ಗದಗ ಜಿಲ್ಲಾ ಕಾಂಗ್ರೆಸ್ ಉಳಿವಿಗೆ ಸಚಿನ್ ಪಾಟೀಲ್ ಸಾರಥ್ಯ ಅಗತ್ಯ: ಕೃಷ್ಣಾ ಹಡಪದ
ಗದಗ, 11 ಆಗಸ್ಟ್ (ಹಿ.ಸ.) ಆ್ಯಂಕರ್:- ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಸಾಂಪ್ರದಾಯಿಕ ಮತಬ್ಯಾಂಕ್ನ್ನು ಭದ್ರಪಡಿಸುವುದು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಹೆಚ್ಚಿನ ಬಹುಮತದೊಂದಿಗೆ ಗೆಲ್ಲಿಸುವ ನಿಟ್ಟಿನಲ್ಲಿ ಸಂಘಟನಾ ಚತುರ ಹ
ಫೋಟೋ


ಗದಗ, 11 ಆಗಸ್ಟ್ (ಹಿ.ಸ.)

ಆ್ಯಂಕರ್:- ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಸಾಂಪ್ರದಾಯಿಕ ಮತಬ್ಯಾಂಕ್ನ್ನು ಭದ್ರಪಡಿಸುವುದು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಹೆಚ್ಚಿನ ಬಹುಮತದೊಂದಿಗೆ ಗೆಲ್ಲಿಸುವ ನಿಟ್ಟಿನಲ್ಲಿ ಸಂಘಟನಾ ಚತುರ ಹಾಗೂ ತಳಮಟ್ಟದ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕ ಹೊಂದಿರುವ ಸಚಿನ್ ಡಿ. ಪಾಟೀಲ್ ಅವರಿಗೆ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನವನ್ನು ನೀಡಬೇಕು ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಕೃಷ್ಣಾ ಎಚ್. ಹಡಪದ ಆಗ್ರಹಿಸಿದರು.

ಗದಗ ಜಿಲ್ಲೆಯ ಪ್ರಸಕ್ತ ರಾಜಕೀಯ ಪರಿಸ್ಥಿತಿ, ಪಕ್ಷದ ಸಂಘಟನೆ ಹಾಗೂ ನಿಷ್ಠಾವಂತ ಕಾರ್ಯಕರ್ತರ ಆಶಯಗಳ ಕುರಿತು ಚರ್ಚಿಸಲು ಜಿಲ್ಲೆಗೆ ಆಗಮಿಸಿದ್ದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿ ಹಾಗೂ ಜಿಲ್ಲಾ ಮುಖ್ಯ ವೀಕ್ಷಕ ವಿವೇಕ್ ಬನ್ಸಾಲ್ ಅವರನ್ನು ಗದಗ ಜಿಲ್ಲೆಯ ಪ್ರಮುಖ ಮುಖಂಡರು ಹಾಗೂ ಜಿಲ್ಲಾ ಸವಿತಾ ಸಮಾಜದ ಪ್ರಮುಖರ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಸಚಿನ್ ಡಿ. ಪಾಟೀಲ್ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡುವಂತೆ ಒತ್ತಾಯಿಸಿ ಮನವಿ ಪತ್ರವನ್ನು ಹಸ್ತಾಂತರಿಸಲಾಯಿತು.

ಮನವಿ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೃಷ್ಣಾ ಎಚ್. ಹಡಪದ ಅವರು, ಸಚಿನ್ ಡಿ. ಪಾಟೀಲ್ ಅವರ ಸೇವೆ ಕೇವಲ ರಾಜಕೀಯ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಅವರು ಶಿಕ್ಷಣ ಕ್ಷೇತ್ರದಲ್ಲಿಯೂ ಗಣನೀಯ ಸೇವೆ ಸಲ್ಲಿಸಿದ್ದು, ಕೆ.ಎಚ್. ಪಾಟೀಲ್ ಕಾಲೇಜು ಹಾಗೂ ಪಾಲಿಟೆಕ್ನಿಕ್ ಸಂಸ್ಥೆಗಳ ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಗ್ರಾಮೀಣ ಪ್ರದೇಶದ ಬಡವರು, ದಲಿತರು, ಶೋಷಿತರು ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಶ್ರಮಿಸಿದ್ದಾರೆ ಎಂದು ಹೇಳಿದರು.

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ನೆರವು ನೀಡುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಿದ್ದಾರೆ. ಹಲವು ಬಡ ಕುಟುಂಬಗಳ ಮಕ್ಕಳ ಶುಲ್ಕವನ್ನು ಸ್ವಂತ ಖರ್ಚಿನಲ್ಲಿ ಭರಿಸಿ, ಅವರು ಶಿಕ್ಷಣ ಪೂರ್ಣಗೊಳಿಸಿ ಉದ್ಯೋಗ ಪಡೆಯಲು ನೆರವಾಗಿದ್ದಾರೆ. ಇದರಿಂದ ಅನೇಕ ಕುಟುಂಬಗಳಲ್ಲಿ ಶಿಕ್ಷಣದ ಮೂಲಕ ಸಾಮಾಜಿಕ ಹಾಗೂ ಆರ್ಥಿಕ ಬದಲಾವಣೆಗೆ ಅವಕಾಶ ಕಲ್ಪಿಸಿದ ನಾಯಕತ್ವ ಸಚಿನ್ ಪಾಟೀಲ್ ಅವರದ್ದು ಎಂದು ಹಡಪದ ಬಣ್ಣಿಸಿದರು.

ತಳಮಟ್ಟದ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಬಲಪಡಿಸುವಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಂಘಟನಾ ಶಕ್ತಿಯನ್ನು ಮಾದರಿಯಾಗಿಟ್ಟುಕೊಂಡು, ಗದಗ ಜಿಲ್ಲೆಯಲ್ಲಿಯೂ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷ ಸಂಘಟನೆಯನ್ನು ಬಲಪಡಿಸುವ ಸಾಮರ್ಥ್ಯ ಸಚಿನ್ ಪಾಟೀಲ್ ಅವರಲ್ಲಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.

ಸಚಿನ್ ಪಾಟೀಲ್ ಅವರು ಕೇವಲ ವೇದಿಕೆಗಳಲ್ಲಿ ಕಾಣಿಸಿಕೊಳ್ಳುವ ನಾಯಕರಲ್ಲ. ಸಾಮಾನ್ಯ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸಿ, ಅವರೊಂದಿಗೆ ನೇರವಾಗಿ ಸಂಪರ್ಕದಲ್ಲಿದ್ದು, ಸಂಕಷ್ಟದ ಸಂದರ್ಭದಲ್ಲಿ ಕಾರ್ಯಕರ್ತರ ಪರವಾಗಿ ನಿಲ್ಲುವ ನಾಯಕರು. ಬೂತ್ ಮಟ್ಟದಿಂದ ಪಕ್ಷದ ಸಂಘಟನೆಯನ್ನು ಬಲಪಡಿಸುವ ಅಗತ್ಯವಿದ್ದು, ಇದಕ್ಕಾಗಿ ತಳಮಟ್ಟದ ವಾಸ್ತವ ಪರಿಸ್ಥಿತಿಯನ್ನು ಅರಿತಿರುವ ನಾಯಕತ್ವ ಬೇಕಾಗಿದೆ ಎಂದು ಹಡಪದ ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಘಟನೆ ಬಲಪಡಿಸುವ ಅಗತ್ಯ

ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಪುರಸಭೆ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಕಾಂಗ್ರೆಸ್ ಪಕ್ಷಕ್ಕೆ ಪ್ರಮುಖವಾಗಿವೆ. ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಬೂತ್ ಮಟ್ಟದಲ್ಲಿ ಬಲಿಷ್ಠ ಸಂಘಟನೆ ಅಗತ್ಯವಾಗಿದೆ. ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ರಾಜಕೀಯ ಅವಕಾಶ ಕಲ್ಪಿಸುವ ಮೂಲಕ ಪಕ್ಷದ ಸಂಘಟನೆಯನ್ನು ಬಲಪಡಿಸುವ ನಾಯಕತ್ವದ ಅವಶ್ಯಕತೆ ಇದೆ ಎಂದು ನಿಯೋಗ ತಿಳಿಸಿತು.

ಸಚಿನ್ ಪಾಟೀಲ್ ಅವರ ಮಾರ್ಗದರ್ಶನ ಮತ್ತು ರಾಜಕೀಯ ಚಾಣಾಕ್ಷತನದಿಂದ ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಅನೇಕ ಸಾಮಾನ್ಯ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸಿ ಜನಪ್ರತಿನಿಧಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ಮುಖಂಡರು ಹೇಳಿದರು.

ಭಿನ್ನಾಭಿಪ್ರಾಯಗಳನ್ನು ಬಗೆಹರಿಸುವ ಸಾಮರ್ಥ್ಯ

ಗದಗ ಜಿಲ್ಲೆಯ ರಾಜಕೀಯ ಹಾಗೂ ಸಾಮಾಜಿಕ ಪರಿಸ್ಥಿತಿ ವೈವಿಧ್ಯಮಯವಾಗಿದ್ದು, ವಿವಿಧ ಸಮುದಾಯಗಳು ಹಾಗೂ ವರ್ಗಗಳನ್ನು ಒಳಗೊಂಡಿದೆ. ಇಂತಹ ಸಂದರ್ಭದಲ್ಲಿ ಪಕ್ಷದೊಳಗೆ ಉಂಟಾಗುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿ ಎಲ್ಲರನ್ನೂ ಒಗ್ಗೂಡಿಸುವ ನಾಯಕತ್ವ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಚಿನ್ ಪಾಟೀಲ್ ಅವರು ವಿವಿಧ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದು, ಪಕ್ಷದೊಳಗಿನ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಬಗೆಹರಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ನಿಯೋಗ ತಿಳಿಸಿತು.

ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ನಡುವೆ ಸಮನ್ವಯ ಸಾಧಿಸಿ, ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಸಂಘಟನಾ ಶಕ್ತಿ ಅವರಲ್ಲಿದೆ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಚಿನ್ ಪಾಟೀಲ್ ಅವರು ಸೂಕ್ತ ಅಭ್ಯರ್ಥಿಯಾಗಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಸಚಿನ್ ಡಿ. ಪಾಟೀಲ್ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡುವಂತೆ ಸಲ್ಲಿಸಲಾದ ಮನವಿಗೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಹಾಗೂ ಸಾಮಾಜಿಕ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು.

ಗದಗ ಜಿಲ್ಲಾ ಯುವ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರವಿಕುಮಾರ್ ರೆಡ್ಡಿ, ಜಿಲ್ಲಾ ಸವಿತಾ ಸಮಾಜದ ಖಜಾಂಚಿ ಅರುಣ ರಾಂಪೂರ, ನಗರಸಭೆ ಸದಸ್ಯ ಚುಮ್ಮಿ ನದಾಫ್, ಕಾಂಗ್ರೆಸ್ ಯುವ ನಾಯಕ ಅನಿಲಕುಮಾರ ಸಿದ್ದಮನಹಳ್ಳಿ, ಸಾಮಾಜಿಕ ಕಾರ್ಯಕರ್ತ ಅಬ್ದುಲಮುನಾಫ ಮುಲ್ಲಾ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ನಿಯೋಗದಲ್ಲಿ ಭಾಗವಹಿಸಿದ್ದರು.

ಕಾಂಗ್ರೆಸ್ಗೆ ಬೇಕಿರುವುದು ಭಾಷಣಕಾರರಲ್ಲ, ಹೋರಾಟಗಾರ

ಗದಗ ಜಿಲ್ಲಾ ಕಾಂಗ್ರೆಸ್ಗೆ ಇಂದು ಎಸಿ ರೂಂನಲ್ಲಿ ಕುಳಿತು ರಾಜಕೀಯ ಮಾಡುವ ಭಾಷಣಕಾರರ ಅಗತ್ಯವಿಲ್ಲ. ಕಾರ್ಯಕರ್ತರ ಪರವಾಗಿ ಬಿಸಿಲಿನಲ್ಲಿ ನಿಂತು ಹೋರಾಡುವ ಹೋರಾಟಗಾರ ಬೇಕಾಗಿದ್ದಾರೆ. ಆ ನಾಯಕತ್ವವನ್ನು ಸಚಿನ್ ಪಾಟೀಲ್ ಅವರು ನೀಡಬಲ್ಲರು ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರವಿಕುಮಾರ್ ರೆಡ್ಡಿ ಹೇಳಿದರು.

ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವಲ್ಲಿ ಡಿ.ಕೆ. ಶಿವಕುಮಾರ್ ಅವರ ಸಂಘಟನಾ ಚತುರತೆ ಹೇಗೆ ಪ್ರಮುಖವಾಗಿದೆಯೋ, ಅದೇ ರೀತಿಯಲ್ಲಿ ಗದಗ ಜಿಲ್ಲೆಯಲ್ಲಿ ಸಚಿನ್ ಪಾಟೀಲ್ ಅವರ 'ಟ್ರಬಲ್ ಶೂಟರ್' ನಾಯಕತ್ವ ಪಕ್ಷಕ್ಕೆ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ತಳಮಟ್ಟದ ಸಾಮಾನ್ಯ ಯುವಕರನ್ನು ಗುರುತಿಸಿ ಅವರಿಗೆ ರಾಜಕೀಯ ಅವಕಾಶಗಳನ್ನು ಕಲ್ಪಿಸಿ ಬೆಳೆಸುವ ಕೆಲಸವನ್ನು ಸಚಿನ್ ಪಾಟೀಲ್ ಮಾಡಿದ್ದಾರೆ. ಪಕ್ಷದ ಸಂಘಟನೆ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಬೇಕು ಎಂದು ರವಿಕುಮಾರ್ ರೆಡ್ಡಿ ಒತ್ತಾಯಿಸಿದರು.

ಹೈಕಮಾಂಡ್ ನಿರ್ಧಾರದತ್ತ ಗಮನ

ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಕುರಿತು ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಸಚಿನ್ ಡಿ. ಪಾಟೀಲ್ ಅವರ ಪರವಾಗಿ ಮುಖಂಡರು ಹಾಗೂ ಕಾರ್ಯಕರ್ತರಿಂದ ಒತ್ತಾಯ ಕೇಳಿಬಂದಿದೆ. ಜಿಲ್ಲೆಯ ರಾಜಕೀಯ ವಾಸ್ತವಾಂಶ, ಕಾರ್ಯಕರ್ತರ ಅಭಿಪ್ರಾಯ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ನಿಯೋಗ ಮನವಿ ಮಾಡಿದೆ.

ದಿಲ್ಲಿಯ ಎಐಸಿಸಿ ನಾಯಕರು ಹಾಗೂ ಬೆಂಗಳೂರಿನ ಕೆಪಿಸಿಸಿ ನಾಯಕರು ಗದಗ ಜಿಲ್ಲೆಯ ಕಾರ್ಯಕರ್ತರ ಅಭಿಪ್ರಾಯವನ್ನು ಪರಿಗಣಿಸಿ ಸಚಿನ್ ಡಿ. ಪಾಟೀಲ್ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಬೇಕು. ಇದರಿಂದ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಳ್ಳುವುದರ ಜೊತೆಗೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಲಾಭವಾಗಲಿದೆ ಎಂದು ನಿಯೋಗ ವಿಶ್ವಾಸ ವ್ಯಕ್ತಪಡಿಸಿತು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande