
ಗದಗ, 12 ಆಗಸ್ಟ್ (ಹಿ.ಸ.)
ಆ್ಯಂಕರ್: ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿರುವ ಖಾಲಿ ನಿವೇಶನಗಳು ಹಾಗೂ ಖಾಲಿ ಜಾಗೆಗಳಲ್ಲಿ ಕಸ, ತ್ಯಾಜ್ಯ ವಸ್ತುಗಳು, ಕಟ್ಟಡಗಳ ಭಗ್ನಾವಶೇಷಗಳನ್ನು ಹಾಕುವುದು ಹಾಗೂ ಮುಳ್ಳು ಕಂಟಿಗಳು, ಗಿಡಗಂಟೆಗಳು ಬೆಳೆದು ಮಲೀನತೆ ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ನಗರಸಭೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹವಾಗುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಸಾರ್ವಜನಿಕರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಆತಂಕವಿದೆ. ಅಲ್ಲದೆ, ನಗರ ಸೌಂದರ್ಯಕ್ಕೂ ಧಕ್ಕೆ ಉಂಟಾಗುತ್ತಿದೆ. ಹೀಗಾಗಿ ಈ ಸಮಸ್ಯೆಯನ್ನು ನಗರಸಭೆ ಗಂಭೀರವಾಗಿ ಪರಿಗಣಿಸಿದೆ.
ನಗರಸಭೆ ವ್ಯಾಪ್ತಿಯಲ್ಲಿರುವ ಎಲ್ಲಾ ಖಾಲಿ ನಿವೇಶನ ಹಾಗೂ ಖಾಲಿ ಜಾಗೆಗಳ ಮಾಲೀಕರು ಸಾರ್ವಜನಿಕ ಪ್ರಕಟಣೆ ಹೊರಡಿಸಿದ 30 ದಿನಗಳೊಳಗಾಗಿ, ಅಂದರೆ ಸೆಪ್ಟೆಂಬರ್ 10, 2026ರೊಳಗೆ, ತಮ್ಮ ನಿವೇಶನಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಬೇಕು. ತಮ್ಮ ಖಾಲಿ ನಿವೇಶನಗಳನ್ನು ಹದ್ದುಬಸ್ತಿನಲ್ಲಿಟ್ಟುಕೊಂಡು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ನಗರಸಭೆ ಸೂಚಿಸಿದೆ.
ನಿಗದಿತ ಅವಧಿಯೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸದಿದ್ದಲ್ಲಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಎಚ್ಚರಿಕೆ ನೀಡಿದೆ. ನಗರಸಭೆ ಇಂತಹ ಕ್ರಮ ಕೈಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗದಂತೆ ಮಾಲೀಕರು ತಮ್ಮ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ತಿಳಿಸಲಾಗಿದೆ.
ಅಲ್ಲದೆ, ಯಾವ ಉದ್ದೇಶಕ್ಕಾಗಿ ನಿವೇಶನ ಖರೀದಿಸಲಾಗಿದೆಯೋ, ಆ ಉದ್ದೇಶಕ್ಕಾಗಿ ನಿಯಮಾನುಸಾರ ಗದಗ-ಬೆಟಗೇರಿ ನಗರಸಭೆ ಹಾಗೂ ನಗರ ಯೋಜನಾ ಪ್ರಾಧಿಕಾರದ ಅನುಮೋದನೆ ಪಡೆದು ಕಟ್ಟಡ ನಿರ್ಮಿಸಿಕೊಳ್ಳುವಂತೆ ನಗರಸಭೆ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP