
ನವದೆಹಲಿ, 11 ಆಗಸ್ಟ್ (ಹಿ.ಸ.):
ಆ್ಯಂಕರ್:ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಮಹತ್ವದ ಶಿಫಾರಸು ಮಾಡಿದ್ದು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ.
ಈ ಶಿಫಾರಸಿನ ಕುರಿತು ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ದೆಹಲಿಯ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕಚೇರಿಯಲ್ಲಿ ಅಧ್ಯಕ್ಷ ವಿನೀತ್ ಗುಪ್ತಾ ನೇತೃತ್ವದಲ್ಲಿ ಬೆಳಗ್ಗೆ ಸಭೆ ನಡೆಯಿತು. ಕರ್ನಾಟಕದ ಪರವಾಗಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಸಭೆಯಲ್ಲಿ ಖುದ್ದು ಹಾಜರಾಗಿ ರಾಜ್ಯದ ಜಲಾಶಯಗಳಲ್ಲಿನ ನೀರಿನ ಮಟ್ಟ ಹಾಗೂ ವಾಸ್ತವ ಪರಿಸ್ಥಿತಿಯನ್ನು ಪ್ರಾಧಿಕಾರದ ಗಮನಕ್ಕೆ ತಂದರು.
ತಮಿಳುನಾಡಿನ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಸುಮಾರು ಒಂದೂವರೆ ಗಂಟೆ ನಡೆದ ಸಭೆಯಲ್ಲಿ ರಾಜ್ಯದ ಜಲಾಶಯಗಳಲ್ಲಿನ ನೀರಿನ ಸಂಗ್ರಹ, ಮುಂದಿನ ದಿನಗಳಲ್ಲಿ ನಿರೀಕ್ಷಿಸಲಾಗಿರುವ ಮಳೆ ಸೇರಿದಂತೆ ವಿವಿಧ ಅಂಶಗಳನ್ನು ಪರಿಗಣಿಸಿ ಈ ಶಿಫಾರಸು ಮಾಡಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.