
ಬಾಗಲಕೋಟೆ, 10 ಆಗಸ್ಟ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ
ಗದ್ದನಕೇರಿ ಸಮೀಪದ ಯಡಹಳ್ಳಿ ಕ್ರಾಸ್ನಲ್ಲಿ ಬಸ್ಗಳು ನಿಲುಗಡೆ ಮಾಡದೆ ತೆರಳುತ್ತಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಸೋಮವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಬಸ್ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಕೆಲಕಾಲ ರಸ್ತೆ ಮೇಲೆ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.
ಯಡಹಳ್ಳಿ ಕ್ರಾಸ್ ಮೂಲಕ ಪ್ರತಿದಿನ ನೂರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಹಾಗೂ ಗ್ರಾಮಸ್ಥರು ವಿವಿಧ ಕೆಲಸಗಳಿಗಾಗಿ ಬಸ್ಗಳನ್ನು ಅವಲಂಬಿಸಿದ್ದಾರೆ. ಆದರೆ ಪ್ರಮುಖ ಮಾರ್ಗವಾಗಿರುವ ಈ ಸ್ಥಳದಲ್ಲಿ ಹಲವು ಸಾರಿಗೆ ಬಸ್ಗಳು ನಿಲುಗಡೆ ಮಾಡದೆ ತೆರಳುತ್ತಿರುವುದರಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವಿದ್ಯಾರ್ಥಿಗಳು ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ಬಸ್ಗಾಗಿ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಬಸ್ಗಳು ನಿಲುಗಡೆ ಮಾಡದ ಕಾರಣ ಕೆಲವರು ದೂರದ ಸ್ಥಳಗಳಿಗೆ ತೆರಳಿ ಬಸ್ ಹತ್ತಬೇಕಾಗಿದೆ. ಇದರಿಂದ ಸಮಯ ವ್ಯರ್ಥವಾಗುವುದರ ಜೊತೆಗೆ ವಿದ್ಯಾರ್ಥಿಗಳ ಸುರಕ್ಷತೆಗೂ ಸಮಸ್ಯೆಯಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
“ಯಡಹಳ್ಳಿ ಕ್ರಾಸ್ನಲ್ಲಿ ನಿಯಮಿತವಾಗಿ ಬಸ್ ನಿಲುಗಡೆ ಮಾಡಬೇಕು.
ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ರಸ್ತೆ ತಡೆ ಪ್ರತಿಭಟನೆಯಿಂದ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನಗಳು ಕೆಲಕಾಲ ಸಾಲುಗಟ್ಟಿ ನಿಂತಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ ಉಂಟಾಯಿತು. ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಪರಿಹರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು ಎಂದು ತಿಳಿದುಬಂದಿದೆ.
ಯಡಹಳ್ಳಿ ಕ್ರಾಸ್ನಲ್ಲಿ ಬಸ್ ನಿಲುಗಡೆಗೆ ಶಾಶ್ವತ ಪರಿಹಾರ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಈ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳು ತಕ್ಷಣ ಗಮನಹರಿಸಿ, ಪ್ರಮುಖ ಬಸ್ಗಳಿಗೆ ನಿಲುಗಡೆ ಕಲ್ಪಿಸಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande