
ವಿಜಯಪುರ, 10 ಆಗಸ್ಟ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನಡೆಯುತ್ತಿರುವ ಬರ ಅಧ್ಯಯನ ಪ್ರವಾಸ ಇಂದು ಕೂಡ ಮುಂದುವರಿದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರು ಬಬಲೇಶ್ವರ ಮತಕ್ಷೇತ್ರದ ಸಾರವಾಡ ಗ್ರಾಮಕ್ಕೆ ಭೇಟಿ ನೀಡಿ ರೈತರ ಸಂಕಷ್ಟವನ್ನು ಖುದ್ದಾಗಿ ಆಲಿಸಿದರು.
ಸಾರವಾಡ ಗ್ರಾಮದ ವಿವಿಧ ಪ್ರದೇಶಗಳಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಚಿವರು, ಮಳೆ ಕೊರತೆಯಿಂದಾಗಿ ಜೋಳ, ಕಬ್ಬು, ಹತ್ತಿ ಸೇರಿದಂತೆ ಪ್ರಮುಖ ಬೆಳೆಗಳ ಮೇಲೆ ಉಂಟಾಗಿರುವ ಪರಿಣಾಮವನ್ನು ಪರಿಶೀಲಿಸಿದರು. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಬೆಳೆಗಳು ಸರಿಯಾಗಿ ಬೆಳೆಯದೇ ಇಳುವರಿ ಕುಸಿದಿರುವುದು ಹಾಗೂ ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದನ್ನು ಗಮನಿಸಿದರು.
ಈ ಸಂದರ್ಭದಲ್ಲಿ ರೈತರು ತಮ್ಮ ಸಮಸ್ಯೆಗಳನ್ನು ಸಚಿವರ ಮುಂದೆ ವಿವರಿಸಿ, ಮಳೆ ಕೊರತೆಯಿಂದ ಬಿತ್ತನೆ ಮಾಡಿದ ಬೆಳೆಗಳು ಹಾನಿಗೊಳಗಾಗಿದ್ದು, ಕೃಷಿ ವೆಚ್ಚವೂ ವಾಪಸ್ ಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಂಡರು. ರೈತರ ಸಂಕಷ್ಟವನ್ನು ಆಲಿಸಿದ ಸಚಿವ ಎಂ.ಬಿ. ಪಾಟೀಲ್ ಅವರು, ಸರ್ಕಾರದ ವತಿಯಿಂದ ಅಗತ್ಯ ನೆರವು ಹಾಗೂ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.
“ಜೋಳ, ಕಬ್ಬು, ಹತ್ತಿ ಬೆಳೆಗಳು ಬಾರದೆ ರೈತರು ಕಂಗಾಲಾಗಿರುವ ದೃಶ್ಯ ಮನ ಕಲಕಿತು. ಸಂಕಷ್ಟದಲ್ಲಿರುವ ನಮ್ಮ ಅನ್ನದಾತರಿಗೆ ಸರ್ಕಾರದಿಂದ ಗರಿಷ್ಠ ಪರಿಹಾರ ದೊರಕಿಸಿಕೊಡಲು ಅಗತ್ಯವಿರುವ ವೈಜ್ಞಾನಿಕ ವರದಿಯನ್ನು ಶೀಘ್ರವೇ ಸಿದ್ಧಪಡಿಸಬೇಕು” ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಬೆಳೆ ಹಾನಿಯ ಪ್ರಮಾಣವನ್ನು ವೈಜ್ಞಾನಿಕವಾಗಿ ಗುರುತಿಸಿ, ವಾಸ್ತವಾಂಶಗಳ ಆಧಾರದ ಮೇಲೆ ವರದಿ ಸಿದ್ಧಪಡಿಸುವಂತೆ ಕೃಷಿ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರೈತರಿಗೆ ಆಗಿರುವ ನಷ್ಟದ ಸಮಗ್ರ ಮಾಹಿತಿ ಸಂಗ್ರಹಿಸಿ ಸರ್ಕಾರದ ಗಮನಕ್ಕೆ ತಂದು, ಅರ್ಹ ರೈತರಿಗೆ ಗರಿಷ್ಠ ಪರಿಹಾರ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಮಳೆ ಕೊರತೆಯಿಂದಾಗಿ ಈ ಭಾಗದಲ್ಲಿ ಕೃಷಿ ಚಟುವಟಿಕೆಗಳ ಮೇಲೆ ಉಂಟಾಗಿರುವ ಪರಿಣಾಮ, ಬೆಳೆಗಳ ಸ್ಥಿತಿ, ತೇವಾಂಶದ ಕೊರತೆ ಹಾಗೂ ಇಳುವರಿ ಕುಸಿತದ ಕುರಿತು ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದುಕೊಂಡರು. ರೈತರ ಜಮೀನುಗಳಿಗೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸುವ ಮೂಲಕ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸುವ ಪ್ರಕ್ರಿಯೆಗೆ ವೇಗ ನೀಡುವಂತೆ ಸೂಚಿಸಿದರು.
ರೈತರ ಸಮಸ್ಯೆಗಳನ್ನು ಕೇವಲ ಕಚೇರಿ ಮಟ್ಟದ ವರದಿಗಳ ಮೂಲಕ ಅಂದಾಜಿಸುವ ಬದಲು, ಸ್ಥಳಕ್ಕೆ ತೆರಳಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದು, ರೈತರೊಂದಿಗೆ ನೇರವಾಗಿ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಸರ್ಕಾರ ರೈತರ ಹಿತಾಸಕ್ತಿಗೆ ಬದ್ಧವಾಗಿದ್ದು, ಬರದಿಂದ ಸಂಕಷ್ಟಕ್ಕೊಳಗಾದ ಅನ್ನದಾತರಿಗೆ ಸಾಧ್ಯವಾದಷ್ಟು ಹೆಚ್ಚಿನ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನಾಗಠಾಣ ಶಾಸಕರಾದ ವಿಠ್ಠಲ ಕಟಕಧೋಂಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರಿಷಿ ಆನಂದ್ ಸೇರಿದಂತೆ ಕೃಷಿ ಹಾಗೂ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande