
ಬಾಗಲಕೋಟೆ, 12 ಆಗಸ್ಟ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ತಾಲೂಕು ಪಂಚಾಯಿತಿಯಲ್ಲಿ ಬುಧವಾರ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಸಕ ಉಮೇಶ ಮೇಟಿ ವಹಿಸಿದ್ದರು.
ಸಭೆಯಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ಧಿ ಯೋಜನೆಗಳು, ಕಾಮಗಾರಿಗಳ ಪ್ರಗತಿ, ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ಸಾರ್ವಜನಿಕರಿಗೆ ಕಲ್ಪಿಸಲಾಗುತ್ತಿರುವ ಮೂಲಸೌಕರ್ಯಗಳ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಯೋಜನೆಗಳ ಪ್ರಗತಿ ಹಾಗೂ ಅನುಷ್ಠಾನದ ಸ್ಥಿತಿಗತಿ ಕುರಿತು ಮಾಹಿತಿ ಪಡೆದು, ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಶಾಸಕ ಉಮೇಶ್ ಮೇಟಿ ಸೂಚಿಸಿದರು.
ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಕುಡಿಯುವ ನೀರು, ರಸ್ತೆ, ಶಿಕ್ಷಣ, ಆರೋಗ್ಯ, ಕೃಷಿ, ಪೌರ ಹಾಗೂ ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಆದ್ಯತೆ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಸರ್ಕಾರದ ಜನಪರ ಯೋಜನೆಗಳ ಪ್ರಯೋಜನಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.
ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಹಾಗೂ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು.
ಇದೇ ಸಂದರ್ಭದಲ್ಲಿ ಪಿ.ಎಚ್. ಪೂಜಾರ ಅವರ ಉಪಸ್ಥಿತಿಯಲ್ಲಿ ಪಿಎಂ ಪೋಷಣ ಯೋಜನೆಯ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವ ಯೋಜನೆಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಕ್ರಮಗಳ ಕುರಿತು ಚರ್ಚಿಸಲಾಯಿತು.
ನಂತರ ಪಿಎಂ ಪೋಷಣ ಯೋಜನೆಯಡಿ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಲಾಯಿತು. ಯೋಜನೆಯ ಮೇಲ್ವಿಚಾರಣೆ ಹಾಗೂ ಸಂಬಂಧಿತ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಈ ವಾಹನಗಳು ಸಹಕಾರಿಯಾಗಲಿವೆ ಎಂದು ತಿಳಿಸಲಾಯಿತು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಪಂಚಾಯಿತಿ ಸಿಬ್ಬಂದಿ ಹಾಗೂ ಸಂಬಂಧಿಸಿದ ಇಲಾಖೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದು, ತಮ್ಮ ಇಲಾಖೆಗಳ ಪ್ರಗತಿ ವರದಿಯನ್ನು ಮಂಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande