
ವಿಜಯಪುರ, 10 ಆಗಸ್ಟ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ತೊಗರಿ, ಹತ್ತಿ, ಸೂರ್ಯಕಾಂತಿ, ಕಬ್ಬು ಸೇರಿದಂತೆ ಪ್ರಮುಖ ಬೆಳೆಗಳಿಗೆ ತೇವಾಂಶದ ಕೊರತೆ ಉಂಟಾಗಿ, ಇಳುವರಿ ಕುಸಿಯುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಗರಿಷ್ಠ ಪ್ರಮಾಣದ ಬರ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಳೆ ಕೊರತೆಯಿಂದಾಗಿ ಜಿಲ್ಲೆಯ ಹಲವು ಭಾಗಗಳಲ್ಲಿ ಬಿತ್ತನೆಯಾದ ಬೆಳೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬೆಳೆಯದೆ ರೈತರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕೇವಲ ಕಚೇರಿಯಲ್ಲಿ ಕುಳಿತು ಅಂದಾಜು ಮಾಡುವ ಬದಲು, ಪ್ರತಿ ರೈತನ ಜಮೀನಿಗೂ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ, ಭಾವಚಿತ್ರ ಸಹಿತ ವೈಜ್ಞಾನಿಕ ಮತ್ತು ನಿಖರವಾದ ಬೆಳೆಹಾನಿ ವರದಿಯನ್ನು ಸಿದ್ಧಪಡಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.
ಬೆಳೆಗಳ ವಾಸ್ತವ ಸ್ಥಿತಿ, ತೇವಾಂಶದ ಕೊರತೆ, ಇಳುವರಿ ಕುಸಿತ ಹಾಗೂ ಬೆಳೆ ಹಾನಿಯ ಪ್ರಮಾಣವನ್ನು ವೈಜ್ಞಾನಿಕವಾಗಿ ದಾಖಲಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಅಧಿಕಾರಿಗಳು ಸಲ್ಲಿಸುವ ವಾಸ್ತವಾಂಶಗಳಿಂದ ಕೂಡಿದ ವರದಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಜಿಲ್ಲೆಯ ರೈತರಿಗೆ ಅಗತ್ಯ ನೆರವು ಮತ್ತು ಗರಿಷ್ಠ ಪ್ರಮಾಣದ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಜಲಾಶಯಗಳಲ್ಲಿ ಸಮರ್ಪಕ ನೀರು ಸಂಗ್ರಹ
ಜಿಲ್ಲೆಯಲ್ಲಿ ಮಳೆ ಕೊರತೆಯ ಪರಿಸ್ಥಿತಿ ಎದುರಾಗಿದ್ದರೂ, ಕುಡಿಯುವ ನೀರಿನ ವಿಚಾರದಲ್ಲಿ ಸದ್ಯ ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ ಶೇ.94ಕ್ಕಿಂತಲೂ ಹೆಚ್ಚು ನೀರು ಸಂಗ್ರಹವಿದ್ದು, ವಿಜಯಪುರ ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದೇ ವೇಳೆ ಜಾನುವಾರುಗಳಿಗೆ ಅಗತ್ಯವಿರುವ ಮೇವಿನ ಲಭ್ಯತೆಯ ಬಗ್ಗೆಯೂ ಸರ್ಕಾರ ಗಮನಹರಿಸಿದ್ದು, ಜಿಲ್ಲೆಯಲ್ಲಿ ಸುಮಾರು 28 ವಾರಗಳಿಗಾಗುವಷ್ಟು ಮೇವು ದಾಸ್ತಾನು ಮಾಡಲಾಗಿದೆ. ಬರ ಪರಿಸ್ಥಿತಿ ಮತ್ತಷ್ಟು ತೀವ್ರವಾದರೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಪ್ರವಾಹ ಪರಿಹಾರದಲ್ಲಿ ವಿಜಯಪುರ ಜಿಲ್ಲೆಗೆ ಹೆಗ್ಗಳಿಕೆ
2025-26ನೇ ಸಾಲಿನ ಪ್ರವಾಹ ಹಾನಿಗೆ ಸಂಬಂಧಿಸಿದಂತೆ ವಿಜಯಪುರ ಜಿಲ್ಲೆಯಲ್ಲಿ 3 ಲಕ್ಷಕ್ಕೂ ಅಧಿಕ ರೈತರಿಗೆ ₹571.44 ಕೋಟಿ ಪರಿಹಾರವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ. ಇಷ್ಟು ದೊಡ್ಡ ಮೊತ್ತದ ಪರಿಹಾರವನ್ನು ವಿತರಿಸಿದ ರಾಜ್ಯದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೆ ವಿಜಯಪುರ ಪಾತ್ರವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದರ ಜೊತೆಗೆ ₹235.63 ಕೋಟಿ ಬೆಳೆ ವಿಮೆ ಪರಿಹಾರ ಕೂಡ ರೈತರ ಖಾತೆಗಳಿಗೆ ಜಮೆ ಮಾಡಲಾಗಿದ್ದು, ಸಂಕಷ್ಟದ ಸಂದರ್ಭದಲ್ಲಿ ರೈತರ ನೆರವಿಗೆ ಸರ್ಕಾರ ನಿಂತಿದೆ ಎಂಬುದನ್ನು ಇದು ತೋರಿಸುತ್ತದೆ.
ರೈತರ ಬೆನ್ನಿಗೆ ಸರ್ಕಾರ
ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದಾಗಿ ರೈತರು ಆತಂಕಪಡುವ ಅಗತ್ಯವಿಲ್ಲ. ರೈತರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬೆಳೆ ಹಾನಿಯ ನಿಖರ ಮಾಹಿತಿ ಸಂಗ್ರಹಿಸಿ ಸರ್ಕಾರದ ಗಮನಕ್ಕೆ ತರುವ ಮೂಲಕ ರೈತರಿಗೆ ಸಾಧ್ಯವಾದಷ್ಟು ಹೆಚ್ಚಿನ ಪರಿಹಾರ ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಎಂ.ಬಿ. ಪಾಟೀಲ್ ಭರವಸೆ ನೀಡಿದ್ದಾರೆ.
“ಬರದ ಸಂಕಷ್ಟದ ಸಮಯದಲ್ಲಿ ನಮ್ಮ ಸರ್ಕಾರ ರೈತರ ಬೆನ್ನೆಲುಬಾಗಿ ನಿಲ್ಲಲಿದೆ. ರೈತರ ಹಿತಾಸಕ್ತಿಗೆ ಯಾವುದೇ ಕಾರಣಕ್ಕೂ ಧಕ್ಕೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ತಿಳಿಸಿದ್ದಾರೆ.
ಮಳೆ ಕೊರತೆಯಿಂದಾಗಿ ಉಂಟಾಗಿರುವ ಬೆಳೆ ಹಾನಿಯನ್ನು ವಾಸ್ತವಿಕವಾಗಿ ಗುರುತಿಸಿ, ಅರ್ಹ ಪ್ರತಿಯೊಬ್ಬ ರೈತನಿಗೂ ಸರ್ಕಾರದ ಪರಿಹಾರ ಹಾಗೂ ಸೌಲಭ್ಯಗಳು ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸುವುದು ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande