
ವಿಜಯಪುರ, 10 ಆಗಸ್ಟ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ
ಬಬಲೇಶ್ವರ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರೊಂದಿಗೆ ಪ್ರಸಕ್ತ ಹಂಗಾಮಿನಲ್ಲಿ ವಿವಿಧ ಬೆಳೆಗಳ ಸ್ಥಿತಿಗತಿಯನ್ನು ಖುದ್ದಾಗಿ ಪರಿಶೀಲಿಸಲಾಯಿತು. ರೈತರ ಜಮೀನುಗಳಿಗೆ ಭೇಟಿ ನೀಡಿ, ಬೆಳೆಗಳ ಬೆಳವಣಿಗೆ, ಮಳೆಯ ಪ್ರಮಾಣ ಹಾಗೂ ಕೃಷಿ ಚಟುವಟಿಕೆಗಳ ಪ್ರಸ್ತುತ ಪರಿಸ್ಥಿತಿಯ ಕುರಿತು ಸ್ಥಳದಲ್ಲಿಯೇ ಮಾಹಿತಿ ಪಡೆದುಕೊಳ್ಳಲಾಯಿತು.
ಮಳೆ ಪ್ರಮಾಣದಲ್ಲಿ ಉಂಟಾಗಿರುವ ವ್ಯತ್ಯಾಸ ಹಾಗೂ ಹವಾಮಾನ ವೈಪರೀತ್ಯದ ಪರಿಣಾಮವಾಗಿ ಕೆಲವು ಪ್ರದೇಶಗಳಲ್ಲಿ ಬೆಳೆಗಳ ಬೆಳವಣಿಗೆ ನಿರೀಕ್ಷಿತ ಮಟ್ಟದಲ್ಲಿ ಆಗದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಜಮೀನುಗಳಿಗೆ ಭೇಟಿ ನೀಡಿದ ಸಚಿವರು ಹಾಗೂ ಅಧಿಕಾರಿಗಳು ವಿವಿಧ ಬೆಳೆಗಳ ಪರಿಸ್ಥಿತಿಯನ್ನು ಪರಿಶೀಲಿಸಿ, ರೈತರಿಂದಲೇ ವಾಸ್ತವ ಸ್ಥಿತಿಯ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ, ಅವರು ಎದುರಿಸುತ್ತಿರುವ ಸಮಸ್ಯೆಗಳು, ಬೆಳೆಗಳ ಬೆಳವಣಿಗೆಯಲ್ಲಿನ ತೊಂದರೆಗಳು, ಮಳೆಯ ಕೊರತೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಕುರಿತು ಅಹವಾಲುಗಳನ್ನು ಆಲಿಸಲಾಯಿತು. ರೈತರು ತಮ್ಮ ಜಮೀನುಗಳಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಸಚಿವರ ಗಮನಕ್ಕೆ ತಂದರು.
ರೈತರ ಸಮಸ್ಯೆಗಳನ್ನು ಆಲಿಸಿದ ಸಚಿವ ಎಂ.ಬಿ. ಪಾಟೀಲ್ ಅವರು, ಪ್ರಸಕ್ತ ಕೃಷಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸಿ, ರೈತರಿಗೆ ಅಗತ್ಯವಿರುವ ನೆರವು ಒದಗಿಸುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಬೆಳೆಗಳ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದಲೂ ಮಾಹಿತಿ ಪಡೆದು, ಅಗತ್ಯವಿರುವ ಕ್ರಮಗಳ ಬಗ್ಗೆ ಚರ್ಚಿಸಿದರು.
ಕೃಷಿ ಕ್ಷೇತ್ರವು ಗ್ರಾಮೀಣ ಆರ್ಥಿಕತೆಯ ಪ್ರಮುಖ ಆಧಾರವಾಗಿದ್ದು, ರೈತರ ಹಿತಾಸಕ್ತಿ ರಕ್ಷಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಅನ್ನದಾತರ ಶ್ರಮಕ್ಕೆ ಸೂಕ್ತ ಬೆಂಬಲ ನೀಡುವುದರ ಜೊತೆಗೆ, ಬೆಳೆ ಹಾನಿ ಅಥವಾ ಕೃಷಿ ಸಂಬಂಧಿತ ಸಮಸ್ಯೆಗಳು ಎದುರಾದ ಸಂದರ್ಭದಲ್ಲಿ ಸರ್ಕಾರದ ನೆರವು ರೈತರಿಗೆ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಈ ಸಂದರ್ಭದಲ್ಲಿ ಒತ್ತಿಹೇಳಲಾಯಿತು.
ರೈತರ ಜಮೀನುಗಳಿಗೆ ನೇರವಾಗಿ ತೆರಳಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸುವ ಮೂಲಕ ಸಮಸ್ಯೆಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ. ರೈತರ ಅಹವಾಲುಗಳನ್ನು ಸ್ಥಳದಲ್ಲಿಯೇ ಆಲಿಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸುವ ಮೂಲಕ ಪರಿಹಾರದ ಕ್ರಮಗಳನ್ನು ರೂಪಿಸುವ ಪ್ರಯತ್ನ ನಡೆಸಲಾಯಿತು.
ರೈತರು ನೆಮ್ಮದಿಯಿಂದ ಬದುಕಬೇಕು, ಕೃಷಿ ಸಮೃದ್ಧಿಯಾಗಬೇಕು ಎಂಬುದು ಸರ್ಕಾರದ ಸಂಕಲ್ಪವಾಗಿದ್ದು, ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿ ಅವರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಲಾಯಿತು.
ಬೆಳೆ ಪರಿಶೀಲನೆ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಕೃಷಿ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಮತ್ತು ರೈತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande