ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿಬೇಲಿ: ರೈತರಿಗೆ ಸೂಚನೆ
ಗದಗ, 12 ಆಗಸ್ಟ್ (ಹಿ.ಸ.) ಆ್ಯಂಕರ್:- ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಮಕ್ಕಳು, ಸಾರ್ವಜನಿಕರು ಹಾಗೂ ಜಾನುವಾರುಗಳು ಆಕಸ್ಮಿಕವಾಗಿ ಬಿದ್ದು ಅವಘಡ ಸಂಭವಿಸುವುದನ್ನು ತಡೆಯುವ ಉದ್ದೇಶದಿಂದ ಕೃಷಿ ಹೊಂಡಗಳ ಸುತ್ತಲೂ ಕಡ್ಡಾಯವಾಗಿ ತಂತಿಬೇಲಿ ಅಳವಡಿಸಿಕೊಳ್ಳುವಂತೆ ರೈತರಿಗೆ ಕೃಷಿ ಇ
ಫೋಟೋ


ಗದಗ, 12 ಆಗಸ್ಟ್ (ಹಿ.ಸ.)

ಆ್ಯಂಕರ್:- ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಮಕ್ಕಳು, ಸಾರ್ವಜನಿಕರು ಹಾಗೂ ಜಾನುವಾರುಗಳು ಆಕಸ್ಮಿಕವಾಗಿ ಬಿದ್ದು ಅವಘಡ ಸಂಭವಿಸುವುದನ್ನು ತಡೆಯುವ ಉದ್ದೇಶದಿಂದ ಕೃಷಿ ಹೊಂಡಗಳ ಸುತ್ತಲೂ ಕಡ್ಡಾಯವಾಗಿ ತಂತಿಬೇಲಿ ಅಳವಡಿಸಿಕೊಳ್ಳುವಂತೆ ರೈತರಿಗೆ ಕೃಷಿ ಇಲಾಖೆ ಸೂಚಿಸಿದೆ.

ಕರ್ನಾಟಕ ಸರ್ಕಾರವು 2023-24ನೇ ಸಾಲಿನಿಂದ ಮರು ಜಾರಿಗೊಳಿಸಿರುವ ಕೃಷಿ ಭಾಗ್ಯ ಯೋಜನೆಯನ್ನು ಪ್ಯಾಕೇಜ್ ಮಾದರಿಯಲ್ಲಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೃಷಿ ಹೊಂಡಗಳಲ್ಲಿ ಮಕ್ಕಳು ಬಿದ್ದು ಮೃತಪಟ್ಟಿರುವ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ, ಕೃಷಿ ಹೊಂಡ ಹಾಗೂ ಇನ್ನಿತರ ಜಲಮೂಲಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಕೃಷಿ ಭಾಗ್ಯ ಯೋಜನೆಯ ಮಾರ್ಗಸೂಚಿಯಂತೆ ಕೃಷಿ ಹೊಂಡ ನಿರ್ಮಿಸಿಕೊಂಡ ನಂತರ ಅದರ ಸುತ್ತಲೂ ಕಡ್ಡಾಯವಾಗಿ ತಂತಿಬೇಲಿ ಅಳವಡಿಸಿಕೊಳ್ಳಬೇಕು. ಇದರಿಂದ ಮಕ್ಕಳು ಸೇರಿದಂತೆ ಯಾವುದೇ ವ್ಯಕ್ತಿಗಳು ಅಥವಾ ಜಾನುವಾರುಗಳು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಅಪಾಯಕ್ಕೊಳಗಾಗುವುದನ್ನು ತಡೆಯಬಹುದಾಗಿದೆ.

ಹಿಂದಿನ ಫಲಾನುಭವಿಗಳಿಗೂ ಸಹಾಯಧನ

2023-24 ಹಾಗೂ 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಿಸಿಕೊಂಡು ಕೃಷಿ ಇಲಾಖೆಯಿಂದ ಸಹಾಯಧನ ಪಡೆದಿದ್ದರೂ, ತಂತಿಬೇಲಿ ಅಳವಡಿಸಿಕೊಳ್ಳದ ರೈತರಿಗೂ ಪ್ರಸಕ್ತ ಸಾಲಿನಲ್ಲಿ ತಂತಿಬೇಲಿ ಅಳವಡಿಸಿಕೊಳ್ಳಲು ಸಹಾಯಧನ ನೀಡಲು ಸರ್ಕಾರ ನಿರ್ಧರಿಸಿದೆ.

ಹೀಗಾಗಿ ಅರ್ಹ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ಸಂಬಂಧಪಟ್ಟ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅಗತ್ಯ ಮಾಹಿತಿ ಪಡೆದುಕೊಳ್ಳಬೇಕು. ಬಳಿಕ ಕೃಷಿ ಹೊಂಡದ ಸುತ್ತಲೂ ತಂತಿಬೇಲಿ ಅಳವಡಿಸಿಕೊಂಡು ಸರ್ಕಾರದ ಸಹಾಯಧನದ ಸೌಲಭ್ಯ ಪಡೆದುಕೊಳ್ಳುವಂತೆ ಗದಗ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರು ಕೃಷಿ ಹೊಂಡಗಳ ಸುರಕ್ಷತೆಯ ಬಗ್ಗೆ ನಿರ್ಲಕ್ಷ್ಯ ವಹಿಸದೆ, ಮಕ್ಕಳ ಹಾಗೂ ಜಾನುವಾರುಗಳ ಜೀವ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆ ಮನವಿ ಮಾಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande