
ವಿಜಯಪುರ, 12 ಆಗಸ್ಟ್ (ಹಿ.ಸ.)
ಆ್ಯಂಕರ್ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಎಡಿಜಿಪಿ, ಪಿ. ಹರಿಶೇಖರನ್, ಅವರು ವಿಜಯಪುರ ಜಿಲ್ಲಾ ಪೊಲೀಸ್ ಕಾರ್ಯಾಲಯಕ್ಕೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.
ಜಿಲ್ಲಾ ಪೊಲೀಸ್ ಕಾರ್ಯಾಲಯಕ್ಕೆ ಆಗಮಿಸಿದ ಎಡಿಜಿಪಿ ಪಿ. ಹರಿಶೇಖರನ್ ಅವರನ್ನು ಜಿಲ್ಲಾ ಪೊಲೀಸ್ ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಅವರು ಪೊಲೀಸ್ ಕಾರ್ಯಾಲಯದ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಇಲಾಖೆಯ ಕಾರ್ಯನಿರ್ವಹಣೆ ಹಾಗೂ ದಾಖಲೆಗಳ ನಿರ್ವಹಣೆಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಿಗೆ ಸಂಬಂಧಿಸಿದ ಕಡತಗಳು, ದಾಖಲೆಗಳು ಹಾಗೂ ಇಲಾಖಾ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದ ಅವರು, ಜಿಲ್ಲೆಯಲ್ಲಿನ ಕಾನೂನು ಸುವ್ಯವಸ್ಥೆಯ ಸ್ಥಿತಿಗತಿ, ಅಪರಾಧ ಪ್ರಕರಣಗಳ ಸ್ವರೂಪ, ಅಪರಾಧಗಳ ಪತ್ತೆ ಹಾಗೂ ನಿಯಂತ್ರಣಕ್ಕೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹರಿಶೇಖರನ್ ಹೇಳಿದರು.
ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ವಿಶ್ವಾಸ ಮೂಡಿಸುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು.
ಅಪರಾಧ ಪ್ರಕರಣಗಳ ತನಿಖೆಯನ್ನು ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ಕೈಗೊಂಡು, ಪ್ರಕರಣಗಳ ಪತ್ತೆಗೆ ಆಧುನಿಕ ತಂತ್ರಜ್ಞಾನ ಹಾಗೂ ಲಭ್ಯವಿರುವ ಪೊಲೀಸ್ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅಪರಾಧ ನಿಯಂತ್ರಣಕ್ಕೆ ನಿರಂತರ ನಿಗಾ ವಹಿಸುವುದರ ಜೊತೆಗೆ, ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಸಾರ್ವಜನಿಕರ ದೂರುಗಳಿಗೆ ಸ್ಪಂದಿಸುವುದು, ಕಾನೂನುಬದ್ಧವಾಗಿ ಪ್ರಕರಣಗಳನ್ನು ನಿರ್ವಹಿಸುವುದು ಹಾಗೂ ಇಲಾಖೆಯ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವ ಕುರಿತು ಕೂಡ ಎಡಿಜಿಪಿ ಅವರು ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿದರು.
ವಿಜಯಪುರ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸುರಕ್ಷಿತ ವಾತಾವರಣವನ್ನು ಕಾಪಾಡಲು ಪೊಲೀಸ್ ಇಲಾಖೆ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಅವರು ಪರಿಶೀಲನೆ ನಡೆಸಿ, ಮುಂದಿನ ದಿನಗಳಲ್ಲಿಯೂ ಪರಿಣಾಮಕಾರಿ ಹಾಗೂ ಜನಸ್ನೇಹಿ ಪೊಲೀಸ್ ಸೇವೆ ನೀಡುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande