ಎಸ್ಐಆರ್ ಜನಜಾಗೃತಿ ಅಭಿಯಾನ; ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿಕೊಳ್ಳಲು ಸಾರ್ವಜನಿಕರಿಗೆ ಕರೆ
ಬಾಗಲಕೋಟೆ, 09 ಜುಲೈ (ಹಿ.ಸ.) ಆ್ಯಂಕರ್ : ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಷ್ಕರಿಸುವ ಉದ್ದೇಶದಿಂದ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ತೀವ್ರ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಾಗಲಕೋಟ ಜಿಲ್ಲೆಯ ರಾಂಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ
ಮತದಾರ


ಬಾಗಲಕೋಟೆ, 09 ಜುಲೈ (ಹಿ.ಸ.)

ಆ್ಯಂಕರ್ : ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಷ್ಕರಿಸುವ ಉದ್ದೇಶದಿಂದ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ತೀವ್ರ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಾಗಲಕೋಟ ಜಿಲ್ಲೆಯ ರಾಂಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಾಪಕ ಜನಜಾಗೃತಿ ಅಭಿಯಾನ ನಡೆಸಲಾಯಿತು.

ಶಾಸಕ ಉಮೇಶ್ ಎಚ್. ಮೇಟಿ ಅವರ ಸೂಚನೆಯ ಮೇರೆಗೆ ಹಂಡರ ಗ್ರಾಮದಿಂದ ರಾಂಪುರದವರೆಗೆ ಹಾಗೂ ತಿಮ್ಮಾಪುರ ಗ್ರಾಮದಿಂದ ಆಲೂರ ತಾಂಡಾವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಮತದಾರರ ಪಟ್ಟಿಯ ಮಹತ್ವ, ಪರಿಷ್ಕರಣೆ ಪ್ರಕ್ರಿಯೆ ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಲಾಯಿತು.

ಅಭಿಯಾನದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸವಂತಪ್ಪ ಮೇಟಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಎನ್. ರಾಂಪುರ ಅವರು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮನೆ ಮನೆಗೆ ತೆರಳಿ ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿದರು. ಈ ವೇಳೆ ಮತದಾರರ ಪಟ್ಟಿಯಲ್ಲಿ ಹೊಸ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ, ಹೆಸರಿನ ತಿದ್ದುಪಡಿ, ತಪ್ಪು ಮಾಹಿತಿಯ ಸರಿಪಡಿಕೆ ಹಾಗೂ ಮೃತಪಟ್ಟವರು ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡವರ ಹೆಸರುಗಳನ್ನು ನಿಯಮಾನುಸಾರ ತೆಗೆದುಹಾಕುವ ಕುರಿತು ವಿವರವಾದ ಮಾಹಿತಿ ನೀಡಿದರು.

ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಸರಿಯಾಗಿ ದಾಖಲಾಗಿರುವುದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ನಿರ್ಲಕ್ಷ್ಯ ವಹಿಸದೆ ತಮ್ಮ ಹೆಸರುಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕು ಎಂದು ಮುಖಂಡರು ಮನವಿ ಮಾಡಿದರು.

ಜನಜಾಗೃತಿ ಅಭಿಯಾನದ ವೇಳೆ ಗ್ರಾಮಸ್ಥರು ಮತದಾರರ ಪಟ್ಟಿಗೆ ಸಂಬಂಧಿಸಿದ ವಿವಿಧ ಪ್ರಶ್ನೆಗಳು ಮತ್ತು ಅನುಮಾನಗಳನ್ನು ಕೇಳಿ ಮಾಹಿತಿ ಪಡೆದುಕೊಂಡರು. ಅಧಿಕಾರಿಗಳು ಹಾಗೂ ಮುಖಂಡರು ಪ್ರತಿಯೊಂದು ಪ್ರಶ್ನೆಗೆ ಸಮರ್ಪಕ ಉತ್ತರ ನೀಡಿ ಸಾರ್ವಜನಿಕರಲ್ಲಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ವಿಶ್ವಾಸ ಮೂಡಿಸಿದರು. ಅಭಿಯಾನಕ್ಕೆ ಗ್ರಾಮಸ್ಥರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಜಾಗೃತಿ ಹೆಚ್ಚಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.

ಈ ಸಂದರ್ಭದಲ್ಲಿ ಅಡಿವೆಪ್ಪ ಸರೂರ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ಮನೆ ಮನೆಗೆ ತೆರಳಿ ಎಸ್ಐಆರ್ ಅಭಿಯಾನದ ಮಹತ್ವವನ್ನು ತಿಳಿಸಿ ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಸಾರ್ವಜನಿಕರ ಸಹಕಾರದೊಂದಿಗೆ ಈ ಜನಜಾಗೃತಿ ಅಭಿಯಾನ ಯಶಸ್ವಿಯಾಗಿ ನೆರವೇರಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande