದಾರೆ.
ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪರಸ್ಪರ ರಾಜಿ-ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ. ಇದರಿಂದ ರೈತರು ದೀರ್ಘಕಾಲದ ನ್ಯಾಯಾಂಗ ಪ್ರಕ್ರಿಯೆಯಿಂದ ಮುಕ್ತಿ ಹೊಂದುವುದರ ಜೊತೆಗೆ ಸಮಯ ಹಾಗೂ ಹಣದ ಉಳಿತಾಯವೂ ಆಗಲಿದೆ ಎಂದು ಅವರು ತಿಳಿಸಿದ್ದಾರೆ.
ವಿಶೇಷವಾಗಿ ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಭೂಸ್ವಾಧೀನ ಮತ್ತು ಪರಿಹಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂತ್ರಸ್ತ ರೈತರು ತಮ್ಮ ಪ್ರಕರಣಗಳನ್ನು ಲೋಕ ಅದಾಲತ್ನಲ್ಲಿ ಮಂಡಿಸಿ ಶೀಘ್ರ ಇತ್ಯರ್ಥಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿಗಳು ಕರೆ ನೀಡಿದ್ದಾರೆ.
ಲೋಕ ಅದಾಲತ್ನಲ್ಲಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಕಾನೂನಾತ್ಮಕ ಮಾನ್ಯತೆ ದೊರೆಯುವುದರೊಂದಿಗೆ, ಉಭಯಪಕ್ಷಗಳಿಗೂ ತೃಪ್ತಿಕರವಾದ ಪರಿಹಾರ ದೊರೆಯುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ಸಂಬಂಧಿತ ರೈತರು ತಮ್ಮ ವಕೀಲರು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ರಾಷ್ಟ್ರೀಯ ಲೋಕ ಅದಾಲತ್ ನ್ಯಾಯವನ್ನು ಜನಸಾಮಾನ್ಯರಿಗೆ ತ್ವರಿತವಾಗಿ, ಸರಳವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ತಲುಪಿಸುವ ಮಹತ್ವದ ವೇದಿಕೆಯಾಗಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆಯ ಸಂತ್ರಸ್ತ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande